ಎಸ್.ಐ.ಆರ್ ಪ್ರಕ್ರಿಯೆಯಲ್ಲಿ ಎಲ್ಲರೂ ಸಕ್ರಿಯವಾಗಿ ಭಾಗವಹಿಸಿ : ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ಕುಮಾರ

ಚಾಮರಾಜನಗರ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯ ಆರಂಭವಾಗಿದ್ದು, ಎಲ್ಲರೂ ಸಕ್ರಿಯವಾಗಿ ಭಾಗವಹಿಸಬೇಕು ಎಂದು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮತ್ತು ತಾಲೂಕು ಸ್ವೀಪ್ ಸಮಿತಿಯ ಅಧ್ಯಕ್ಷರಾದ ಕುಮಾರ ಅವರು ತಿಳಿಸಿದರು.

   ಕೊಳ್ಳೇಗಾಲ ಪಟ್ಟಣದ ಜೆ.ಎಸ್.ಎಸ್ ಕಾಲೇಜಿನ ಸಭಾಂಗಣದಲ್ಲಿಂದು ತಾಲೂಕು ಪಂಚಾಯತಿ ಮತ್ತು ತಾಲೂಕು ಸ್ವೀಪ್ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಿವು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್.ಒ) ಈಗಾಗಲೇ ಮನೆ ಮನೆಗೆ ಭೇಟಿ ನೀಡುತ್ತಿದ್ದಾರೆ. ಎಲ್ಲರೂ ಗಣತಿ ನಮೂನೆ (ಎನ್ಯುಮರೇಷನ್ ಫಾರಂ) ಯನ್ನು ನಿಖರವಾದ ಮಾಹಿತಿಯೊಂದಿಗೆ ಭರ್ತಿ ಮಾಡಬೇಕು. ಹೊಸದಾಗಿ ಸೇರ್ಪಡೆಯಾಗುವ ಯುವ ಮತದಾರರು ನಮೂನೆ 6ಎ ಫಾರಂ ನಲ್ಲಿ ಸೂಕ್ತ ಮಾಹಿತಿ ಸಲ್ಲಿಸಬೇಕು ಎಂದು ತಿಳಿಸಿದರು.

  ಕಾಲೇಜಿನ ವಿದ್ಯಾರ್ಥಿಗಳಲ್ಲಿ 18 ವರ್ಷ ತುಂಬಿದ ವಯಸ್ಕ ಮತದಾರರು ಹೊಸ ಮತದಾರರ ಪಟ್ಟಿಗೆ ಸೇರ್ಪಡೆಯಾಗಬೇಕು. ಹೆಚ್ಚಿನ ಮಾಹಿತಿಗಾಗಿ ನಿಮ್ಮ ಹತ್ತಿರದ ಗ್ರಾಮ ಪಂಚಾಯತಿಯಲ್ಲಿ ಎಸ್.ಐ.ಆರ್ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಳ್ಳಬಹುದಾಗಿದೆ. ಹೊಸದಾಗಿ ಮತದಾರ ಪಟ್ಟಿಗೆ ಸೇರ್ಪಡೆಗೊಳ್ಳಲು ಇದು ಉತ್ತಮ ಅವಕಾಶವಾಗಿದ್ದು, ಇದರ ಸದುಪಯೋಗಪಡೆಯಬೇಕು ಎಂದರು.

   ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯ ತಳಹದಿ ಬಲಪಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‍ಐಆರ್ ಪ್ರಕ್ರಿಯೆಯ ಮೂಲಕ ಮತದಾರರ ಪಟ್ಟಿಯಲ್ಲಿ ಅರ್ಹರನ್ನು ಸೇರಿಸುವುದು ಮತ್ತು ಅನರ್ಹರು, ಮೃತಪಟ್ಟವರ ಹೆಸರುಗಳನ್ನು ತೆಗೆಯುವ ಮೂಲಕ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಭಾಗವಹಿಸಿ ಅಗತ್ಯ ದಾಖಲೆ ಹಾಗೂ ಮಾಹಿತಿ ಒದಗಿಸಿ ಎಸ್.ಐ.ಆರ್ ಯಶಸ್ಸಿಗೆ ಸಹಕರಿಸಬೇಕು ಎಂದು ಕುಮಾರ ಅವರು ಹೇಳಿದರು.

   ಸಹಾಯಕ ಲೆಕ್ಕಾಧಿಕಾರಿ ರಾಜಣ್ಣ, ಜಿಲ್ಲಾ ಐ.ಇ.ಸಿ ಸಂಯೋಜಕರಾದ ನವೀನ, ಜೆ.ಎಸ್.ಎಸ್ ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *