ಚಾಮರಾಜನಗರ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕರ ಆರೋಗ್ಯ ರಕ್ಷಣೆಗಾಗಿ 36 ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನ ಮಾಡುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ತರಬೇತಿ ಸಂಸ್ಥೆ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಆರೋಗ್ಯ ಇಲಾಖೆಯ ಕಾರ್ಯಕ್ರಮಗಳ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಆರೋಗ್ಯ ಇಲಾಖೆಯಿಂದ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿ ನಾನಾ ಚಿಕಿತ್ಸೆ, ಆರೋಗ್ಯ ತಪಾಸಣೆ ಸೇರಿದಂತೆ ವಿವಿಧ ಆರೋಗ್ಯ ಸಂಬಂಧಿ ಕಾರ್ಯಕ್ರಮಗಳನ್ನು ಜಾರಿ ಮಾಡಲಾಗುತ್ತಿದೆ. ಮನೆ ಬಾಗಿಲಿಗೆ ಆರೋಗ್ಯ ಸೇವೆ ತಲುಪಿಸುವ ಉದ್ದೇಶದಿಂದ ಅನೇಕ ನೂತನ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದರು.
ಈ ಹಿಂದೆ ಸಾಂಕ್ರಮಿಕ ರೋಗಗಳು ಹೆಚ್ಚಾಗಿ ಕಂಡು ಬರುತ್ತಿತ್ತು. ಪ್ರಸ್ತುತ ಇಂತಹ ರೋಗಗಳು ಕಡಿಮೆಯಾಗಿದ್ದು ಇತರೆ ಕಾಯಿಲೆಗಳು ಕಂಡು ಬರುತ್ತಿವೆ. ದೈಹಿಕ ಚಟುವಟಿಕೆಗಳನ್ನು ಕಡಿಮೆ ಮಾಡಿದ ಕಾರಣದಿಂದ ಅನೇಕ ತೊಂದರೆಗಳನ್ನು ಎದುರಿಸುವಂತಾಗಿದೆ. ರೋಗ ನಿರೋಧಕ ಶಕ್ತಿ ಬೆಳೆಯಲು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು. ಇದಕ್ಕಾಗಿಯೇ ಆರೋಗ್ಯ ಇಲಾಖೆ ಹಲವು ಕಾರ್ಯಕ್ರಮಗಳ ಮೂಲಕ ನಿರಂತರ ಸೇವೆಗೆ ಮುಂದಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ 11 ಸಾವಿರ ಯೂನಿಟ್ ರಕ್ತದ ಅಗತ್ಯವಿದೆ. ಆದರೆ ಪ್ರಸ್ತುತ 6 ರಿಂದ 7 ಸಾವಿರ ಯೂನಿಟ್ ಮಾತ್ರ ಲಭ್ಯವಾಗುತ್ತಿದೆ. ಹೆರಿಗೆ, ಅಪಘಾತ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಹೆಚ್ಚಾಗಿರುತ್ತದೆ. ರಕ್ತ ಸಂಗ್ರಹಣೆ ಹೆಚ್ಚಾದರೆ ಅನುಕೂಲವಾಗಲಿದೆ. ನಕಲಿ ಕ್ಲಿನಿಕ್ ಹಾವಳಿ ತಡೆಗೆ ಕ್ರಮವಹಿಸಲಾಗಿದೆ. ಭ್ರೂಣ ಹತ್ಯೆ ತಡೆಗೂ ಪ್ರತ್ಯೇಕ ಸಮಿತಿ ಇದ್ದು ಈ ಮೂಲಕ ವಿಶೇಷ ಪರಿಶೀಲನೆ ನಡೆಸಲಾಗುತ್ತಿದೆ ಎಂದರು.
ಜಿಲ್ಲೆಯಲ್ಲಿ 13 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತ ಎಂದು ಘೋಷಣೆ ಮಾಡಲಾಗಿದೆ. ಈ ವರ್ಷ ಇನ್ನೂ 35 ಗ್ರಾಮ ಪಂಚಾಯಿತಿಗಳನ್ನು ಕ್ಷಯಮುಕ್ತಗೊಳಿಸಲು ಕಾರ್ಯೋನ್ಮುಖರಾಗಿದ್ದೇವೆ. ಆರೋಗ್ಯ ಉದ್ದೇಶದಿಂದ ಜಾರಿ ಮಾಡುತ್ತಿರುವ ಕಾರ್ಯಕ್ರಮಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಮಾಧ್ಯಮಗಳ ಪಾತ್ರವು ಬಹು ದೊಡ್ಡದಿದೆ. ಈ ದಿಸೆಯಲ್ಲಿ ಹೆಚ್ಚಿನ ಸಹಕಾರವನ್ನು ಬಯಸುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಚಿದಂಬರ ಅವರು ತಿಳಿಸಿದರು.
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಎ. ರಮೇಶ್, ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ರವಿಕುಮಾರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಚಂದ್ರಶೇಖರ್, ಆರ್.ಸಿ.ಹೆಚ್. ಅಧಿಕಾರಿ ಡಾ. ಮಂಜುನಾಥ್, ಜಿಲ್ಲಾ ಸರ್ವಲೆನ್ಸ್ ಅಧಿಕಾರಿ ಡಾ. ಸುರೇಶ್, ಆರೋಗ್ಯ ಶಿಕ್ಷಣಾಧಿಕಾರಿ ದೊರೆಸ್ವಾಮಿ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.