ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ರವರು ಇಂದು ಹನೂರು ತಾಲ್ಲೂಕಿನ ಅಜ್ಜೀಪುರ, ಅಂಬಿಕಾಪುರ, ಕೌದಳ್ಳಿ ಗ್ರಾಮ ಪಂಚಾಯತಿಯ ಹೊಸದೊಡ್ಡಿ, ಸತ್ತಾರ್ ಮೇಡು, ಕುರಟ್ಟಿ ಹೊಸೂರು ಗ್ರಾಮ ಪಂಚಾಯತಿಯ ಎಲ್ ಪಿ ಎಸ್ ಪ್ರಾಜೆಕ್ಟ್ ಎಫ್ ವಿಲೇಜ್ ಗ್ರಾಮಗಳಿಗೆ ಭೇಟಿ ನೀಡಿ ಜಲ ಜೀವನ್ ಮಿಷನ್ ಯೋಜನೆ ಮತ್ತು ನರೇಗಾ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದರು.
ಹನೂರು ತಾಲ್ಲೂಕಿನಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ 236 ಕಾಮಗಾರಿಗಳನ್ನು ತೆಗೆದುಕೊಂಡಿದ್ದು, ಈವರೆಗೆ 163 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದ್ದು, 98 ಕಾಮಗಾರಿಗಳನ್ನು ಗ್ರಾಮ ಪಂಚಾಯತಿಗಳಿಗೆ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಈ ಪೈಕಿ 5 ಕಾಮಗಾರಿಗಳನ್ನು ಆಯ್ಕೆ ಮಾಡಿಕೊಂಡು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಜೆಜೆಎಂ ಯೋಜನೆಯಡಿ ಅಳವಡಿಸಿರುವ ಕಾರ್ಯಾತ್ಮಕ ಗೃಹನಳ ಸಂಪರ್ಕದ ಗುಣಮಟ್ಟ, ಮೀಟರ್ ಅಳವಡಿಕೆ, ಕುಡಿಯುವ ನೀರಿನ ಪೂರೈಕೆ, ರಸ್ತೆ ಪುನಶ್ಚೇತನ, ನೀರಿನ ಗುಣಮಟ್ಟ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ , ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ ಅಳವಡಿಕೆ ಕುರಿತು ವರದಿಗಳನ್ನು ಪರಿಶೀಲಿಸಿದರು.
ಗ್ರಾಮದಲ್ಲಿನ ನೀರು ಸರಬರಾಜು ಕುರಿತು ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಭಾರ ಕಾರ್ಯಪಾಲಕ ಎಂಜಿನಿಯರ್ ಎಸ್.ಜಗದೀಶ್ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಉಮೇಶ್, ಸಹಾಯಕ ಕಾರ್ಯಪಾಲಕ ಅಭಿಯಂತರರಾದ ಸುಧನ್ವನಾಗ್, ಸಹಾಯಕ ನಿರ್ದೇಶಕರಾದ ರಾಧಾ, ಜೆಜೆಎಂ ಯೋಜನೆಯ ಜಿಲ್ಲಾ ಯೋಜನಾ ವ್ಯವಸ್ಥಾಪಕರಾದ ಆಶಾ ಸಿ. ಎಂ, ಸಹಾಯಕ ಇಂಜಿನಿಯರ್ ಪೂರ್ಣಿಮಾ, ಗ್ರಾಮ ಪಂಚಾಯತಿಗಳ ಅಧ್ಯಕ್ಷರು, ಸದಸ್ಯರು,ಅಭಿವೃದ್ದಿ ಅಧಿಕಾರಿಗಳು ಇತರರು ಇದ್ದರು.