ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ: ಸಚಿವ ಪುಟ್ಟರಂಗಶೆಟ್ಟಿ

ಚಾಮರಾಜನಗರ: ಸಂವಿಧಾನವು ದೇಶದ ಪ್ರತಿಯೊಬ್ಬ ಪ್ರಜೆಗೂ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಹಾಗೂ ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನೀಡಿದ್ದು, ಅದರ ಆಶಯಗಳನ್ನು ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವ ಪುಟ್ಟರಂಗಶೆಟ್ಟಿ ಹೇಳಿದರು.

ನಗರದ ಜಿಲ್ಲಾಡಳಿತ ಭವನದ ಮುಂಭಾಗದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಹಾಗೂ ಬಸವಣ್ಣನವರ ಪ್ರತಿಮೆಗಳಿಗೆ ಮಾಲಾರ್ಪಣೆ ಮತ್ತು ಪುಷ್ಪಾರ್ಚನೆ ಮಾಡುವ ಮೂಲಕ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಲಾಯಿತು. 1950ರ ಜನವರಿ 26ರಂದು ಸಂವಿಧಾನ ಜಾರಿಗೆ ಬಂದಿತು. 2015ರಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 125ನೇ ಜನ್ಮದಿನಾಚರಣೆಯ ಅಂಗವಾಗಿ ನವೆಂಬರ್ 26ನ್ನು ಸಂವಿಧಾನ ಸಮರ್ಪಣಾ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಈ ದಿನವನ್ನು ಸಂವಿಧಾನ ದಿನವಾಗಿ ಆಚರಿಸಲಾಗುತ್ತಿದೆ ಎಂದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಎರಡು ವರ್ಷ, ಹನ್ನೊಂದು ತಿಂಗಳು ಹಾಗೂ ಹದಿನೆಂಟು ದಿನಗಳ ಅವಧಿಯಲ್ಲಿ ಸಂವಿಧಾನ ರಚನೆಯಾಯಿತು. ಭಾರತದ ಸಂವಿಧಾನವು ವಿಶ್ವದಲ್ಲೇ ಅತ್ಯಂತ ಮಹತ್ವದ ಸಂವಿಧಾನವಾಗಿದ್ದು, ಪ್ರಜೆಗಳಿಗೆ ಮೂಲಭೂತ ಹಕ್ಕುಗಳು, ಕರ್ತವ್ಯಗಳು, ಸಮಾನ ಅವಕಾಶ, ಧಾರ್ಮಿಕ ಸ್ವಾತಂತ್ರ್ಯ, ಅಭಿವ್ಯಕ್ತಿ ಸ್ವಾತಂತ್ರ್ಯ ಹಾಗೂ ಸಾಮಾಜಿಕ ನ್ಯಾಯವನ್ನು ಒದಗಿಸಿದೆ ಎಂದು ತಿಳಿಸಿದರು.

ಪ್ರಜಾಪ್ರಭುತ್ವ, ಜಾತ್ಯತೀತತೆ, ಸಮಾಜವಾದ, ಗಣರಾಜ್ಯ ವ್ಯವಸ್ಥೆ ಹಾಗೂ ಸಾರ್ವಭೌಮ ರಾಷ್ಟ್ರದ ಆಶಯಗಳನ್ನು ಒಳಗೊಂಡಿರುವ ಸಂವಿಧಾನವು ಪ್ರತಿಯೊಬ್ಬ ವ್ಯಕ್ತಿಯ ಗೌರವ ಮತ್ತು ಘನತೆಯನ್ನು ಎತ್ತಿಹಿಡಿಯುತ್ತದೆ. ಇಂತಹ ಮಹತ್ವದ ಸಂವಿಧಾನದ ಆಶಯಗಳನ್ನು ನಾವೆಲ್ಲರೂ ಪಾಲಿಸಬೇಕು. ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಹೇಳಿ ಎಲ್ಲರಿಗೂ ಸಂವಿಧಾನ ದಿನದ ಶುಭಾಶಯಗಳನ್ನು ಕೋರಿದರು.

ಈ ಸಂದರ್ಭದಲ್ಲಿ ಚುಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್, ಜಿಲ್ಲಾ ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಬಿ.ಕೆ.ರವಿಕುಮಾರ್, ಸಿಇಒ ಆಕೃತಿ ಬನ್ಸಲ್, ಎಡಿಸಿ ಪ್ರಿಯದರ್ಶಿನಿ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಶ್ರುತಿ, ಡಿವೈಎಸ್ಪಿ ಸ್ನೇಹರಾಜ್, ಚಾಮರಾಜನಗರ ಸಿಮ್ಸ್‌ನ ಡೀನ್ ದೇವಕಿ, ಜಿಲ್ಲಾ ಆರೋಗ್ಯಾಧಿಕಾರಿ ನೀಲಾದೇವಿ, ತಹಸೀಲ್ದಾರ್ ನವೀನ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಸಿಬ್ಬಂದಿ ವರ್ಗ ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Leave a Reply

Your email address will not be published. Required fields are marked *