ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಜಿಲ್ಲೆಯಲ್ಲಿ ನಿರ್ಮಾಣವಾಗಿರುವ ರಸ್ತೆಗಳಲ್ಲಿ ಅವೈಜ್ಞಾನಿಕ ರಸ್ತೆವಿಭಜಕ(ಡಿವೈಡರ್)ಗಳಲ್ಲಿನ ಲೋಪಗಳನ್ನು ಸರಿಪಡಿಸಿ ರಸ್ತೆ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡುವಂತೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಹಾಗೂ ಉಸ್ತುವಾರಿ (ದಿಶಾ) ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಜಿಲ್ಲೆಯ ಅಭಿವೃದ್ಧಿ ಹಿತದೃಷ್ಠಿಯಿಂದ ಉತ್ತಮ ರಸ್ತೆಗಳನ್ನು ನಿರ್ಮಿಸಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಆಗಿದ್ದಾಂಗ್ಗೆ ಖುದ್ದು ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗಳನ್ನು ಪರಿಶೀಲಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡಲು ಮುಂದಾಗುವಂತೆ ಕಟ್ಟುನಿಟ್ಟಾಗಿ ಸೂಚಿಸಿದರು.
ಸಂತೇಮರಹಳ್ಳಿಯಿಂದ ಸತ್ತೇಗಾಲದವರೆಗೆ ನಿರ್ಮಿಸಿರುವ ರಸ್ತೆಯಲ್ಲಿ ಕೆಲವೆಡೆ ರಸ್ತೆ ವಿಭಜಕಗಳು, ರಸ್ತೆ ಡುಬ್ಬಗಳು, ಸೇತುವೆ ಕಾಮಗಾರಿಗಳು ಅವೈಜ್ಞಾನಿಕವಾಗಿವೆ. ಇದರಿಂದ ಇತ್ತೀಚೆಗೆ ಅಪಘಾತಗಳು ಹೆಚ್ಚಾಗಿ ಅಮಾಯಕ ಜನರು ಪ್ರಾಣ ಕಳೆದುಕೊಳ್ಳುತ್ತಿರುವುದು ಕಂಡುಬಂದಿದೆ. ಸಂತೇಮರಹಳ್ಳಿ, ಸತ್ತೇಗಾಲ, ನರೀಪುರ, ಹಾಗೂ ದೊಡ್ಡರಾಯಪೇಟೆ, ಸೋಮವಾರಪೇಟೆ ವೃತ್ತದಲ್ಲಿ ಜಂಕ್ಷನ್ ನಿರ್ಮಿಸಲು ಅಧಿಕಾರಿಗಳಿಗೆ ಕಳೆದ ಸಭೆಯಲ್ಲಿ ತಿಳಿಸಿದ್ದರೂ ಇನ್ನೂ ಸಹ ರಸ್ತೆ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ, ಮಾಹಿತಿ ಫಲಕಗಳನ್ನು ಸಮರ್ಪಕವಾಗಿ ಅಳವಡಿಸಿಲ್ಲ, ಇಂತಹ ವಿಳಂಬ ಧೋರಣೆಯನ್ನು ಸಹಿಸುವುದಿಲ್ಲ ಎಂದು ಲೋಕಸಭಾ ಸದಸ್ಯರು ತಾಕೀತು ಮಾಡಿದರು.
ನಗರದ ಜೋಡಿರಸ್ತೆ ಅಗಲೀಕರಣಕ್ಕೆ ಸಂಬಂಧಿಸಿದಂತೆ ಆಸ್ತಿಯ ಮಾಲೀಕರಿಗೆ ನಿಗದಿತ ಪರಿಹಾರ ಪಾವತಿಸಿ ರಸ್ತೆ ವಿಸ್ತರಣೆಗೆ ಕ್ರಮ ವಹಿಸಬೇಕು. ಕೋರ್ಟ್ ರಸ್ತೆ ಕಾಮಗಾರಿಯು ವಿಳಂಬವಾಗಿದೆ. ಕಾಮಗಾರಿ ವಿಳಂಬವಾದಷ್ಟೂ ಮುಂದುವರೆದ ಕಾಮಗಾರಿಗೆ ಹೆಚ್ಚುವರಿ ಅನುದಾನ ಬೇಕಾಗುವುದರಿಂದ ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಯಾವುದೇ ಸಬೂಬು ಹೇಳದೇ ರಸ್ತೆ ಕಾಮಗಾರಿಗಳನ್ನು ಶೀಘ್ರವಾಗಿ ಪೂರ್ಣಗೊಳಿಸಬೇಕು. ಕೆಲಸ ಮಾಡದ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸುವಂತೆ ನಿರ್ದೇಶನ ನೀಡಿದರು.
ಜಿಲ್ಲೆಯ ಹನೂರು ಭಾಗ ಹಾಗೂ ಕಾಡಂಚಿನ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಕುರಟ್ಟಿ ಹೊಸೂರು, ಪಳನೀಮೇಡು, ಕೌದಳ್ಳಿ ಭಾಗದಲ್ಲಿ ಅಂತರ್ಜಲ ಕುಸಿದಿದ್ದು, ಅಲ್ಲಿನ ಜನರ ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಅಮೃತ ನಗರೊತ್ಥಾನ ಯೋಜನೆಯಡಿ ಮಾಲಂಗಿಯಿಂದ ಚಾಮರಾಜನಗರಕ್ಕೆ ನೀರು ತರುವ ಟೆಂಡರ್ ಅನುಮೋದನೆಯಾಗಿದ್ದು, ಕಾಮಗಾರಿ ತ್ವರಿತವಾಗಿ ಆಗಬೇಕು. ಜಿಲ್ಲೆಯ ಯಾವುದೇ ಭಾಗದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗದಂತೆ ತಾಲೂಕು ಪಂಚಾಯಿತಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು. ಜಲಜೀವನ್ ಮಿಷನ್ ಯೋಜನೆ ಕಾಮಗಾರಿಗೆ ಅರಣ್ಯ ಅಧಿಕಾರಿಗಳು ಅಡ್ಡಿಪಡಿಸದೇ ಸಹಕಾರ ನೀಡಬೇಕು ಎಂದರು.
ಪಶುಪಾಲನಾ ಇಲಾಖೆಯಿಂದ ಅನುಷ್ಠಾನಗೊಳಿಸುತ್ತಿರುವ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಜಾನುವಾರುಗಳಿಗೆ ವಿಮೆ ಮಾಡಿಸಲಾಗುತ್ತಿದ್ದು, ಅಕಸ್ಮಿಕವಾಗಿ ಮರಣ ಹೊಂದುವ ಜಾನುವಾರುಗಳಿಗೆ ವಿಮಾ ಹಣವನ್ನು ಸಕಾಲದಲ್ಲಿ ಪಾವತಿಸಬೇಕು. ಯಾವುದೇ ಸರ್ಕಾರಿ ಭೂಮಿ, ಕೆರೆ-ಕಟ್ಟೆಗಳು, ಸ್ಮಶಾನ, ಗೋಮಾಳಗಳು ಒತ್ತುವರಿಯಾಗಿದ್ದಲ್ಲಿ ಕಂದಾಯ ಅಧಿಕಾರಿಗಳು ಜಾಗದ ಸರ್ವೇ ಮಾಡಿ ಒತ್ತುವರಿ ತೆರವುಗೊಳಿಸಬೇಕು ಎಂದು ಲೋಕಸಭಾ ಸದಸ್ಯರು ಅಧಿಕಾರಿಗಳಿಗೆ ತಿಳಿಸಿದರು.
ಇತ್ತೀಚೆಗೆ ಯಳಂದೂರು ಆಸ್ಪತ್ರೆಯಲ್ಲಿ ನೀರಿನ ಸಮಸ್ಯೆ ಎದುರಾಗಿ ಡಯಾಲಿಸಿಸ್ ಚಿಕಿತ್ಸೆಗೆ ರೋಗಿಗಳಿಗೆ ತೊಂದರೆಯಾಗಿರುವುದು ಗಮನಕ್ಕೆ ಬಂದಿದೆ. ಮುಂದಿನ ದಿನಗಳಲ್ಲಿ ಇದು ಮರುಕಳಿಸಬಾರದು. ಗ್ರಾಮೀಣ ಭಾಗದ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ರಾತ್ರಿವೇಳೆಯಲ್ಲಿ ಲಭ್ಯರಿರಬೇಕು. ನಗರದ ಜಿಲ್ಲಾಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಮಧ್ಯಾಹ್ನ 2 ಗಂಟೆಯ ನಂತರವೂ ಜನರಿಗೆ ವೈದ್ಯಕೀಯ ಸೇವೆ ಸಮರ್ಪಕವಾಗಿ ಸಿಗುವಂತಾಗಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳು ಬಾರದ ಹಾಗೇ ಆರೋಗ್ಯ ಇಲಾಖೆ ಅಧಿಕಾರಿಗಳು ನಿಗಾ ವಹಿಸುವಂತೆ ಸೂಚಿಸಿದರು.
ಇನ್ನುಳಿದಂತೆ ಕೃಷಿ, ತೋಟಗಾರಿಕೆ, ಆಹಾರ, ಸಮಾಜ ಕಲ್ಯಾಣ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ, ನರೇಗಾ, ಶಿಕ್ಷಣ, ಸ್ವಚ್ಚ ಭಾರತ್ ಮಿಷನ್, ಗ್ರಾಮೀಣಾಭಿವೃದ್ಧಿ, ಗಣಿ ಮತ್ತು ಭೂವಿಜ್ಞಾನ, ಚೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲಿಸಿದ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಜಿಲ್ಲೆಯ ಅಭಿವೃದ್ದಿಗಾಗಿ ಜಿಲ್ಲಾಮಟ್ಟದ ಎಲ್ಲಾ ಅಧಿಕಾರಿಗಳು ಒಂದು ತಂಡವಾಗಿ ಕೆಲಸ ಮಾಡಬೇಕು. ಜಿಲ್ಲೆಯ ಪ್ರಗತಿಗೆ ಹೆಚ್ಚಿನ ಪರಿಶ್ರಮ ಹಾಕಬೇಕು ಎಂದು ಸಲಹೆ ಮಾಡಿದರು.
ಗುಂಡ್ಲುಪೇಟೆ ಶಾಸಕರಾದ ಎಚ್. ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಸಾಮಾಜಿಕ ಅರಣ್ಯ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಅಕ್ಷಯ್ ಪ್ರಕಾಶ್, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.