ತ್ವರಿತ ಸಿದ್ದತೆಗೆ ಶಾಸಕ ಎ.ಆರ್. ಕೃಷ್ಣಮೂರ್ತಿ ಸೂಚನೆ

  • ಕೊಳ್ಳೇಗಾಲದಲ್ಲಿ ಮುಖ್ಯಮಂತ್ರಿಗಳಿಂದ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಕಾರ್ಯಕ್ರಮ
ಚಾಮರಾಜನಗರ: ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಕ್ಕೆ ಸೇರಿದ ವಿವಿಧ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಸೆಪ್ಟೆಂಬರ್ 30ರಂದು ಕೊಳ್ಳೇಗಾಲದಲ್ಲಿ ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಎಲ್ಲ ಅಗತ್ಯ ಸಿದ್ದತೆಗಳನ್ನು ತ್ವರಿತವಾಗಿ ಕೈಗೊಳ್ಳುವಂತೆ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಕೊಳ್ಳೇಗಾಲ ಪಟ್ಟಣದ ಪ್ರವಾಸಿಮಂದಿರದಲ್ಲಿಂದು ಮುಖ್ಯಮಂತ್ರಿಗಳ ಭೇಟಿಯ ಹಿನ್ನೆಲೆಯಲ್ಲಿ ನಡೆದ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು.

ಶಿಷ್ಟಾಚಾರ ಅನುಸಾರ ಕಾರ್ಯಕ್ರಮ ನಿರ್ವಹಣೆಯಾಗಬೇಕು. ವೇದಿಕೆ ನಿರ್ಮಾಣ, ಅಲಂಕಾರ, ಬೃಹತ್ ಜರ್ಮನ್ ಟೆಂಟ್, ಸಭಿಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ, ಮೊಬೈಲ್ ಶೌಚಾಲಯ, ಕುಡಿಯುವ ನೀರು, ಉಪಹಾರ, ತಾತ್ಕಾಲಿಕ ಆರೋಗ್ಯ ಶಿಬಿರ ಸೇರಿದಂತೆ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ಶಾಸಕರು ತಿಳಿಸಿದರು.

ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ಗಣ್ಯರಿಗೆ ವಸತಿ ಗೃಹ, ವಾಹನಗಳ ನಿಲುಗಡೆ ಸೇರಿದಂತೆ ಎಲ್ಲ ಅಗತ್ಯ ಸಿದ್ದತೆಗಳನ್ನು ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಕೈಗೊಳ್ಳಬೇಕು ಎಂದರು.

ಉದ್ಘಾಟನೆ ಹಾಗೂ ಶಂಕುಸ್ಥಾಪನೆಯಾಗಬೇಕಿರುವ ಕಾಮಗಾರಿಗಳಿಗೆ ಸಂಬಂಧಿಸಿದ ಅನುಷ್ಠಾನ ಇಲಾಖೆ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಸಿದ್ದತೆಗಳನ್ನು ಕೂಡಲೇ ಮಾಡಿಕೊಳ್ಳಬೇಕು. ಉದ್ಘಾಟನೆ, ಶಿಲಾನ್ಯಾಸ ಕಾಮಗಾರಿಗಳ ಕುರಿತ ಫಲಕವನ್ನು ಶಿಷ್ಟಾಚಾರ ಅನುಸಾರ ಸಿದ್ದಪಡಿಸಬೇಕು ಎಂದು ಶಾಸಕರು ತಿಳಿಸಿದರು.

ವಿವಿಧ ಇಲಾಖೆಗಳು ನಿಗಮಗಳು, ಫಲಾನುಭವಿಗಳಿಗೆ ನೀಡಬಹುದಾದ ಸವಲತ್ತುಗಳನ್ನು ಪಟ್ಟಿ ಮಾಡಿ ಕಾರ್ಯಕ್ರಮದಲ್ಲಿ ಫಲಾನುಭವಿಗಳನ್ನು ಆಹ್ವಾನಿಸಿ ವಿತರಿಸಲು ಸೂಕ್ತ ಏರ್ಪಾಡು ಮಾಡಬೇಕು. ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ಆಯೋಜಿಸುವ ಸಂಬಂಧ ರಚಿಸಲಾಗಿರುವ ವಿವಿಧ ಇಲಾಖೆಗಳ ಅಧಿಕಾರಿಗಳನ್ನೊಳಗೊಂಡ ಸಮಿತಿಗಳು ತಮಗೆ ನೀಡಿರುವ ಜವಾಬ್ದಾರಿಯನ್ನು ಹೊಣೆಗಾರಿಕೆಯಿಂದ ನಿರ್ವಹಿಸಬೇಕು ಎಂದು ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಸೂಚಿಸಿದರು.

ಜಿಲ್ಲಾಧಿಕಾರಿ ಶ್ರೀರೂಪ ಅವರು ಮಾತನಾಡಿ ಮಂಗಳವಾರ ಸಹ ಅಧಿಕಾರಿಗಳ ಸಭೆ ನಡೆಸಿ ಕಾರ್ಯಕ್ರಮದ ಸಿದ್ದತೆಗೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ಸೂಚನೆ ನೀಡಲಾಗಿದೆ. ಕಾರ್ಯಕ್ರಮದ ಯಶಸ್ವಿಗೆ ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ತಮ್ಮ ಇಲಾಖಾ ವ್ಯಾಪ್ತಿಯ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಸಂಬಂಧ ಎಲ್ಲ ಸಿದ್ದತೆಗಳನ್ನು ಸಮರ್ಪಕವಾಗಿ ಕೈಗೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್ ಕುಮಾರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್ ಕುಮಾರ್, ಆಹಾರ ಇಲಾಖೆಯ ಉಪನಿರ್ದೇಶಕರಾದ ವಸುಂಧರ ಹೆಗಡೆ, ಕೃಷಿ ಇಲಾಖೆ ಜಂಟಿ ನಿರ್ದೇಶಕರಾದ ಭಾಸ್ಕರ್, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *