ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಆಚರಣೆಗೆ ಸಿದ್ದತೆ ಕೈಗೊಳ್ಳಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ಚಾಮರಾಜನಗರ: ಭಾರತ ಚುನಾವಣಾ ಆಯೋಗವು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಉದ್ದೇಶದಿಂದ ಅನೇಕ ಕಾರ್ಯಕ್ರಮಗಳನ್ನು ರೂಪಿಸಿದ್ದು, ಚುನಾವಣಾ ಆಯೋಗ ಸ್ಥಾಪನೆಗೊಂಡ ಜನವರಿ 25ರಂದು 16ನೇ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಜಿಲ್ಲೆಯಲ್ಲೂ ಈ ಕಾರ್ಯಕ್ರಮಕ್ಕೆ ಪೂರಕವಾಗಿ ಸಿದ್ದತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಸೂಚನೆ ನೀಡಿದರು. 

   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಮತದಾರರ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

   ಭಾರತ ಚುನಾವಣಾ ಆಯೋಗವು 1950ರ ಜನವರಿ 25 ರಂದು ಸ್ಥಾಪನೆಗೊಂಡಿದೆ. ಇದರ ಅಂಗವಾಗಿ ಜನವರಿ 25ಅನ್ನು ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯಲ್ಲಿ ಮತದಾರರ ದಿನಂದು ಅಧಿಕಾರಿ ಸಿಬ್ಬಂದಿ, ಶಾಲಾ ಕಾಲೇಜುಗಳಲ್ಲಿ ಮತದಾರರ ಪ್ರತಿಜ್ಞಾವಿಧಿ ಸ್ವೀಕಾರ ಮಾಡಬೇಕಿದೆ. ಜಿಲ್ಲಾ, ತಾಲ್ಲೂಕು, ಹೋಬಳಿ ಮಟ್ಟದಲ್ಲಿ ಹಾಗೂ ಮತಗಟ್ಟೆ ಪ್ರದೇಶದಲ್ಲಿ ರಾಷ್ಟ್ರೀಯ ಮತದಾರರ ದಿನವನ್ನು ಆಚರಿಸಲು ಸಕಲ ಸಿದ್ದತೆಗಳನ್ನು ಮಾಡಬೇಕು ಎಂದರು. 

   ಮತದಾರರ ಸಾಕ್ಷರತಾ ಸಂಘಗಳು, ಚುನಾವಣಾ ಜಾಗೃತಿ ಸಂಘಗಳು, ಕಾಲೇಜು ಮುಖ್ಯಸ್ಥರುಗಳು, ಮತಗಟ್ಟೆ ಮಟ್ಟದ ಅಧಿಕಾರಿಗಳು, ಅಚ್ಚುಕಟ್ಟಾಗಿ ಕಾರ್ಯಕ್ರಮ ಏರ್ಪಡಿಸಬೇಕು. ಹೊಸದಾಗಿ ನೋಂದಾಯಿಸಿದ ಯುವ ಮತದಾರರು ಹಾಗೂ ವಿಶೇಷ ಚೇತನ ಯುವ ಮತದಾರರನ್ನು ಗುರುತಿಸಿ ಸಮಾರಂಭದಲ್ಲಿ ಎಪಿಕ್ ಕಾರ್ಡ್‍ಗಳನ್ನು ವಿತರಿಸಬೇಕು. ವಿವಿಧ ಹಂತದಲ್ಲಿ ಕಾರ್ಯಕ್ರಮ ಆಯೋಜನೆ ಮಾಡಿದ ದಾಖಲೆಗಳನ್ನು ಕಳುಹಿಸಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು. 

   ಜಿಲ್ಲಾಮಟ್ಟದ ಕಾರ್ಯಕ್ರಮವನ್ನು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಯೋಜನೆ ಮಾಡಬೇಕು.  ಯುವ ಮತದಾರರನ್ನು ಹೆಚ್ಚು ಸಂಖ್ಯೆಯಲ್ಲಿ ಆಹ್ವಾನಿಸಬೇಕು. ಮತದಾನದ ಅರಿವು ಮೂಡಿಸುವ ಸಲುವಾಗಿ ಆಯೋಜಿಸಲಾಗಿರುವ ಪ್ರಬಂಧ, ಭಾಷಣ, ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಬೇಕು. ಮತದಾನ, ಪ್ರಜಾಪ್ರಭುತ್ವ ಮಹತ್ವದ ಬಗ್ಗೆ ತಿಳಿಸಿಕೊಡುವ ನಿಟ್ಟಿನಲ್ಲಿ ಅಗತ್ಯವಿರುವ ಎಲ್ಲ ಏರ್ಪಾಡುಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ನಿರ್ದೇಶನ ನೀಡಿದರು. 

   ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಮಾತನಾಡಿ ಈಗಾಗಲೇ ವಿದ್ಯಾರ್ಥಿಗಳಿಗೆ ವಿವಿಧ ಹಂತಗಳಲ್ಲಿ ಮತದಾನದ ಬಗ್ಗೆ ಜಾಗೃತಿ ಮೂಡಿಸುವ ಸ್ಪರ್ಧೆಗಳನ್ನು ಕೈಗೊಳ್ಳಲಾಗಿದೆ. ಎಲ್ಲ ಮತಗಟ್ಟೆಗಳಲ್ಲಿ ಕಾರ್ಯಕ್ರಗಳಿಗೆ ಚುನಾವಣಾ ಆಯೋಗ ನೀಡಿರುವ ನಿರ್ದೇಶನ ಅನುಸಾರ ಎಲ್ಲ ವ್ಯವಸ್ಥೆ ಮಾಡಬೇಕಿದೆ ಎಂದರು. 

   ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರರಾದ ಬಸವರಾಜು, ತನ್ಮಯ್, ನಯನ, ಜಂಟಿ ಕೃಷಿ ನಿರ್ದೇಶಕರಾದ ಸುಷ್ಮ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಹೆಚ್.ಎಸ್. ಬಿಂದ್ಯಾ, ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಶಿವಪ್ರಸಾದ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕರಾದ ಡಾ. ಮಂಜುನಾಥ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಲೋಕೋಪಯೋಗಿ ಇಲಾಖೆ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಇನ್ನಿತರ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *