ಚಾಮರಾಜನಗರ: ಇದೇ ತಿಂಗಳ ಅಂತ್ಯದಲ್ಲಿ ಜಿಲ್ಲೆಯಲ್ಲಿ ರಾಜ್ಯಮಟ್ಟದ ಫೆನ್ಸಿಂಗ್ (ಕತ್ತಿ ವರಸೆ) ಕ್ರೀಡಾಕೂಟ ಆಯೋಜಿಸಲಾಗುತ್ತಿದ್ದು, ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಫೆನ್ಸಿಂಗ್ (ಕತ್ತಿ ವರಸೆ) ಒಳಾಂಗಣ ಕ್ರೀಡೆಯಾಗಿದೆ. ಎರಡು ದಿನಗಳ ಕಾಲ ನಡೆಯಲಿರುವ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟಕ್ಕೆ ಎಲ್ಲಾ ಸಿದ್ದತಾ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗಿದೆ. ಈಗಾಗಲೇ ಫೆನ್ಸಿಂಗ್ ಕ್ರೀಡಾಕೂಟ ಎಲ್ಲಾ ಜಿಲ್ಲೆಗಳಲ್ಲಿಯೂ ನಡೆದಿದ್ದು, ಜಿಲ್ಲಾಮಟ್ಟದಲ್ಲಿ ಆಯ್ಕೆಯಾಗಿರುವ ಕ್ರೀಡಾಪಟುಗಳು ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲಿದ್ದಾರೆ. ಕ್ರೀಡಾಕೂಟದ ನಿರ್ವಹಣೆಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಲು ಮುಂದಾಗುವಂತೆ ಜಿಲ್ಲಾಧಿಕಾರಿಯವರು ಸೂಚಿಸಿದರು.
ತಾಲೂಕಿನ ಸಂತೇಮರಹಳ್ಳಿಯಲ್ಲಿರುವ ಅರ್ಚರಿ ಮತ್ತು ಫೆನ್ಸಿಂಗ್ ಕ್ರೀಡಾಶಾಲೆಯ ಒಳಾಂಗಣದಲ್ಲಿ ರಾಜ್ಯಮಟ್ಟದ ಕ್ರೀಡಾಕೂಟಕ್ಕಾಗಿ ಸ್ಥಳ ನಿಗದಿಪಡಿಸಲಾಗಿದೆ. ಕ್ರೀಡಾಕೂಟದ ವ್ಯವಸ್ಥಿತ ನಿರ್ವಹಣೆಗಾಗಿ ವಿವಿಧ ಇಲಾಖೆಗಳನ್ನೊಳಗೊಂಡ ಜಿಲ್ಲಾಮಟ್ಟದ ಅಧಿಕಾರಿಗಳ ಸಮಿತಿ ರಚಿಸಲಾಗಿದ್ದು, ಸಮಿತಿಯಲ್ಲಿರುವ ಅಧಿಕಾರಿಗಳು ಕ್ರೀಡಾಕೂಟ ಆಯೋಜನೆಯಲ್ಲಿ ಯಾವುದೇ ಲೋಪಗಳಾಗದಂತೆ ನೋಡಿಕೊಳ್ಳಬೇಕು. ಕ್ರೀಡಾಪಟುಗಳಿಗೆ ಸಾರಿಗೆ, ವಸತಿ ಸೇರಿದಂತೆ ಅವಶ್ಯ ಮೂಲಸೌಲಭ್ಯ ವ್ಯವಸ್ಥೆಗಳನ್ನು ಕಲ್ಪಿಸುವಂತೆ ನಿರ್ದೇಶನ ನೀಡಿದರು.
ಇತರೆ ಜಿಲ್ಲೆಗಳಿಂದ ಆಗಮಿಸುವ ಕ್ರೀಡಾಪಟುಗಳಿಗೆ ಸಂತೇಮರಹಳ್ಳಿಯ ವ್ಯಾಪ್ತಿಯಲ್ಲಿರುವ ವಿವಿಧ ಇಲಾಖೆಗಳ ವಿದ್ಯಾರ್ಥಿನಿಲಯಗಳಲ್ಲಿ ತಂಗುವ ವ್ಯವಸ್ಥೆ ಹಾಗೂ ಊಟ, ಉಪಹಾರದ ವ್ಯವಸ್ಥೆಯನ್ನು ಮಾಡಬೇಕು. ಅಗತ್ಯ ಸಾರಿಗೆ ವ್ಯವಸ್ಥೆಯನ್ನು ಕೆ.ಎಸ್.ಆರ್.ಟಿ.ಸಿ ವತಿಯಿಂದ ಕಲ್ಪಿಸಬೇಕು. ಕ್ರೀಡಾಕೂಟಕ್ಕೆ ಸೂಕ್ತ ಪೊಲೀಸ್ (ಭದ್ರತಾ ವ್ಯವಸ್ಥೆ) ಬಂದೋಬಸ್ತ್ ಒದಗಿಸಬೇಕು. ಕ್ರೀಡಾಕೂಟದ ಸ್ಥಳದಲ್ಲಿ ಆರೋಗ್ಯ ಇಲಾಖೆಯಿಂದ ಅಂಬುಲೆನ್ಸ್ ಸನ್ನದ್ಧವಾಗಿರಬೇಕು. ಜೊತೆಗೆ ಚಿಕಿತ್ಸೆಗಾಗಿ ಸ್ಟಾಫ್ ನರ್ಸ್‍ಗಳನ್ನು ನಿಯೋಜಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಕ್ರೀಡಾಕೂಟದ ದಿನಾಂಕವನ್ನು ನಿಗದಿಪಡಿಸಲಾಗುವುದೆಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಸಭೆಯಲ್ಲಿ ತಿಳಿಸಿದರು.
ಇದೇ ವೇಳೆ ಮಾತನಾಡಿದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪಾಟೀಲ್ ಅವರು ಫೆನ್ಸಿಂಗ್ ಜಿಲ್ಲೆಯಲ್ಲಿ ಕಳೆದ ಬಾರಿ ರಾಜ್ಯಮಟ್ಟದ ನೆಟ್‍ಬಾಲ್ ಕ್ರೀಡಾಕೂಟವನ್ನು ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಈ ಬಾರಿ ರಾಜ್ಯಮಟ್ಟದ ಫೆನ್ಸಿಂಗ್ ಕ್ರೀಡಾಕೂಟ ಚಾಮರಾಜನಗರ ಜಿಲ್ಲೆಗೆ ನಿಗದಿಯಾಗಿದೆ. 14 ವರ್ಷ ಹಾಗೂ 17 ವರ್ಷದೊಳಗಿನ ಮಕ್ಕಳಿಗಾಗಿ 2 ವಿಭಾಗದಲ್ಲಿ ನಡೆಯುವ ಕ್ರೀಡಾಕೂಟದಲ್ಲಿ ಬಾಲಕ ಹಾಗೂ ಬಾಲಕಿಯರಿಗಾಗಿ ಪ್ರತ್ಯೇಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಕ್ರೀಡಾಕೂಟದಲ್ಲಿ ಸುಮಾರು 250ರಿಂದ 300 ಮಂದಿ ಭಾಗವಹಿಸುವ ನಿರೀಕ್ಷೆ ಇದ್ದು, ಕ್ರೀಡಾಕೂಟದ ಯಶಸ್ಸಿಗಾಗಿ ಸಂಬಂಧಪಟ್ಟ ಇಲಾಖೆಗಳ ಸಹಕಾರ ಅಗತ್ಯವಾಗಿದೆ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ನಗರಸಭೆ ಪೌರಾಯುಕ್ತ ಪರಶುರಾಮ್ ಛಲವಾದಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ್‍ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ವಿಶ್ವನಾಥ್, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಬಿ.ಎಸ್. ರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರಾದ ಗಿರೀಶ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಸಂತೇಮರಹಳ್ಳಿಯ ಕ್ರೀಡಾ ಅರ್ಚರಿ ಮತ್ತು ಫೆನ್ಸಿಂಗ್ ಶಾಲೆಯ ತರಬೇತುದಾರರು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.