ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಗರದಲ್ಲಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅರ್ಥಪೂರ್ಣ ಆಚರಣೆ : ಗಮನ ಸೆಳೆದ ಸೈಕಲ್ ಜಾಥಾ

ಚಾಮರಾಜನಗರ: ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಲು ಹಲವು ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ‘ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಕ್ಯದಡಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ನಗರದಲ್ಲಿ ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಿಲ್ಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಜಾಪ್ರಭುತ್ವದಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸೈಕಲ್ ರ್ಯಾಲಿಗೆ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ, ಎ.ಆರ್. ಕೃಷ್ಣಮೂರ್ತಿ ಅವರು ಚಾಲನೆ ನೀಡಿದರು.

ಸೈಕಲ್ ರ್ಯಾಲಿಗೂ ಮೊದಲು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಗಣ್ಯರು ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಬಳಿಕ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜದ ಮಾದರಿ ಬಣ್ಣಬಣ್ಣದ ಧಿರಿಸು ಧರಿಸಿದ್ದ ಮಕ್ಕಳಿಂದ ಸಂವಿಧಾನ ಪೀಠಿಕೆ ವಾಚನ ನಡೆಯಿತು. ಈ ಬಾರಿ 18 ವರ್ಷ ತುಂಬುವ ನೂತನ ಮತದಾರ ವಿದ್ಯಾರ್ಥಿಗಳಿಂದ ಸಾಂಕೇತಿಕವಾಗಿ ಮತ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ದೊರೆಯಿತು.

ಬಳಿಕ ಗಣ್ಯರು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಹತ್ವ ಕುರಿತ ಛಾಯಾಚಿತ್ರ, ಚಿತ್ರಕಲೆ ಮತ್ತು ಭಾಷಣ ಸ್ಫರ್ಧೆಗಳನ್ನು ಉದ್ಘಾಟಿಸಿದರು. ‘ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಕ್ಯದ ಸೆಲ್ಫಿ ಪಾಯಿಂಟ್‍ನಲ್ಲಿ ಛಾಯಾಚಿತ್ರ ತೆಗೆಸಿಕೊಂಡರು. ಕಲಾವಿದರಾದ ನಟರಾಜು, ಜೆ.ಬಿ. ಮಹೇಶ್, ಮಂಜುನಾಥ್ ಅವರ ಸುಶ್ರಾವ್ಯ ಕಂಠದಲ್ಲಿ ಮೂಡಿಬಂದ ಸಂವಿಧಾನ ಪೀಠಿಕೆಯ ಗೀತಾ ಗಾಯನದ ಜೊತೆ ವಸತಿ ಶಾಲೆಯ ಚಿತ್ರಕಲಾ ಶಿಕ್ಷಕರು ಕಾವ್ಯಕುಂಚದ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಭಾವಚಿತ್ರವನ್ನು ರಚಿಸಿದ್ದು, ವಿಸ್ಮಯಗೊಳಿಸಿತು.  

ಕ್ರೈಸ್ ಶಾಲೆಗಳಲ್ಲಿ ಓದಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಾದ ಸಿಂಚನಾ ಹಾಗೂ ಸುಶ್ಮಿತಾ ಅವರನ್ನು ಸನ್ಮಾನಿಸಲಾಯಿತು. ಕೊಳ್ಳೇಗಾಲದ ಮೆಟ್ರಿಕ್ ನಂತರದ ಶ್ರೀ ಮಹರ್ಷಿ ವಾಲ್ಮೀಕಿ ಸರ್ಕಾರಿ ಬುಡಕಟ್ಟು ಆಶ್ರಮ ಶಾಲೆಯ ವಿದ್ಯಾರ್ಥಿಗಳಿಂದ ಮಹಾನಾಯಕ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ನೃತ್ಯ ಪ್ರದರ್ಶನ ನಡೆಯಿತು.

ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರು ಭಾರತೀಯರಾದ ಪ್ರತಿಯೊಬ್ಬರು ಸಂವೀಧಾನವನ್ನು ಗೌರವಿಸುವ ಹಾಗೂ ಸಂವಿಧಾನದ ಬಗ್ಗೆ ಹೆಚ್ಚು ಅರಿವು ಹೊಂದುವ ಉದ್ದೇಶದಿಂದ ‘ನನ್ನ ಮತ ನನ್ನ ಹಕ್ಕು’ ಎಂಬ ಘೋಷವಾಕ್ಯದಡಿ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ದೇಶದ ಎಲ್ಲಡೆ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಕಳೆದ ಬಾರಿಯೂ ಚಾಮರಾಜನಗರದಿಂದ ಬೀದರ್‍ವರೆಗೆ ಮಾನವ ಸರಪಳಿ ರಚಿಸಿ ಗಮನ ಸೆಳೆಯುವ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದರು.

ಭಾರತ ಸಂವಿಧಾನವನ್ನು ಭಾರತ ಮಾತ್ರವಲ್ಲ, ಇಡೀ ವಿಶ್ವವೇ ಗೌರವಿಸುತ್ತಿದೆ. ಅಂತರಾಷ್ಟ್ರೀಯವಾಗಿ ಭಾರತೀಯ ಸಂವಿದಾನಕ್ಕೆ ಮನ್ನಣೆ ದೊರೆತಿದೆ. ನಮ್ಮ ಸಂವಿಧಾನದ ಮಾದರಿಯನ್ನು ಹಲವು ದೇಶಗಳು ಅಳವಡಿಸಿಕೊಂಡಿವೆ. ವೈವಿಧ್ಯಮಯ ಬಹುಸಂಸ್ಕøತಿ ಹೊಂದಿರುವ ಭಾರತದಲ್ಲಿ ಪ್ರಜಾಪ್ರಭುತ್ವ ಗಟ್ಟಿಯಾಗಿ ನೆಲೆಯೂರಲು ಡಾ. ಬಿ.ಆರ್. ಅಂಬೇಡ್ಕರ್ ಸಂವಿಧಾನವೇ ಕಾರಣವಾಗಿದೆ. ಸಂವಿಧಾನದ ಮಹತ್ವವನ್ನು ಅರಿತು ಅದರ ಮಾರ್ಗದಸ್ನದಲ್ಲಿ ಮುನ್ನೆಡೆಯೋಣ ಎಂದು ಶಾಸಕರಾದ ಅ.ಆರ್. ಕೃಷ್ಣಮೂರ್ತಿ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಎಲ್ಲರಿಗೂ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಶುಭಾಷಯ ತಿಳಿಸಿ ಮಾತನಾಡಿ ಪ್ರಪಂಚದಲ್ಲಿ 90ರಿಂದ 110 ದೇಶಗಳಲ್ಲಿ ಪ್ರಜಾಪ್ರಭುತ್ವ ವ್ಯಸ್ಥೆ ಇದೆ. ಪ್ರಜಾಪ್ರಭುತ್ವದಲ್ಲಿ 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಹಕ್ಕು ಸಾಕಷ್ಟು ಪ್ರಾಮುಖ್ಯತೆ ಪಡೆದಿದೆ. ಮತದಾನವೇ ಪ್ರಜಾಪ್ರಭುತ್ವ ವ್ಯವಸ್ಥೆಯ ಶಕ್ತಿಯಾಗಿದೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನದ ಬಗ್ಗೆ ಜಾಗೃತಿ ಅವಶ್ಯವಾಗಿದೆ ಎಂದರು.

ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಚುಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಎಚ್.ಎಸ್. ಬಿಂದ್ಯಾ, ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ವೇದಿಕೆ ಕಾರ್ಯಕ್ರಮದ ಬಳಿಕ ನಡೆದ ಸೈಕಲ್ ರ್ಯಾಲಿಯಲ್ಲಿ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು, ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ ಅವರುಗಳು ಜಾಥಾದಲ್ಲಿ ಪಾಲ್ಗೊಳ್ಳುವ ಮೂಲಕ ಗಮನ ಸೆಳೆದರು. 

ಸುಮಾರು 6 ಕಿ.ಮೀ. ವರೆಗೆ ನಡೆದ ಸೈಕಲ್ ರ್ಯಾಲಿಯಲ್ಲಿ 14 ವರ್ಷ ಮೇಲ್ಪಟ್ಟ 400 ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು. ಜಿಲ್ಲಾಡಳಿತ ಭವನದ ಮುಂಭಾಗದಿಂದ ಆರಂಭವಾದ ಸೈಕಲ್ ರ್ಯಾಲಿ ರಾಮಸಮುದ್ರ - ಜೆ.ಎಸ್.ಎಸ್. ಕಾಲೇಜು - ಜೈ ಭುವನೇಶ್ವರಿ (ಪಚ್ಚಪ್ಪ) ವೃತ್ತ - ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ - ಸುಲ್ತಾನ್ ಷರೀಪ್ ವೃತ್ತದಲ್ಲಿ ಯೂ ಟರ್ನ್ ಪಡೆದು ಭುವನೇಶ್ವರಿ ವೃತ್ತದ ಮೂಲಕ ಜಿಲ್ಲಾಡಳಿತ ಭವನ ತಲುಪಿತು.

Leave a Reply

Your email address will not be published. Required fields are marked *