ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಲು ಕರಳಾಪುರ ನಾಗರಾಜು ಒತ್ತಾಯ

ಮೈಸೂರು: ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನವನ್ನು ನೀಡಬೇಕೆಂದು ಜಿಲ್ಲಾ ಉಪ್ಪಾರ ಸಂಘದ ಅಧ್ಯಕ್ಷ ಕರಳಾಪುರ ನಾಗರಾಜು ಒತ್ತಾಯಿಸಿದರು.

ಅವರು ನಗರದ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ ಕರ್ನಾಟಕ ರಾಜ್ಯ ಉಪ್ಪಾರ ಸಂಘದ ರಾಜ್ಯಾಧ್ಯಕ್ಷರಾಗಿರುವ ಸಿ.ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸತತವಾಗಿ ನಾಲ್ಕು ಬಾರಿ ಚುನಾಯಿತರಾಗಿದ್ದಾರೆ.

ರಾಜ್ಯದಲ್ಲೆಡೆ ಪ್ರವಾಸವನ್ನು ಕೈಕೊಂಡು ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವಂತೆ ಮಾಡುವುದರ ಜೊತೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಶ್ರಮಿಸಿದ್ದಾರೆ. ಪಕ್ಷವು ಅವರಿಗೆ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಉತ್ತಮ ನಾಯಕರಾಗಿದ್ದಾರೆ.

ಮೈಸೂರು, ಚಾಮರಾಜನಗರ, ಹಾಸನ, ಮಂಡ್ಯ ಜಿಲ್ಲೆಗಳಲ್ಲಿ ಉಪ್ಪಾರ ಸಮಾಜವು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಅತ್ಯಂತ ಹೆಚ್ಚಿನ ಮಟ್ಟದಲ್ಲಿ ಬೆಂಬಲಿಸುವ ಮೂಲಕ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿನಲ್ಲಿ ಉಪ್ಪಾರ ಸಮಾಜವು ಪ್ರಮುಖ ಪಾತ್ರ ವಹಿಸಿದೆ ಎಂದರು.

ರಾಜ್ಯದಲ್ಲಿನ ಉಪ್ಪಾರ ಸಮಾಜವನ್ನು ಪ್ರತಿನಿಧಿಸುವ ಏಕೈಕ ಶಾಸಕರಾಗಿರುವ ಸಿ.ಪುಟ್ಟರಂಗಶೆಟ್ಟಿ ಅವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು ಅವರಿಗೆ ಸಚಿವ ಸ್ಥಾನವನ್ನು ನೀಡುವ ಮೂಲಕ ಉಪ್ಪಾರ ಸಮುದಾಯಕ್ಕೆ ಕಾಂಗ್ರೆಸ್ ಪಕ್ಷದ ವರಿಷ್ಠರು ಅವಕಾಶವನ್ನು ಮಾಡಿಕೊಡಬೇಕೆಂದು ಮನವಿ ಮಾಡಿದರು.

ಈ ಹಿಂದಿನಿಂದಲೂ ಕೂಡ ರಾಜ್ಯದೆಲ್ಲೆಡೆ ಉಪ್ಪಾರ ಸಮಾಜವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದಿದ್ದು ಇದನ್ನು ಕಾಂಗ್ರೆಸ್ ಪಕ್ಷದ ವರಿಷ್ಠರು ಗಂಭೀರವಾಗಿ ಪರಿಗಣಿಸಿ ಸಿ.ಪುಟ್ಟರಂಗಶೆಟ್ಟಿ ಅವರನ್ನು ಸಚಿವರನ್ನಾಗಿ ಮಾಡಬೇಕು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪ್ಪಾರ ನೌಕರರ ಹಾಗೂ ವೃತ್ತಿಪರರ ಸಂಘದ ಅಧ್ಯಕ್ಷ ಎಂ.ರಾಮಚಂದ್ರ, ಮಾಜಿ ಅಧ್ಯಕ್ಷ ಫಿಲಂ ಮಹದೇವಶೆಟ್ಟಿ, ಪ್ರಧಾನ ಕಾರ್ಯದರ್ಶಿ
ಡಾ.ಎಂ.ಗೋವಿಂದರಾಜು, ಟಿ.ನರಸೀಪುರ ತಾಲೂಕು ಉಪ್ಪಾರ ಸಂಘದ ಅಧ್ಯಕ್ಷ ಎಂ.ಸೋಮಣ್ಣ, ಹೆಮ್ಮರಗಾಲ ವಿ.ಎಸ್.ಎಸ್.ಬಿ.ಎನ್ ಅಧ್ಯಕ್ಷ ಸಿದ್ಧಶೆಟ್ಟಿ, ಜಿಲ್ಲಾ ಉಪ್ಪಾರ ಸಂಘದ ಗೌರವ ಸಲಹೆಗಾರ ಆರ್.ನಾಗರಾಜು, ಉಪಾಧ್ಯಕ್ಷರಾದ
ಎಂ.ಗೋವಿಂದರಾಜು, ಪಿ.ಪ್ರಕಾಶ್, ಸಂಘಟನಾ ಕಾರ್ಯದರ್ಶಿ ಆರ್.ವಿನೋದ್ ಉಪ್ಪಾರ್, ಎನ್.ಆರ್.ಮೊಹಲ್ಲಾದ ಉಪ್ಪಾರ ಸಂಘದ ಅಧ್ಯಕ್ಷ
ಸಿ.ಗೋವಿಂದರಾಜು, ಮುಖಂಡರಾದ ಸಿಂಹವಾಹಿನಿ ಮಲ್ಲೇಶ್, ಮಹೇಶ್ ಇದ್ದರು.

Leave a Reply

Your email address will not be published. Required fields are marked *