ಜಿಲ್ಲಾ ಉಸ್ತುವಾರಿ ಸಚಿವರಿಂದ ಜನತಾ ದರ್ಶನ : ಜಿಲ್ಲೆಯ ನಾನಾ ಭಾಗಗಳ ಜನರಿಂದ ಅಹವಾಲುಗಳ ಸಲ್ಲಿಕೆ

ಚಾಮರಾಜನಗರ: ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾಮಟ್ಟದ ಜನತಾ ದರ್ಶನದಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಜನರು ಅಹವಾಲುಗಳನ್ನು ಸಲ್ಲಿಸಿದರು.

ನಗರದ ಜಿಲ್ಲಾಡಳಿತ ಭವನದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ಜನತಾ ದರ್ಶನ ಕಾರ್ಯಕ್ರಮದಲ್ಲಿ ಜಿಲ್ಲೆಯ ನಾನಾ ಭಾಗಗಳಿಂದ ಬಂದಿದ್ದ ನಾಗರಿಕರು ಸರತಿ ಸಾಲಿನಲ್ಲಿ ನಿಂತು ತಮ್ಮ ಅಹವಾಲು, ಕುಂದು ಕೊರತೆ, ದೂರುಗಳನ್ನು ಸಲ್ಲಿಸಿದರು.

ಇ-ಸ್ವತ್ತು ನೀಡುವಲ್ಲಿ ವಿಳಂಬ, ಅಕ್ರಮವಾಗಿ ಖಾತೆ, ರಸ್ತೆ ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳದಿರುವುದು, ಬದನಗುಪ್ಪೆ-ಕೆಲ್ಲಂಬಳ್ಳಿ ಪ್ರದೇಶದಲ್ಲಿ ಅಕ್ರಮವಾಗಿ ಮಣ್ಣು ತೆಗೆಯುತ್ತಿರುವುದು, ಮದ್ಯ ಮಾರಾಟ ಅಂಗಡಿಗಳಲ್ಲಿ ಅಬಕಾರಿ ನಿಯಮಗಳ ಉಲ್ಲಂಘನೆ, ಕೆರೆಗಳ ಶುದ್ದೀಕರಣ, ಹೂಳು ತೆಗೆಯುವುದು, ಒತ್ತುವರಿ ತೆರವು, ಸಾಗುವಳಿದಾರರಿಗೆ ಅನುಕೂಲ ಕಲ್ಪಿಸುವುದು ಸೇರಿದಂತೆ ಇನ್ನಿತರ ಮನವಿಗಳು ಜನತಾ ದರ್ಶನದಲ್ಲಿ ಸಲ್ಲಿಕೆಯಾದವು.

ಆಮ್ಲಜನಕ ದುರಂತದಲ್ಲಿ ಸಂತ್ರಸ್ತರಾದ ಕುಟುಂಬದ ಸದಸ್ಯರಿಗೆ ಉದ್ಯೋಗ ನೀಡುವ ಬಗ್ಗೆ ಸಂತ್ರಸ್ತರು ಮಾಡಿದ ಮನವಿಗೆ ಸ್ಪಂದಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಈ ಬಗ್ಗೆ ಕ್ರಮವಹಿಸಲಾಗಿದೆ. ಖಾಯಂ ಉದ್ಯೋಗ ದೊರಕುವವರೆಗೆ ಹೊರಗುತ್ತಿಗೆ ಆಧಾರದಲ್ಲಿ ಉದ್ಯೋಗ ನೀಡಲು ಕೂಡಲೇ ಕ್ರಮ ತೆಗೆದುಕೊಳ್ಳುವುದಾಗಿ ತಿಳಿಸಿದರು.

ಅಂಗನವಾಡಿ ಕಾರ್ಯಕÀರ್ತೆಯರು ಹಾಗೂ ಸಹಾಯಕಿಯರ ನೇಮಕದ ಸಂದರ್ಭದಲ್ಲಿ ಸಲ್ಲಿಕೆಯಾಗಿರುವ ಅಂಕಪಟ್ಟಿಗಳ ನೈಜತೆಯನ್ನು ಪರಿಶೀಲಿಸಬೇಕು ಎಂಬುದು ಸೇರಿದಂತೆ ಇತರೆ ದೂರುಗಳು, ಸಮಸ್ಯೆಗಳು ಹಾಗೂ ವೈಯಕ್ತಿಕ ಕುಂದು ಕೊರತೆಗಳನ್ನು ಜನರು ಜನತಾ ದರ್ಶನದಲ್ಲಿ ಸಚಿವರ ಗಮನಕ್ಕೆ ತಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಅಹವಾಲು ಸ್ವೀಕರಿಸುತ್ತಿದ್ದಂತೆಯೇ ಸಂಬಂಧಪಟ್ಟ ಅಧಿಕಾರಿಗಳನ್ನು ಸಾರ್ವಜನಿಕರ, ದೂರುದಾರರ ಸಮ್ಮುಖದಲ್ಲಿಯೇ ಕರೆಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ನಿರ್ದೇಶನ ನೀಡಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವರು ಸಾರ್ವಜನಿಕರ ಅಹವಾಲು ಸಮಸ್ಯೆಗಳನ್ನು ಕೇಳಿ ಅರ್ಜಿಗಳನ್ನು ವಿಲೇವಾರಿಗೊಳಿಸಿ ಸೂಕ್ತ ಪರಿಹಾರ ನೀಡಬೇಕೆಂಬ ಸದುದ್ದೇಶದಿಂದ ಜನತಾ ದರ್ಶನ ಕಾರ್ಯಕ್ರಮ ನಡೆಸಲಾಗುತ್ತಿದೆ. ಇಲ್ಲಿ ಸಲ್ಲಿಕೆಯಾದ ಅರ್ಜಿಗಳನ್ನು ವಿಳಂಬ ಮಾಡದೇ ಇತ್ಯರ್ಥಗೊಳಿಸಬೇಕು. ಸಮಂಜಸವಾದ ಉತ್ತರ ಪರಿಹಾರವನ್ನು ನೀಡಬೇಕು. ಇದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.

ಇ-ಸ್ವತ್ತು ಸಂಬಂಧ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಜಿಲ್ಲೆಯಲ್ಲಿ ಯಾವ ಯಾವ ಭಾಗದಲ್ಲಿ ಎಷ್ಟೆಷ್ಟು ಇ-ಸ್ವತ್ತು ಕುರಿತ ಅರ್ಜಿಗಳು ಬಾಕಿ ಇವೆ ಎಂಬ ಬಗ್ಗೆ ಪರಿಶೀಲಿಸಬೇಕು. ಈ ಅರ್ಜಿಗಳು ವಿಲೇವಾರಿಯಾಗದಿರಲು ಕಾರಣ ಏನೆಂಬ ಬಗ್ಗೆ ಸ್ಪಷ್ಟವಾಗಿ ತಿಳಿಸಬೇಕು. ಸಾರ್ವಜನಿಕರಿಗೆ ಸಕಾಲದಲ್ಲಿ ಇ-ಸ್ವತ್ತು ಅರ್ಜಿಗಳು ಇತ್ಯರ್ಥಗೊಂಡು ನಿಯಮಾನುಸಾರ ಅನುಕೂಲ ಮಾಡಿಕೊಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *