ಶಾಸಕ ಸಿ.ಪುಟ್ಟರಂಗಶೆಟ್ಟಿಗೆ ಸಚಿವ ಸ್ಥಾನ ನೀಡುವಂತೆ ಮಂಜುನಾಥ್ ಪ್ರಸಾದ್ ಆಗ್ರಹ

ಚಾಮರಾಜನಗರ:  ಉಪ್ಪಾರ ಸಮುದಾಯ ಏಕೈಕ ಶಾಸಕರಾಗಿದ್ದು,ಚಾಮರಾಜನಗರ ವಿಧಾನಸಭಾ ಕ್ಷೇತ್ರದಿಂದ ಸತತ 4 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಸಿ. ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಪ್ರಧಾನ ಕಾರ್ಯದರ್ಶಿ ಎನ್.ಎಸ್.ಮಂಜುನಾಥಪ್ರಸಾದ್ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸರಳ ಸಜ್ಜನಿಕೆಯ ನಾಯಕರಾಗಿರುವ ಸಿ.ಪುಟ್ಟರಂಗಶೆಟ್ಟಿ ಅವರು ಭ್ರಷ್ಟಚಾರ ರಹಿತ – ರಾಜಕಾರಣಿಯಾಗಿದ್ದಾರೆ. ಅವರು ಕೇವಲ ಉಪ್ಪಾರ ಜನಾಂಗಕ್ಕೆ ಸೀಮಿತವಾಗಿಲ್ಲ. – ಎಲ್ಲ ಸಮುದಾಯದ ನಾಯ ಕರಾಗಿಯೂ ಗುರ್ತಿಸಿಕೊಂಡಿದ್ದಾರೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ದಾಂತಕ್ಕೆ ಅನುಗುಣವಾಗಿ ದುಡಿದಿದ್ದಾರೆ. ಎಚ್‌.ಡಿ.ಕುಮಾರಸ್ವಾಮಿ ಅವರ ಆಡಳಿತದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದು ಅಪಾರ ಅನುಭವ ಹೊಂದಿದ್ದಾರೆ. ಹಿರಿತನದ ಆಧಾರದ ಮೇಲೆ ಸಿ.ಪುಟ್ಟರಂಗಶೆಟ್ಟರಿಗೆ ಸಚಿವ ಸ್ಥಾನ ಹಾಗೂ ಜಿಲ್ಲಾ ಉಸ್ತುವಾರಿಯಾಗಿ ಮಾಡಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಉಪ್ಪಾರ ಜನಾಂಗವು 40 ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಹೊಂದಿದ್ದು ರಾಜ್ಯದ 33 ವಿಧಾನಸಭಾ ಕ್ಷೇತ್ರಗಳಲ್ಲಿ ಉಪ್ಪಾರ ಜನಾಂಗವು ನಿರ್ಣಾಯಕ ಪಾತ್ರ ವಹಿಸುತ್ತಿದೆ. ಸಿ.ಪುಟ್ಟರಂಗಶೆಟ್ಟಿ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದರು
ಪತ್ರಿಕಾಗೋಷ್ಠಿಯಲ್ಲಿ ಕೆಡಿಪಿ ಸದಸ್ಯ ಶ್ರೀನಿವಾಸ, ಜಿಲ್ಲಾ ಕಾಂಗ್ರೆಸ್ ಸಮಿತಿ ಹಿಂದುಳಿದ ವರ್ಗಗಳ ವಿಭಾಗದ ಉಪಾಧ್ಯಕ್ಷ ಮಹದೇವಶೆಟ್ಟಿ, ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗ ಕಾರ್ಯದರ್ಶಿ ಕೆ.ಎಸ್ ರೇವಣ್ಣ, ಮಹಿಳಾ ವಿಭಾಗದ ಕಾಂಗ್ರೆಸ್ ಸದಸ್ಯೆ ಕಾವ್ಯ ಹಾಜರಿದ್ದರು.

Leave a Reply

Your email address will not be published. Required fields are marked *