ಚಾಮರಾಜನಗರ: ವಿವಿಧ ಇಲಾಖೆಗಳು, ಕಾನೂನು ಸೇವೆಗಳ ಪ್ರಾಧಿಕಾರ, ಸರ್ಕಾರೇತರ ಸಂಸ್ಥೆಗಳು, ಸ್ವಸಹಾಯ ಸಂಘಗಳು, ಕಾರ್ಮಿಕ ಸಂಘಗಳು ಸೇರಿದಂತೆ ಎಲ್ಲರ ಸಹಕಾರದೊಂದಿಗೆ ಜೂನ್ 12ರಂದು ಜಿಲ್ಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ ಕಾರ್ಯಕ್ರಮಕ್ಕೆ ಅಗತ್ಯ ಸಿದ್ದತೆ ಕೈಗೊರ್ಳಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ (ಮೇ.26) ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ವಿರುದ್ದ ಬಲವಾದ ಜನಾಭಿಪ್ರಾಯ ರೂಪುಗೊಳಿಸುವ ದಿಸೆಯಲ್ಲಿ ಶಿಷ್ಠಾಚಾರದನ್ವಯ ಕಾರ್ಯಕ್ರಮ ಆಯೋಜನೆ ಮಾಡಬೇಕು. ಬಾಲಕಾರ್ಮಿಕ ಪದ್ದತಿ ವಿರುದ್ದ ಆಂದೋಲನ ನಡೆಸುತ್ತಿರುವ ಸಂಘ ಸಂಸ್ಥೆಗಳು, ಉದ್ಯೋಗದಾತರ ಸಂಘಗಳು, ಸಾಮಾಜಿಕ ಕಾರ್ಯಕರ್ತರನ್ನು ಆಹ್ವಾನಿಸಬೇಕು ಎಂದರು.
ಜೂನ್ 12ರಂದು ಜಿಲ್ಲೆಯ ಎಲ್ಲಾ ಸರ್ಕಾರಿ ನೌಕರರು ಕೆಲಸ ನಿರ್ವಹಿಸುತ್ತಿರುವ ಸ್ಥಳಗಳಲ್ಲಿಯೇ ಒಟ್ಟಾಗಿ ಸೇರಿ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಅಂಗವಾಗಿ ಪ್ರಮಾಣ ವಚನ ಸ್ವೀಕರಿಸಬೇಕು. ಶಾಲಾ, ಕಾಲೇಜುಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿಗಳಲ್ಲಿ ಸಂಬಂಧಪಟ್ಟ ಅಧಿಕಾರಿಗಳು, ಸಿಬ್ಬಂದಿ, ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಸಹ ಪ್ರಮಾಣ ವಚನ ಸ್ವೀಕರಿಸಲು ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಪ್ರತಿ ಗ್ರಾಮ ಪಂಚಾಯಿತಿಗಲ್ಲಿ ಬಾಲ ಹಾಗೂ ಕಿಶೋರ ಕಾರ್ಮಿಕ ವಿರೋಧಿ ಪದ್ದತಿಯ ಕುರಿತು ಜಾಗೃತಿ ಮೂಡಿಸಬೇಕು. ಶಾಲಾ-ಕಾಲೇಜುಗಳಲ್ಲಿ ಎನ್.ಸಿಸಿ ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಅರಿವು ಜಾಥಾ ಏರ್ಪಡಿಸಬೇಕು. ಬಾಲಕಾರ್ಮಿಕ ಪದ್ದತಿ ವಿರೋಧಿ ಕುರಿತು ಘೋಷಣೆಗಳನ್ನು ಮೊಳಗಿಸಬೇಕು. ಬಾಲ ಹಾಗೂ ಕಿಶೋರ ಕಾರ್ಮಿಕ ಮುಕ್ತ ಗ್ರಾಮಗಳನ್ನು ಗುರುತಿಸಿ ಪ್ರಶಸ್ತಿ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಗೌರವಿಸಬೇಕು ಎಂದರು.
ಬಾಲಕಾರ್ಮಿಕ ವಿರೋಧಿ ದಿನದ ಮಹತ್ವ ಕುರಿತು ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಚಿತ್ರಕಲೆ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ಆಯೋಜಿಸಬೇಕು. ಶಾಲೆಗಳು ಆರಂಭವಾಗುತ್ತಿದ್ದಂತೆಯೇ ಸೂಕ್ತ ದಿನಾಂಕ ನಿಗದಿ ಮಾಡಿ ಸ್ಪರ್ಧೆಗಳನ್ನು ನಡೆಸಬೇಕು. ಬಾಲ ಹಾಗೂ ಕಿಶೋರ ಕಾರ್ಮಿಕ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಕರನ್ನು ಗೌರವಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಾಮಚಂದ್ರಯ್ಯ, ಕಾರ್ಮಿಕ ಯೋಜನಾ ಸೊಸೈಟಿಯ ನಿರ್ದೇಶಕರಾದ ಮಹೇಶ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮುನಿರಾಜು, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಸ್. ಚಿದಂಬರ, ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುಳಾ, ಜಂಟಿ ಕೃಷಿ ನಿರ್ದೇಶಕರಾದ ಸುಷ್ಮಾ ಸೇರಿದಂತೆ ವಿವಿಧ ಇಲಾಖೆಗಳ ಸಭೆಯಲ್ಲಿ ಉಪಸ್ಥಿತರಿದ್ದರು.
Like this:
Like Loading...
Related