ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಆಚರಣೆ : ಸಿದ್ದತೆಗಳ ಪರಿಶೀಲನೆ

ಚಾಮರಾಜನಗರ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸ್ಥಾಪನೆಯಾಗಿ 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಸುವರ್ಣ ಮಹೋತ್ಸವದ ಜಿಲ್ಲಾಮಟ್ಟದ ಬೃಹತ್ ಕಾರ್ಯಕ್ರಮವನ್ನು ಇದೇ ಅಕ್ಟೋಬರ್ 27ರಂದು ಮಧ್ಯಾಹ್ನ 2 ಗಂಟೆಗೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದ್ದು, ಇದರ ಸಿದ್ದತೆಗಳನ್ನು ವ್ಯಾಪಕವಾಗಿ ಪರಿಶೀಲಿಸಲಾಯಿತು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇತ್ತೀಚೆಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ನಡೆಸಲಾಗಿದ್ದು, ಅಗತ್ಯ ಸೂಚನೆಗಳನ್ನು ನೀಡಲಾಗಿದೆ. 

ಕಾರ್ಯಕ್ರಮದ ಸಿದ್ದತೆಗಾಗಿ ವೇದಿಕೆ, ಆಸನದ ವ್ಯವಸ್ಥೆ, ಸ್ವಚ್ಚತೆ, ವಿದ್ಯುತ್ ಸರಬರಾಜು, ಅಗ್ನಿಶಾಮಕ ದಳ, ಆರೋಗ್ಯ ಸಿಬ್ಬಂದಿ ನಿಯೋಜನೆ, ಭದ್ರತೆ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಸಮರ್ಪಕವಾಗಿ ಕೈಗೊಳ್ಳುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸಭೆಯಲ್ಲಿ ನಿರ್ದೇಶನ ನೀಡಿದ್ದಾರೆ.

ಶಿಷ್ಟಾಚಾರ ಅನುಸಾರ ಆಹ್ವಾನ ಪತ್ರಿಕೆಯನ್ನು ಮುದ್ರಿಸಿ ಜನಪ್ರತಿನಿಧಿಗಳು ಗಣ್ಯರಿಗೆ ಹಂಚಿಕೆ ಮಾಡಿ ಸಮಾರಂಭಕ್ಕೆ ಆಹ್ವಾನಿಸುವ ಕಾರ್ಯಕ್ಕೆ ಅಧಿಕಾರಿಗಳನ್ನು ನಿಯೋಜಿಸಬೇಕು. ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ವೇದಿಕೆ, ಧ್ವನಿವರ್ಧಕ, ವಿದ್ಯುತ್ ಜನರೇಟರ್, ಶಾಮಿಯಾನ, ಆಸನಗಳ ವ್ಯವಸ್ಥೆ, ಇನ್ನಿತರ ಸಂಪೂರ್ಣ ಕಾರ್ಯವನ್ನು ಸಮರ್ಪಕವಾಗಿ ನಿರ್ವಹಿಸಬೇಕೆಂದು ಜಿಲ್ಲಾಧಿಕಾರಿಯವರು ಸೂಚನೆ ನೀಡಿದರು. 

ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಸೇರುವುದರಿಂದ ಜನಸಂದಣಿ, ವಾಹನ ಸಂಚಾರವನ್ನು ಕ್ರಮಬದ್ದಗೊಳಿಸಲು ಸೂಕ್ತ ಬಂದೋ ಬಸ್ತ್ ವ್ಯವಸ್ಥೆ ಕೈಗೊಳ್ಳಬೇಕು. ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿರಿಯ ಪೌರ ಕಾರ್ಮಿಕರನ್ನು ಗುರುತಿಸಿ ಸಮಾರಂಭದಲ್ಲಿ ಸನ್ಮಾನಿಸಲಾಗುತ್ತದೆ. ಈ ನಿಟ್ಟಿನಲ್ಲಿ ವಹಿಸಬೇಕಿರುವ ಕ್ರಮಗಳಿಗೆ ಸ್ಥಳೀಯ ಸಂಸ್ಥೆ ಅಧಿಕಾರಿಗಳು ಮುಂದಾಗುವಂತೆ ತಿಳಿಸಿದರು.

ಶಾಲಾ ಮಕ್ಕಳಿಂದ ಪರಿಸರ ಸಂರಕ್ಷಣೆ ಜಾಗೃತಿ ಕುರಿತ ಚಿತ್ರ ಬರೆಯುವ ಸ್ಪರ್ಧೆ ನಡೆಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ, ಪ್ರಮಾಣ ಪತ್ರ ವಿತರಿಸಲಿದ್ದು, ಪರಿಸರ ಸಂರಕ್ಷಣೆಯಲ್ಲಿ ಸೇವೆ ಸಲ್ಲಿಸಿರುವ ವ್ಯಕ್ತಿ ಹಾಗೂ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲಾಗುತ್ತಿದ್ದು, ಈ ಸಂಬಂಧ ಅಗತ್ಯ ವ್ಯವಸ್ಥೆಯನ್ನು ಕೈಗೊಳ್ಳಬೇಕು. ವಿವಿಧ ಇಲಾಖೆಗಳಿಗೆ ವಹಿಸಲಾಗಿರುವ ಕಾರ್ಯಗಳನ್ನು ಸೂಕ್ತ ರೀತಿಯಲ್ಲಿ ನಿರ್ವಹಿಸಿ ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ತಿಳಿಸಿದರು.  

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಇಂದು (ಗುರುವಾರ) ಸಭೆ ನಡೆಸಿ ಸುವರ್ಣ ಮಹೋತ್ಸವದ ಪೂರ್ವ ಸಿದ್ದತೆಗಳನ್ನು ಪರಿಶೀಲಿಸಿದರು. ಸಮಾರಂಭದ ಸ್ಥಳವನ್ನು ಮುಂಚಿತವಾಗಿಯೇ ಸ್ವಚ್ಚಗೊಳಿಸಬೇಕು. ಪರಿಸರ ಜಾಗೃತಿ ಕುರಿತ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳ ಪಟ್ಟಿಯನ್ನು ತ್ವರಿತವಾಗಿ ಸಲ್ಲಿಸಬೇಕು. ಕಾರ್ಯಕ್ರಮದ ಎಲ್ಲ ಸಿದ್ದತೆಗಳನ್ನು ಶೀಘ್ರವೇ ಪೂರ್ಣಗೊಳಿಸುವಂತೆ ಸೂಚಿಸಿದರು. 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಡಿವೈಎಸ್.ಪಿ ಸ್ನೇಹ ರಾಜು, ಜಿಲ್ಲಾ ಪರಿಸರ ಅಧಿಕಾರಿ ಸವಿತಾ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಕಾಂತ ಪಾಟಿಲ್, ಪದವಿ ಪೂರ್ವಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರಾಜು, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕರಾದ ಶಿವಪ್ರಸಾದ್, ಕಾರ್ಯಕ್ರಮದ ನಿಯೋಜಕರಾದ ರಘು ದೊಡ್ಡೇರಿ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *