ಚಾಮರಾಜನಗರ: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು 148ನೇ ದಿನವಾದ ಇಂದು ಕೂಡಾ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ.
147ದಿನಗಳಿಂದಲೂ ನಿರಂತರವಾಗಿ ಪ್ರತಿಭಟನೆ ನಡೆಯುತ್ತಿದ್ದು, ಇಂದು ಕೂಡಾ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಹೆದ್ದಾರಿಯನ್ನು ತಡೆದು ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿ ಜಲಾಶಯಗಳು ಬತ್ತಿಹೋಗುತ್ತಿವೆ. ಇಂತಹ ಸಂದರ್ಭದಲ್ಲೂ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಅತ್ಯಂತ ಖಂಡನೀಯ. ತಕ್ಷಣವೇ ನೀರು ಬಿಡುವುದನ್ನು ನಿಲ್ಲಿಸಬೇಕು. ಜಲಾಶಯಗಳ ಮಟ್ಟ ತೀವ್ರವಾಗಿ ಕುಸಿದು ಹೋಗಿದೆ. ಇಂತಹ ಸಂದರ್ಭದಲ್ಲಿ ಜನರ ಹಿತಾಸಕ್ತಿಯನ್ನು ಬಯಸದೇ ತಮಿಳುನಾಡಿಗೆ ನೀರನ್ನು ಬಿಡುತ್ತಿರುವುದು ಅತ್ಯಂತ ನಾಚಿಕೆಗೇಡಿನ ಸಂಗತಿ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಒಕ್ಕೂಟದ ವ್ಯವಸ್ಥೆಯ ಮೇಲೆ ಗೌರವ ಇದ್ದರೆ, ಎರಡು ರಾಜ್ಯಗಳನ್ನು ಕರೆದು ಮಾತನಾಡುವ ಮೂಲಕ ಮಧ್ಯ ಪ್ರವೇಶ ಮಾಡಿ ರಾಜ್ಯದ ಜನತೆಗೆ ನ್ಯಾಯ ಒದಗಿಸುವಂತಹ ಕೆಲಸವನ್ನು ಮಾಡಬೇಕು. ಕಾವೇರಿ ನಿರ್ವಹಣಾ ಮಂಡಳಿ ಎನ್ನುವುದು ತಮಿಳುನಾಡು ನಿರ್ವಹಣಾ ಮಂಡಳಿಯಾಗಿದೆ. ಇದನ್ನು ತಕ್ಷಣವೇ ವಜಾ ಮಾಡಬೇಕು ಎಂದು ಒತ್ತಾಯಿಸಿದರು.
ಎಲ್ಲಿಯವರೆಗೆ ನೀವು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸುವುದಿಲ್ಲವೋ ಅಲ್ಲಿಯವರೆಗೂ ಉಗ್ರವಾದ ಹೋರಾಟವನ್ನು ಮಾಡುತ್ತೇವೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‍ಗೋಪಾಲ್, ವೀರಭದ್ರ, ತಾಂಡವಮೂರ್ತಿ, ಗು.ಪುರುಷೋತ್ತಮ್, ಸೋಮವಾರಪೇಟೆ ಮಂಜು, ರಾಜಪ್ಪ, ಲಿಂಗರಾಜು, ಸಾಗರ್‍ರಾವತ್, ಹೆಗ್ಗೋಠಾರ ಶಿವಸ್ವಾಮಿ ಇನ್ನಿತರರಿದ್ದರು.