ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸಲು ಜಿ.ಪಂ ಸಿಇಒ ಮೋನಾ ರೋತ್ ಸೂಚನೆ

ಚಾಮರಾಜನಗರ: ಎಸ್.ಎಸ್.ಎಲ್.ಸಿ ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ತಾಲೂಕುವಾರು ಮಧ್ಯವಾರ್ಷಿಕ ಪರೀಕ್ಷೆ (ಎಸ್.ಎ-1) ಫಲಿತಾಂಶಗಳನ್ನು ಹೋಲಿಕೆ ಮಾಡಿ ಕಡಿಮೆ ಫಲಿತಾಂಶ ಪಡೆದ ತಾಲ್ಲೂಕುಗಳಲ್ಲಿ ಫಲಿತಾಂಶ ಸುಧಾರಣೆಗೆ ಅಗತ್ಯ ಕ್ರಮ ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸೂಚನೆ ನೀಡಿದರು.

   ನಗರದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ ಕೊಠಡಿಯಲ್ಲಿಂದು ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಉತ್ತಮ ಪಡಿಸುವ ಸಂಬಂಧ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

   ಮೊದಲನೇ ಪೂರ್ವ ಸಿದ್ಧತಾ ಪರೀಕ್ಷೆಗೆ ಜಿಲ್ಲೆಯಾದ್ಯಂತ ಸುಮಾರು 590 ವಿದ್ಯಾರ್ಥಿಗಳು ಗೈರುಹಾಜರಾಗಿದ್ದು, ಗೈರುಹಾಜರಾದ ಪ್ರತಿ ವಿದ್ಯಾರ್ಥಿಗಳ ಮಾಹಿತಿ ನೀಡಬೇಕು. ಗೈರು ವಿದ್ಯಾರ್ಥಿಗಳ ಮನೆಗಳಿಗೆ ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಭೇಟಿ ನೀಡಿ ಮರಳಿ ಶಾಲೆಗೆ ಕರೆತರುವ ಜವಾಬ್ದಾರಿ ವಹಿಸಿಕೊಳ್ಳಬೇಕು. ಸಿ ಗ್ರೇಡ್ ಪಡೆದಿರುವ 2753 ಮತ್ತು ಅನುತ್ತೀರ್ಣರಾದ 3376 ಸೇರಿದಂತೆ ಒಟ್ಟು 6129 ವಿದ್ಯಾರ್ಥಿಗಳ ಬಗ್ಗೆ ವಿಶೇಷ ಗಮನ ನೀಡಿ ಕನಿಷ್ಠ ಕಲಿಕೆಗೆ ಕ್ರಿಯಾ ಯೋಜನೆ ಸಿದ್ಧಪಡಿಸಿ ಬೋಧನೆ ಮಾಡುವಂತೆ ತಿಳಿಸಿದರು.

  ಎಸ್.ಎಸ್.ಎಸ್.ಎಲ್ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಿ ಈಗಾಗಲೇ ಕಲಿಕಾ ಪ್ರಗತಿ ಹೊಂದಿರುವ ಹಾಗೂ ಕಲಿಕಾ ಸುಧಾರಣೆ ಆಗಬೇಕಾದ ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ ಉತ್ತಮ ಸಾಧನೆಗೆ ಸೂಕ್ತ ಕಲಿಕಾ ಚಟುವಟಿಕೆಗಳನ್ನು ನೀಡಬೇಕು. ಪರೀಕ್ಷೆ-1ರಲ್ಲಿ ಎಲ್ಲ ವಿಷಯಗಳಲ್ಲಿ 50 ರಿಂದ 100, 100 ರಿಂದ 200 ಅಂಕಗಳನ್ನು ಪಡೆದಿರುವ ವಿದ್ಯಾರ್ಥಿಗಳ ಗುಂಪುಗಳನ್ನು ರಚಿಸಿ ಅವರಿಗೆ ಪ್ರತ್ಯೇಕ ಕ್ರಿಯಾಯೋಜನೆಗಳನ್ನು ರೂಪಿಸಿ  ತೇರ್ಗಡೆಯಾಗಲು ಕ್ರಮ ಕೈಗೊಳ್ಳಬೇಕು ಎಂದರು. 

  ಫಲಿತಾಂಶವನ್ನು ಉತ್ತಮ ಪಡಿಸುವ ಸಂಬಂಧ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಿಗೆ ಕಡ್ಡಾಯವಾಗಿ ಜಿಲ್ಲಾ ಮತ್ತು ತಾಲ್ಲೂಕುಮಟ್ಟದ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ವಿಸೃತವಾಗಿ ಚರ್ಚೆ ನಡೆಸಿ ವರದಿ ನೀಡಬೇಕು. ಪೂರ್ವಸಿದ್ಧತಾ ಪರೀಕ್ಷೆ-1ರಲ್ಲಿ ಕಡಿಮೆ ಫಲಿತಾಂಶ ಪಡೆದಿರುವ ಶಾಲಾ ಮುಖ್ಯೋಪಾದ್ಯಾಯರುಗಳಿಗೆ ಉತ್ತಮ ಫಲಿತಾಂಶಕ್ಕೆ ತಾಕೀತು ಮಾಡಬೇಕು. ಮುಂಬರುವ 2 ಮತ್ತು 3ನೇ ಪೂರ್ವ ಸಿದ್ಧತಾ ಪರೀಕ್ಷೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಲು ಸೂಕ್ಷ್ಮ ಕ್ರಿಯಾ ಯೋಜನೆ ಸಿದ್ಧಪಡಿಸಲು ಅಧಿಕಾರಿಗಳಿಗೆ ಸಿಇಒ ಅವರು ಸೂಚಿಸಿದರು. 

   ಅಲ್ಲದೇ ಇಲಾಖೆಯ ಇತರೆ ಶೈಕ್ಷಣಿಕ ಕಾರ್ಯಕ್ರಮಗಳು, ಶಾಲಾ ಕಟ್ಟಡ ಕಾಮಗಾರಿಗಳು, ಮಧ್ಯಾಹ್ನದ ಉಪಹಾರ ಯೋಜನೆ ಹಾಗೂ ಸಾಕ್ಷರತಾ ಕಾರ್ಯಕ್ರಮದ ಪ್ರಗತಿ ಪರಿಶೀಲನೆ ನಡೆಸಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಅಧಿಕಾರಿಗಳಿಗೆ ಅಗತ್ಯ ಸಲಹೆ ಮತ್ತು ಮಾರ್ಗದರ್ಶನ ನೀಡಿದರು.

  ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟೀಲ್, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಕಾಂತರಾಜು, ಎಲ್ಲಾ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಕೆ. ಸುರೇಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *