ಚಾಮರಾಜನಗರ: ಬೇಸಿಗೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಕೆ.ಡಿ.ಪಿ ಸಭಾಂಗಣದಲ್ಲಿಂದು ಜಿಲ್ಲಾ ಪಂಚಾಯತ್ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳು ಮತ್ತು ಕಾರ್ಯಕ್ರಮಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಕಂಡುಬರುವ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯಾತ್ಮಕ ಗ್ರಾಮಗಳಿಗೆ ಸಂಬಂಧಪಟ್ಟ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಖುದ್ದು ಭೇಟಿ ನೀಡಿ ಶಾಶ್ವತ ಪರಿಹಾರಕ್ಕೆ ಮುಂದಾಗಬೇಕು. ಜಲ ಜೀವನ್ ಮಿಷನ್ ಯೋಜನೆಯಡಿ ಪ್ರಗತಿಯಲ್ಲಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಸಮಸ್ಯೆ ಹೊಂದಿರುವ ಗ್ರಾಮಗಳನ್ನು ಗುರುತಿಸಿ ನೀರಿನ ಸಮರ್ಪಕ ಪೂರೈಕೆಗೆ ಕ್ರಮವಹಿಸಬೇಕು ಎಂದರು.
ನರೇಗಾ ಕ್ರಿಯಾ ಯೋಜನೆಯಲ್ಲಿ ಅಂತರ್ಜಲ ವೃದ್ಧಿಸುವ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ನಿರ್ವಹಿಸಬೇಕು. ಮುಖ್ಯವಾಗಿ ಚೆಕ್ ಡ್ಯಾಂಗಳ ನಿರ್ಮಾಣ, ಬೋರ್‍ವೆಲ್ ರೀಜಾರ್ಚ್ ಫಿಟ್, ಕೆರೆ ಅಭಿವೃದ್ಧಿ ಹಾಗೂ ಇತರೆ ಅಂತರ್ಜಲ ಮಟ್ಟ ವೃದ್ಧಿಸುವಂತಹ ಕಾಮಗಾರಿಗಳನ್ನು ಕೈಗೊಳ್ಳಬೇಕು. ಇಂತಹ ಕಾಮಗಾರಿಗಳನ್ನು ಅನುμÁ್ಠನಗೊಳಿಸುವುದರಿಂದ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆ ಬರದಂತೆ ನೋಡಿಕೊಳ್ಳಬಹುದು. ನರೇಗಾ ಯೋಜನೆಯಡಿ ಬಾಕಿ ಇರುವ ಸಾಮಾಗ್ರಿ ಮೊತ್ತವನ್ನು ಪಾವತಿಸುವಂತೆ ಮತ್ತು ಸಕ್ರಿಯ ಕೂಲಿಕಾರ್ಮಿಕರ ಇ-ಕೆ.ವೈ.ಸಿ ಹಾಗೂ ಬೂದು ನೀರು ನಿರ್ವಹಣಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚನೆ ನೀಡಿದರು.
ತೆರಿಗೆ ವಸೂಲಾತಿಗೆ ಸಂಬಂಧಿಸಿದಂತೆ ಮಾರ್ಚ್ ಅಂತ್ಯದೊಳಗೆ ಹೆಚ್ಚು ಕರ ಸಂಗ್ರಹಣೆಗೆ ಕ್ರಮವಹಿಸಬೇಕು. ಜನವರಿ 26ರಂದು ಗ್ರಾಮ ಪಂಚಾಯಿತಿಗಳಲ್ಲಿ ವಿಶೇಷ ಗ್ರಾಮಸಭೆ ಆಯೋಜಿಸಿ ಮಹಾತ್ಮಗಾಂಧಿ ನರೇಗಾ ಹಾಗೂ ವಿ.ಬಿ.ಜಿ ರಾಮ್‍ಜಿ ಯೋಜನೆಗಳ ಸಾಧಕ ಬಾಧಕಗಳ ಕುರಿತು ಚರ್ಚಿಸಲು ಅಗತ್ಯ ಕ್ರಮವಹಿಸಬೇಕು. ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಮಾದರಿ ಗ್ರಾಮಗಳ ಘೋಷಣೆಗೆ ಕ್ರಮವಹಿಸಬೇಕು. ಈಗಾಗಲೇ ನಿರ್ಮಾಣವಾಗಿರುವ ಶೌಚಾಲಯಗಳಿಗೆ ವೆಚ್ಚ ಪಾವತಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಇದೇ ವೇಳೆ ನರೇಗಾ ಯೋಜನೆಯಡಿ ನಿಗದಿತ ಗುರಿಗನುಗುಣವಾಗಿ ಶೇ. 100 ರಷ್ಟು ಪ್ರಗತಿ ಹಾಗೂ ತೆರಿಗೆ ವಸೂಲಾತಿಯಲ್ಲಿ ಹೆಚ್ಚು ಪ್ರಗತಿ ಸಾಧಿಸಿದ ಗ್ರಾಮ ಪಂಚಾಯಿತಿಗಳು ಮತ್ತು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನರಾದ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ತಾಂತ್ರಿಕ ಸಹಾಯಕರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶೃತಿ, ಮುಖ್ಯ ಯೋಜನಾಧಿಕಾರಿ ಜಿ. ಹೊನ್ನರಾಜು, ಮುಖ್ಯ ಲೆಕ್ಕಾಧಿಕಾರಿ ಬಸವರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ಸಂತೋμï, ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸು, ತಾಲ್ಲೂಕು ಪಂಚಾಯಿತಿಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ಲೆಕ್ಕಾಧಿಕಾರಿಗಳು, ಸಹಾಯ ನಿರ್ದೇಶಕರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.