ಚಾಮರಾಜನಗರ: ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಹಿಂದಿ ಭಾಷೆಯನ್ನು ಹೇರಿಕೆ ಮಾಡುತ್ತಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಮುಂಭಾಗದಲ್ಲಿ ವೇದಿಕೆ ಜಿಲ್ಲಾಧ್ಯಕ್ಷ ಮಂಜೇಶ್ ಅವರ ನೇತೃತ್ವದಲ್ಲಿ
ಜಮಾಯಿಸಿದ ಪ್ರತಿಭಟನಾ ಕಾರರು ಕೆಲಕಾಲ ಪ್ರತಿಭಟನೆ ನಡೆಸಿದರು. ಕೇಂದ್ರ ಸರ್ಕಾರ ಹಾಗೂ ರಾಜ್ಯಪಾಲರ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕಾಗಮಿಸಿದ ಜಿಲ್ಲಾಧಿಕಾರಿ ಶ್ರೀರೂಪಾಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ವ್ಯವಸ್ಥೆ ಜಾರಿಗೆ ತಂದಿರುವ ಸರ್ಕಾರದ ನಿರ್ಧಾರವನ್ನು ಮರು ಪರಿಶೀಲಿಸುವಂತೆ ರಾಜ್ಯಪಾಲ
ಥಾವರ್ ಚಂದ್ ಗೆಹೋಟ್ ಅವರು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಕೂಡಲೇ ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಹಿಂದಕ್ಕೆ ಕರೆಸಿಕೊಳ್ಳಬೇಕು ಎಂದು ಒತ್ತಾಯಿಸಿದರು.ರಾಜ್ಯಪಾಲರ ಈ ಕ್ರಮವು ತಮ್ಮ ಕಾರ್ಯವ್ಯಾಪ್ತಿಯನ್ನು ಮೀರಿ ನಡೆದಿರುವುದು ಮಾತ್ರವಲ್ಲದೆ, ಕರ್ನಾಟಕದ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ. ಇದರ ಹಿಂದೆ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ಉತ್ತೇಜಿಸುವ ಉದ್ದೇಶವಿದೆ ಎಂದು ದೂರಿದರು.ರಾಜ್ಯದ ಆಡಳಿತವನ್ನು ನಡೆಸುವ ಅಧಿಕಾರ ಜನರಿಂದ ಆಯ್ಕೆಯಾದ ಸರ್ಕಾರಕ್ಕಿದ್ದು, ಶಿಕ್ಷಣ ನೀತಿ ಸೇರಿದಂತೆ ವಿವಿಧ ವಿಷಯಗಳಲ್ಲಿ ನಿರ್ಧಾರ ಕೈಗೊಳ್ಳುವುದು ರಾಜ್ಯ ಸರ್ಕಾರದ ಅಧಿಕಾರವಾಗಿದೆ. ಇಂತಹ ಸಂದರ್ಭದಲ್ಲಿ ರಾಜ್ಯಪಾಲರು ಸರ್ಕಾರದ ನಿರ್ಧಾರಗಳಲ್ಲಿ ಹಸ್ತಕ್ಷೇಪ ಮಾಡುವುದು ಸರಿಯಲ್ಲ ಎಂದರು. ಪ್ರತಿಭಟನೆಯಲ್ಲಿ ಮಹಿಳಾ ಜಿಲ್ಲಾಧ್ಯಕ್ಷೆ ಭಾಗ್ಯಲಕ್ಷ್ಮಿ , ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೂಪೇಶ್ , ಜಿಲ್ಲಾ ಸಹಕಾರ್ಯ ದರ್ಶಿ ಅರ್ಜುನ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಹೇಮಂತ್, ಜಿಲ್ಲಾ ಪ್ರಧಾನ ಸಂಚಾಲಕ ರಾಘವೇಂದ್ರ, ತಾಲೂಕು ಅಧ್ಯಕ್ಷರು ಸಂತೋಷ್ ಚಾಮರಾಜನಗರ,
ಯಳಂದೂರು ತಾಲೂಕು ಅಧ್ಯಕ್ಷ ಮಾದೇವಸ್ವಾಮಿ, ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರು ರಮೇಶ್ ನಾಯಕ್ ,ಕೊಳ್ಳೇಗಾಲ ತಾಲೂಕು ಅಧ್ಯಕ್ಷರ ಆಯಸ್ ಕನ್ನಡಿಗ,ಚಾಮರಾಜನಗರ ಮಹಿಳಾ ತಾಲೂಕು ಅಧ್ಯಕ್ಷೆ ಸುಮಾ,ಕೊಳ್ಳೇಗಾಲ ತಾಲೂಕು ಅಧ್ಯಕ್ಷೆ ರಾಜೇಶ್ವರಿ, ಮುಖಂಡರಾದ ನಾಗರಾಜಣ್ಣ,ವಿಜಯ್ ,ಮಹೇಶ್ , ಯೋಗೇಶ್ ಇತರರು ಭಾಗವಹಿಸಿದ್ದರು.