- 30 ವರ್ಷ ಸೇವೆ ಸಲ್ಲಿಸಿದ ಕಾರ್ಮಿಕರಿಗೆ ಭದ್ರತೆ ಕಲ್ಪಿಸಲು ಸೂಚನೆ – ಸಚಿವ ಚಲುವರಾಯಸ್ವಾಮಿ
- ಬಾಕಿ ವೇತನ ಪಾವತಿ, ವೇತನ ಹೆಚ್ಚಳ ಹಾಗೂ ಉದ್ಯೋಗ ಭದ್ರತೆಗೆ ಕಾರ್ಮಿಕರ ಮನವಿ
ಬೆಂಗಳೂರು: ತುಂಗಭದ್ರಾ ನೀರಾವರಿ ಯೋಜನೆಯಡಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಮಿಕರ ನ್ಯಾಯಸಮ್ಮತ ಬೇಡಿಕೆಗಳನ್ನು ನಿಯಮಾನುಸಾರ ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ನೀರಾವರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.
ವಿಕಾಸಸೌಧದ ಜಲಸಂಪನ್ಮೂಲ ಸಚಿವರ ಕಚೇರಿಯಲ್ಲಿ ತುಂಗಭದ್ರಾ ನೀರಾವರಿ ಕಾರ್ಮಿಕರ ವಿವಿಧ ಸಮಸ್ಯೆಗಳ ಕುರಿತು ಸಚಿವ ಎನ್.ಚಲುವರಾಯಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಅಜಯ್ ಧರ್ಮಸಿಂಗ್ , MLC ಎನ್.ಎಸ್.ಭೋಸರಾಜು, ಕರ್ನಾಟಕ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಥೋಡ್, ಸಚಿವರ ಆಪ್ತ ಕಾರ್ಯದರ್ಶಿ ಎ.ಆರ್.ರವಿ ಹಾಗೂ ತುಂಗಭದ್ರಾ ನೀರಾವರಿ ಕಾರ್ಮಿಕರ ಸಂಘದ ಕೇಂದ್ರ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಕಾರ್ಮಿಕ ಸಂಘದ ಪದಾಧಿಕಾರಿಗಳು ತಮ್ಮ ಪ್ರಮುಖ ಬೇಡಿಕೆಗಳನ್ನು ಸಚಿವರ ಗಮನಕ್ಕೆ ತಂದರು. 25 ರಿಂದ 30 ವರ್ಷಗಳಿಂದ ತುಂಗಭದ್ರಾ ನೀರಾವರಿ ವ್ಯಾಪ್ತಿಯಲ್ಲಿ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗ ಭದ್ರತೆ ಕಲ್ಪಿಸಬೇಕು, ವರ್ಷಪೂರ್ತಿ ಕೆಲಸ ನೀಡಬೇಕು ಎಂದು ಮನವಿ ಮಾಡಿದರು. ಸುದೀರ್ಘ ಅವಧಿಯಿಂದ ಸೇವೆ ಸಲ್ಲಿಸುತ್ತಿದ್ದರೂ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವುದರಿಂದ ಕಾರ್ಮಿಕರಿಗೆ ಸೇವಾ ಭದ್ರತೆ ಇಲ್ಲದಂತಾಗಿದೆ ಎಂದು ತಿಳಿಸಿದರು.
ಹಲವು ತಿಂಗಳಿಂದ ಬಾಕಿ ಉಳಿದಿರುವ ವೇತನವನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಕಾರ್ಮಿಕರ ವೇತನವನ್ನು ಹೆಚ್ಚಿಸಬೇಕು ಎಂದು ಸಚಿವರಲ್ಲಿ ಮನವಿ ಮಾಡಲಾಯಿತು. ಪ್ರಸ್ತುತ ದೊರೆಯುತ್ತಿರುವ ವೇತನವು ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ವೇತನ ಪಾವತಿಯಲ್ಲಿ ವಿಳಂಬವಾಗುತ್ತಿರುವುದರಿಂದ ಕಾರ್ಮಿಕರು ಮತ್ತು ಅವರ ಕುಟುಂಬಗಳು ಆರ್ಥಿಕ ಸಂಕಷ್ಟ ಎದುರಿಸುತ್ತಿವೆ ಎಂದು ಸಂಘದ ಪದಾಧಿಕಾರಿಗಳು ಗಮನಕ್ಕೆ ತಂದರು.
ಕಾರ್ಮಿಕರಿಗೆ PF ಹಾಗೂ ESI ಸೌಲಭ್ಯಗಳನ್ನು ಸಮರ್ಪಕವಾಗಿ ಕಲ್ಪಿಸಬೇಕು, ವೇತನವನ್ನು ನೇರವಾಗಿ ಕಾರ್ಮಿಕರ ಖಾತೆಗೆ (DBT) ಪಾವತಿಸುವ ವ್ಯವಸ್ಥೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಲಾಯಿತು.
ಕಾರ್ಮಿಕರ ಅಹವಾಲುಗಳನ್ನು ಆಲಿಸಿದ ಸಚಿವ ಎನ್.ಚಲುವರಾಯಸ್ವಾಮಿ ಅವರು, ಕಾರ್ಮಿಕರು ಹಲವು ವರ್ಷಗಳಿಂದ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅವರ ಸಮಸ್ಯೆಗಳನ್ನು ಗಂಭೀರವಾಗಿ ಪರಿಶೀಲಿಸಲಾಗುವುದು ಎಂದು ತಿಳಿಸಿದರು.
“ತುಂಗಭದ್ರಾ ನೀರಾವರಿ ವ್ಯವಸ್ಥೆಯ ಸಮರ್ಪಕ ನಿರ್ವಹಣೆಯಲ್ಲಿ ಕಾರ್ಮಿಕರ ಪಾತ್ರ ಮಹತ್ವದ್ದಾಗಿದೆ. ರೈತರಿಗೆ ನೀರು ತಲುಪಿಸುವ ಕಾರ್ಯದಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಕಾರ್ಮಿಕರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ. ಬಾಕಿ ವೇತನ ಪಾವತಿ, ವೇತನ ಹೆಚ್ಚಳ, ಉದ್ಯೋಗ ಭದ್ರತೆ ಹಾಗೂ PF-ESI ಸೇರಿದಂತೆ ಕಾರ್ಮಿಕರ ಬೇಡಿಕೆಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಸಚಿವರು ಭರವಸೆ ನೀಡಿದರು.