ಚಾಮರಾಜನಗರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸೇರಿದಂತೆ ಇನ್ನಿತರ ಇಲಾಖೆಗಳ ಸಹಯೋಗದೊಂದಿಗೆ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಇದೇ ಜೂನ್ 21ರಂದು ನಗರದಲ್ಲಿ ಹಮ್ಮಿಕೊಂಡಿದ್ದು, ಇದಕ್ಕಾಗಿ ಸಕಲ ಸಿದ್ದತೆ ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಯೋಜನೆ ಸಂಬಂಧ ನಡೆದ ಪೂರ್ವ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಜೂನ್ 21ರಂದು ಬೆಳಿಗ್ಗೆ 6.30 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಯೋಗ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು, ಸಾರ್ವಜನಿಕರು, ಅಧಿಕಾರಿ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪೂರ್ವ ಭಾವಿಯಾಗಿ ಎಲ್ಲ ಸಿದ್ದತೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು ಎಂದರು.
ಶಾಲಾ-ಕಾಲೇಜು, ನರ್ಸಿಂಗ್ ಕಾಲೇಜು, ಹಾಸ್ಟೆಲ್ ವಿದ್ಯಾರ್ಥಿಗಳು, ಭಾರತ್ ಸ್ಕೌಟ್ ಮತ್ತು ಗೈಡ್ಸ್, ನೆಹರು ಯುವ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಲ್ಲಿ ನೊಂದಾಯಿತವಾಗಿರುವ ಯುವ ಸಂಸ್ಥೆಗಳು ಈ ಮಹತ್ವದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕು. ವಿಶೇಷವಾಗಿ ಪತಂಜಲಿ ಯೋಗ ಸಂಸ್ಥೆ ಸೇರಿದಂತೆ ಇನ್ನಿತರ ಯೋಗ ಆಸಕ್ತ ಸಂಸ್ಥೆಗಳು ಸಹ ಭಾಗವಹಿಸಿ ಸಹಕರಿಸಬೇಕು. ಜಿಲ್ಲೆಯ ಸಾರ್ವಜನಿಕರು ಭಾಗವಹಿಸಲು ಅವಕಾಶವಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮ ಅರ್ಥಪೂರ್ಣಗೊಳಿಸಬೇಕು ಎಂದು ಹೇಳಿದರು.
ಮೈದಾನದ ಸ್ವಚ್ಚತೆ ಕೈಗೊಂಡು ಯೋಗ ದಿನಾಚರಣೆಗೆ ಸಜ್ಜುಗೊಳಿಸಬೇಕು. ಯೋಗ ಅಭ್ಯಾಸದಲ್ಲಿ ಪಾಲ್ಗೊಳ್ಳುವವರಿಗೆ ಕುಡಿಯುವ ನೀರು, ಉಪಹಾರದ ವ್ಯವಸ್ಥೆ ಕಲ್ಪಿಸಬೇಕು. ಆಂಬ್ಯುಲೆನ್ಸ್, ವೈದ್ಯರು, ಆರೋಗ್ಯ ಸಿಬ್ಬಂದಿ ನಿಯೋಜನೆಯೊಂದಿಗೆ ತುರ್ತು ಚಿಕಿತ್ಸೆ ವ್ಯವಸ್ಥೆ ಇರಬೇಕು. ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನ ಘೋಷ ವಾಕ್ಯವು ಆರೋಗ್ಯಕರ ವೃದ್ದಾಪ್ಯಕ್ಕಾಗಿ ಯೋಗ ಎಂಬುದಾಗಿದೆ. ಎಲ್ಲರು ಸಹಕರಿಸುವ ಮೂಲಕ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಯಶಸ್ವಿಗೊಳಿಸುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ತಿಳಿಸಿದರು.
ಇದೇ ವೇಳೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಬಿತ್ತಿ ಪತ್ರವನ್ನು ಬಿಡುಗಡೆ ಮಾಡಲಾಯಿತು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಜಿ. ಹೊನ್ನರಾಜು, ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪಾಟಿಲ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಬಿ. ನಾಗರಾಜು, ಸಿಮ್ಸ್ ಪ್ರಾಂಶುಪಾಲರಾದ ಡಾ. ಆರ್.ಟಿ ಅಜಯ್, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಚಿನ್ನಭೋವಿ, ಪತಂಜಲಿ ಯೋಗ ಶಿಕ್ಷಣ ಸೇವಾ ಸಮಿತಿಯ ಜಿಲ್ಲಾ ಪ್ರಧಾನ ಸಂಚಾಲಕರಾದ ಬಿ.ಪಿ. ಪ್ರಕಾಶ, ಚಾಮರಾಜನಗರ ನಗರಸಭೆ ಪೌರಾಯುಕ್ತರಾದ ಪರಶುರಾಮ ಎಂ ಛಲವಾದಿ, ಸಿಮ್ಸ್ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಎನ್. ನಮ್ರತಾ, ಇನ್ನಿತರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related