ಸಮಾನತೆ ಆಧಾರದಲ್ಲಿ ಸೌಲಭ್ಯ ಸವಲತ್ತುಗಳನ್ನು ನೀಡಲು ಸರ್ಕಾರ ಮುಂದು : ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ

ಚಾಮರಾಜನಗರ: ಜಿಲ್ಲೆಯ ಸಮಗ್ರ ಅಭಿವೃದ್ದಿಗಾಗಿ ಸಮಾನತೆ ಆಧಾರದಲ್ಲಿ ಸೌಲಭ್ಯ ಸವಲತ್ತುಗಳನ್ನು ನೀಡಲು ಸರ್ಕಾರ ಮುಂದಾಗಿದೆ ಎಂದು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಕೊಳ್ಳೇಗಾಲ ಪಟ್ಟಣದ ಎಂಜಿಎಸ್ ವಿ ಪದವಿಪೂರ್ವ ಕಾಲೇಜು ಆವರಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯ ಕೊಳ್ಳೇಗಾಲ, ಹನೂರು ವಿಧಾನಸಭಾ ಕ್ಷೇತ್ರಗಳ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರಗಳ ಪಾಲಿಗೆ ಇಂದು ಸುದಿನವಾಗಿದೆ. ಅಭಿವೃದ್ಧಿಪರ ದೂರದೃಷ್ಠಿ ಹೊಂದಿರುವ ಮುಖ್ಯಮಂತ್ರಿಗಳು ಇಂದು 1500 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದ್ದಾರೆ. 274 ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಲಾಗುತ್ತಿದೆ. ಒಟ್ಟಾರೆ ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಸರ್ಕಾರ ಮುಂದಾಗಿದೆ ಎಂದರು.
ಮುಖ್ಯಮAತ್ರಿಗಳು ಹಿಂದೆ ನೀರಾವರಿ ಸಚಿವರಾಗಿದ್ದಾಗ ಕ್ಷೇತ್ರಕ್ಕೆ ಹೆಚ್ಚಿನ ನೀರಾವರಿ ಯೋಜನೆಗಳನ್ನು ಕೊಡುಗೆಯಾಗಿ ನೀಡಿದ್ದರು. ಪ್ರತಿ ಗ್ರಾಮಗಳಲ್ಲೂ ಯುವ ಜನತೆಯನ್ನು ಸಾಂಸ್ಕೃತಿಕ, ಸಾಮರಸ್ಯ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವಂತೆ ಮಾಡಲು ಭಾರತ್ ಜೋಡೋ ಕಾರ್ಯಕ್ರಮ ಜಾರಿಗೊಳಿಸುತ್ತಿದ್ದಾರೆ. ಜನರ ಸಮಸ್ಯೆಗಳನ್ನು ಮನೆ ಬಾಗಿಲಿನಲ್ಲಿಯೇ ಆಲಿಸಿ ತ್ವರಿತವಾಗಿ ಪರಿಹರಿಸಲು ಪ್ರಜಾಸೇವೆ ಆರಂಭಿಸಿದ್ದಾರೆ ಎಂದು ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.
ಸಮಾಜ ಕಲ್ಯಾಣ ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಕೊಳ್ಳೇಗಾಲ ರೇಷ್ಮೆ ಉತ್ಪಾದನೆ, ಇಳುವರಿಯಲ್ಲಿ ಉತ್ತಮ ಹೆಸರು ಗಳಿಸಿದೆ. ಕ್ಷೇತ್ರದಲ್ಲಿ ಶೈಕ್ಷಣಿಕ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಗುಣಮಟ್ಟದ ಶಿಕ್ಷಣಕ್ಕೆ ಪೂರಕವಾಗಿದೆ. ವಸತಿಶಾಲೆ ಹಾಗೂ ವಿದ್ಯಾರ್ಥಿನಿಲಯಗಳ ಅಭಿವೃದ್ಧಿಗೆ ಸರ್ಕಾರದ ವತಿಯಿಂದ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ ಎಂದರು.
ವಸತಿಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಸಮುದಾಯ ಭವನಗಳು ನಿಷ್ಕ್ರಿಯಗೊಳ್ಳದೆ ಸದಾ ಚಟುವಟಿಕೆಯಿಂದ ಕೂಡಿರಬೇಕು. ಸಮುದಾಯ ಭವನಗಳು ಸದುಪಯೋಗವಾಗಬೇಕು. ಮುಂದಿನ ದಿನಗಳಲ್ಲಿ ಸಮುದಾಯ ಭವನಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಕೋಚಿಂಗ್ ಸೆಂಟರ್ ಹಾಗೂ ವಿಶೇಷ ತರಗತಿಗಳನ್ನು ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವರಾದ ಕೆ.ಎಚ್. ಮುನಿಯಪ್ಪ ಅವರು ತಿಳಿಸಿದರು.

Leave a Reply

Your email address will not be published. Required fields are marked *