ಕಾಡಾನೆ ದಾಳಿಗೆ ವ್ಯಕ್ತಿ ಬಲಿ: ಸಚಿವ ಪುಟ್ಟರಂಗಶೆಟ್ಟಿ ಭೇಟಿ, ಸಾಂತ್ವನ

ಚಾಮರಾಜನಗರ: ತಾಲೂಕಿನ ಕುಳ್ಳೂರು ಗ್ರಾಮದಲ್ಲಿ ಕಾಡಾನೆ ದಾಳಿಗೆ ಮಹದೇವ ಎಂಬ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಪಶುಸಂಗೋಪನೆ, ರೇಷ್ಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವರು ಇಂದು ಮೃತರ ಕುಟುಂಬವನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು.

ಮೃತ ಮಹದೇವ ಅವರ ಕುಟುಂಬಕ್ಕೆ ಸಚಿವರು ವೈಯಕ್ತಿಕವಾಗಿ ಪರಿಹಾರ ಧನ ವಿತರಿಸಿದರು. ಮಹದೇವ ಅವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದು, ಕುಟುಂಬದ ನೆರವಿಗಾಗಿ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಉದ್ಯೋಗ ಕಲ್ಪಿಸುವುದಾಗಿ ಭರವಸೆ ನೀಡಿದರು.

ಚಾಮರಾಜನಗರ ಜಿಲ್ಲೆ ಹಾಗೂ ತಾಲೂಕಿನಲ್ಲಿ ಇತ್ತೀಚಿನ ದಿನಗಳಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಜನರು ಹಾಗೂ ಜಾನುವಾರುಗಳ ಮೇಲೆ ದಾಳಿ ಪ್ರಕರಣಗಳು ನಡೆಯುತ್ತಿವೆ. ಕಾಡುಪ್ರಾಣಿಗಳ ದಾಳಿ ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಜನರ ಸುರಕ್ಷತೆಗೆ ಆದ್ಯತೆ ನೀಡಿ, ಕಾಡಂಚಿನ ಗ್ರಾಮಗಳಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹೆಚ್ಚಿನ ನಿಗಾ ವಹಿಸುವಂತೆ ಸಚಿವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಬಿ.ಆರ್.ಟಿ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ, ಮುಖಂಡರಾದ ಜಡೇಯಪ್ಪ, ಉಲ್ಲಾಸ್ ಹಾಗೂ ಗ್ರಾಮದ ಯಜಮಾನರು,‌ ಮುಖಂಡರು ಇದ್ದರು.

Leave a Reply

Your email address will not be published. Required fields are marked *