ಸಿಡಬ್ಲ್ಯೂಆರ್ ಸಿ  ಆದೇಶ ಖಂಡಿಸಿ ಕರವೇ ಪ್ರತಿಭಟನೆ

ಚಾಮರಾಜನಗರದ: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ  ಆದೇಶಿಸಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಟಿ.ಎ.ನಾರಾಯಣಗೌಡ ಬಣದ ಜಿಲ್ಲಾ ಘಟಕದ  ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ವರ ಉದ್ಯಾನ ದ ಮುಂಭಾಗದಲ್ಲಿ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜೇಶ್ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಅಲ್ಲಿಂದ ಮೆರವಣಿಗೆಯಲ್ಲಿ ಭುವನೇಶ್ವರಿ ವೃತ್ತಕ್ಕೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ, ಕಾವೇರಿ ನೀರು ನಿಯಂತ್ರಣ ಸಮಿತಿ ವಿರುದ್ದ, ತಮಿಳುನಾಡು ಸರ್ಕಾರ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ನೇತೃತ್ವ ವಹಿಸಿದ್ದ ಜಿಲ್ಲಾಧ್ಯಕ್ಷ ಎಚ್.ಎನ್.ಮಂಜೇಶ್ ಮಾತನಾಡಿ, ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್ ಕಾವೇರಿ ನೀರನ್ನು ಬಿಡುಗಡೆ ಮಾಡುವಂತೆ ಸಿ.ಡಬ್ಲ್ಯೂ.ಆರ್.ಸಿ. ಹೊರಡಿಸಿರುವ ಆದೇಶವನ್ನು ಮರುಪರಿಶೀಲಿಸಿ ರಾಜ್ಯದ ಹಿತಾಸಕ್ತಿಯನ್ನು ಕಾಪಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕಾವೇರಿ ಜಲ ನಿಯಂತ್ರಣ ಸಮಿತಿಯ ತಮಿಳುನಾಡು ರಾಜ್ಯಕ್ಕೆ ನಿತ್ಯ 3500 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡುವಂತೆ ನೀಡಿರುವ ಆದೇಶವು ಕರ್ನಾಟಕ ರಾಜ್ಯದ ಹಿತಾಸಕ್ತಿ, ರೈತರ ಕೃಷಿ ಚಟುವಟಿಕೆಗಳು ಹಾಗೂ ಭವಿಷ್ಯದ ಕುಡಿಯುವ ನೀರಿನ ಅಗತ್ಯತೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ.
ಕರ್ನಾಟಕ ರಾಜ್ಯದ ಜಲಾಶಯಗಳಲ್ಲಿನ ನೀರಿನ ಸಂಗ್ರಹಣೆ, ರಾಜ್ಯದ ವಿವಿಧ ಭಾಗಗಳಲ್ಲಿನ ಕೃಷಿ ಚಟುವಟಿಕೆಗಳು, ರೈತರ ಅವಲಂಬನೆ, ಸಾರ್ವಜನಿಕರ ಕುಡಿಯುವ ನೀರಿನ ಅಗತ್ಯತೆಗಳನ್ನು ಪರಿಗಣಿಸಿ ರಾಜ್ಯದ ಹಿತಾಸಕ್ತಿಯನ್ನು ಪ್ರಥಮ ಆದ್ಯತೆಯಾಗಿ ಪರಿಗಣಿಸುವುದು ಅತ್ಯಗತ್ಯವಾಗಿದೆ. ರಾಜ್ಯದ ರೈತ ಸಮುದಾಯವು ಈಗಾಗಲೇ ಅನೇಕ ಸವಾಲುಗಳನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಇಂತಹ ಆದೇಶಗಳು ರೈತರಲ್ಲಿ ಹಾಗೂ ಸಾರ್ವಜನಿಕರಲ್ಲಿ ಆತಂಕವನ್ನು ಉಂಟುಮಾಡಿವೆ. ಅಗಾಗಿ ರಾಜ್ಯ ಸರ್ಕಾರ ತಮಿಳುನಾಡಿಗೆ ‌ಕಾವೇರಿ ನೀರು ಹರಿಸಬಾರದು ಎಂದು‌ ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ನಾಯಕ, ಮಹಿಳಾ ಜಿಲ್ಲಾಧ್ಯಕ್ಷೆ ಭಾಗ್ಯಲಕ್ಷ್ಮೀ, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಹೇಮಂತ್ ನಾಗರಾಜು, ಸಹ ಕಾರ್ಯದರ್ಶಿ ಅರ್ಜುನ್, ಚನ್ನಪ್ಪ, ತಾಲೂಕು ಅಧ್ಯಕ್ಷ ರಾದ ರಮೇಶ್ ನಾಯಕ, ಮಹಾದೇವಸ್ವಾಮಿ, ಸಂತೋಷ, ಪಾಷ, ಯುವ ಘಟಕದ ಅಧ್ಯಕ್ಷ ಮೋನಿಷ, ಮಹಿಳಾ ತಾಲೂಕು ಅಧ್ಯಕ್ಷೆ ಸುಮಾ, ತಾಲೂಕು ಉಪಾಧ್ಯಕ್ಷ ಶ್ರೀಕಾಂತ್ ಇತರರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *