ಅರ್ಹ ವಿಶೇಷಚೇತನ ಫಲಾನುಭವಿಗಳಿಗೆ ಸೌಲಭ್ಯಗಳು ದೊರೆಯಬೇಕು : ಶಾಸಕ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ವಿಕಲಚೇತನರಿಗೆ ಇರುವ ಸೌಲಭ್ಯಗಳು ಅರ್ಹ ಫಲಾನುಭವಿಗಳಿಗೆ ದೊರೆಯಬೇಕು ಎಂದು ಎಂ.ಎಸ್.ಐ.ಎಲ್. ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.

ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್.ಪಟೇಲ್ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ವಿವಿಧ ಇಲಾಖೆಗಳು, ಸ್ಥಳೀಯ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಯಾವುದೇ ಸರ್ಕಾರಿ ಕಾರ್ಯಕ್ರಮವನ್ನು ಆಯೋಜಿಸುವ ಮೊದಲು ಅದರ ಅರ್ಥ ಮತ್ತು ಪರಿಪೂರ್ಣತೆ ಪ್ರತಿಯೊಬ್ಬರಿಗೂ ತಿಳಿದಿರಬೇಕು. ವಿಕಲಚೇತರನ್ನು ಗುರುತಿಸುವಲ್ಲಿ ವೈದ್ಯರ ಪಾತ್ರ ಪ್ರಮುಖವಾಗಿದ್ದು ಎಲ್ಲಾ ವರ್ಗದಲ್ಲೂ ವಿಕಲಚೇತನರಿದ್ದಾರೆ. ನಿಜವಾದ ವಿಕಲಚೇತನರಿಗೆ ಸರ್ಕಾರದ ಸೌಲಭ್ಯಗಳಾದ ವಿದ್ಯಾರ್ಥಿವೇತನ, ಉನ್ನತ ಶಿಕ್ಷಣದಲ್ಲಿ ದಾಖಲಾತಿ, ಕ್ರೀಡೆಗೆ ಉತ್ತೇಜನ, ಪೆÇ್ರೀತ್ಸಾಹ ಧನ, ಮಾಸಾಶನ ಹಾಗೂ ಸರ್ಕಾರಿ ಹುದ್ದೆಯಲ್ಲಿ ಶೇ. 3 ರಷ್ಟು ಮೀಸಲಾತಿ ಸೌಲಭ್ಯಗಳು ತಲುಪಬೇಕು ಎಂದು ತಿಳಿಸಿದರು. 

ಸರ್ಕಾರದ ವತಿಯಿಂದ ವಿಕಲಚೇತನ ಮಹಿಳೆಯನ್ನು ಮದುವೆಯಾಗುವ ವರನಿಗೆ 50 ಸಾವಿರ ರೂ. ಪೆÇ್ರೀತ್ಸಾಹ ಧನ ನೀಡಲಾಗುವುದು. ಅನೇಕ ವಿಕಲಚೇತನರು ಗ್ರಾಮೀಣ ಪ್ರದೇಶದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಇವರ ವೇತನ ಹೆಚ್ಚಳಕ್ಕೆ ಸಚಿವರು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದರು.

ವಿಕಲಚೇತನ ಅಭ್ಯರ್ಥಿಗಳಿಗೆ ಸರ್ಕಾರಿ ಹಾಗೂ ವಿವಿಧ ಇಲಾಖೆಗಳಲ್ಲಿ ಮೀಸಲಾತಿಯಿದ್ದು ಇದರ ಸದುಪಯೋಗ ಪಡೆದುಕೊಳ್ಳಬೇಕು. ಇಲಾಖೆಗಳ ಕಾರ್ಯಕ್ರಮಕ್ಕೆ ಬಿಡುಗಡೆಯಾಗುವ ಅನುದಾನದಲ್ಲಿ ಅಂಗವಿಕಲರ ಕಲ್ಯಾಣ ನಿಧಿಗೆ ಅಗತ್ಯವಿರುವ ಹಣ ಮೀಸಲಿಡಬೇಕು. ತಾಲೂಕು ಹಾಗೂ ಜಿಲ್ಲಾಮಟ್ಟದಲ್ಲಿ ಪ್ರತಿ ಮಾಹೆಯಾನ ವಿಕಲಚೇತನರ ಅಭಿವೃದ್ಧಿಗೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ವಿಕಲಚೇತನರು ತಮ್ಮ ನ್ಯೂನತೆಗಳನ್ನು ಮರೆತು ಸಮಾಜದಲ್ಲಿ ಎಲ್ಲರಂತೆ ಬದುಕಬೇಕು. ವಿವಿಧ ಕ್ಷೇತ್ರಗಳಲ್ಲಿ ವಿಕಲಚೇತನರು ಸಾಧನೆ ಮಾಡಿದ್ದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇಂತಹವರ ಪ್ರೇರಣೆಯಿಂದ ಬದುಕನ್ನು ಹಸನಾಗಿಸಿಕೊಳ್ಳಬೇಕು ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಸಲಹೆ ಮಾಡಿದರು.

ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿಕಲಚೇತನ ವಿದ್ಯಾರ್ಥಿಗಳಿಗೆ ನೆನಪಿನ ಕಾಣಿಕೆ, ಪ್ರಮಾಣ ಪತ್ರ ನೀಡಿ ಗೌರವಿಸಲಾಯಿತು.

ಇದೇ ವೇಳೆ ಥೈಲ್ಯಾಂಡ್ ನಲ್ಲಿ ನಡೆದ ವಲ್ರ್ಡ್ ಎಬಿಲಿಟಿ ಸ್ಪೋಟ್ರ್ಸ್ ನಲ್ಲಿ ಅಂತರಾಷ್ಟ್ರೀಯ ಮಟ್ಟದ ಉದ್ದ ಜಿಗಿತ ಹಾಗೂ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದ ಬಿಸಲವಾಡಿ ಗ್ರಾಮದ ಮನೋಜ್ ಅವರನ್ನು ಸನ್ಮಾನಿಸಲಾಯಿತು. ವಿಕಲಚೇತನರ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಬಹುಮಾನ ವಿತರಿಸಲಾಯಿತು.

ಬಳಿಕ ಬ್ರೈಲ್ ಲಿಪಿ ಕ್ಯಾಲೆಂಡರ್ ಅನ್ನು ಶಾಸಕರು, ಗಣ್ಯರು, ಅಧಿಕಾರಿಗಳು, ಮಹದೇವು, ಯೋಗೇಂದ್ರ, ನಾಗೇಶ್ ಮತ್ತಿತ್ತರು ಬಿಡುಗಡೆಗೊಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರಾದ ಹೆಚ್.ಆರ್. ಸುರೇಶ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ಡಾ. ಕೆ.ಎನ್. ಮಂಜುನಾಥ, ಜಿಲ್ಲಾ ಅಂಗವಿಕಲರ ಕ್ಷೇಮಾಭಿವೃದ್ದಿ ಸಂಘದ ಅಧ್ಯಕ್ಷರಾದ ರಮೇಶ್, ಗುಂಡ್ಲುಪೇಟೆ ಶಿಶು ಅಭಿವೃದ್ಧಿ ಅಧಿಕಾರಿ ಹೇಮಾವತಿ, ಇತರರು ಕಾರ್ಯಕ್ರಮದಲ್ಲಿ ಇದ್ದರು. 

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವಿಶ್ವ ವಿಕಲಚೇತನರ ದಿನಾಚರಣೆ ಅಂಗವಾಗಿ ನಗರದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ನಡೆದ ಜಾಥಾಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಅವರು ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ವಿಕಲಚೇತನರಿಗೆ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ಜಿಲ್ಲಾಡಳಿತದ ವತಿಯಿಂದ ವಿಕಲಚೇತನರ ಸಬಲೀಕರಣಕ್ಕಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ಪ್ರಯಾಸ್ ಕಾರ್ಯಕ್ರಮದಡಿ 6 ತಿಂಗಳಿಂದ 6 ವರ್ಷದೊಳಗಿನ ಕಿವಿ ಕೇಳಿಸದ ಮಕ್ಕಳನ್ನು ಗುರುತಿಸಲಾಗುತ್ತಿದೆ.  ನ್ಯೂನತೆ ಕಂಡುಬಂದ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಿ ತಪಾಸಣೆ, ಶಸ್ತ್ರ ಚಿಕಿತ್ಸೆ ನೆರವೇರಿಸಲಾಗುತ್ತದೆ. ಡಿ.ಡಿ.ಆರ್.ಸಿ ಕಟ್ಟಡವು ಉದ್ಘಾಟನೆಗೊಂಡಿದ್ದು, ನುರಿತ ವೈದ್ಯರು ತೆರಪಿಸ್ಟ್ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.

Leave a Reply

Your email address will not be published. Required fields are marked *