ಚಾಮರಾಜನಗರ: ಪ್ರತಿಯೊಬ್ಬ ವ್ಯಕ್ತಿಗೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ಮುಖ್ಯವಾಗಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ್ ಅವರು ತಿಳಿಸಿದರು.

ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಚಾಮರಾಜೇಶ್ವರ ದೇವಸ್ಥಾನದಿಂದ ಜಿಲ್ಲಾಡಳಿತ ಭವನದವರೆಗೆ ಹಮ್ಮಿಕೊಳ್ಳಲಾಗಿದ ಜಾಗೃತಿ ಜಾಥಾ ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ವರ್ಷ ಅಕ್ಟೋಬರ್ 10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯದ ಮಹತ್ವದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ದಿನಾಚರಣೆಯ ಪ್ರಮುಖ ಉದ್ದೇಶವಾಗಿದೆ. ದೈಹಿಕವಾಗಿ ಆರೋಗ್ಯವಾಗಿದ್ದರೂ ಮಾನಸಿಕವಾಗಿ ಅಸ್ವಸ್ಥರಾಗಿದ್ದರೆ ದೈನಂದಿನ ಕೆಲಸ ಕಾರ್ಯ ಸಾಧ್ಯವಾಗುವುದಿಲ್ಲ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಮಾನಸಿಕ, ದೈಹಿಕ ಆರೋಗ್ಯ ಕಾಪಾಡಿಕೊಳ್ಳಬೇಕಾಗಿದೆ ಎಂದರು
ಮಾನಸಿಕ ಆರೋಗ್ಯವೆಂದರೆ ನಮ್ಮ ಆಲೋಚನೆಗಳು, ಭಾವನೆಗಳು ಮತ್ತು ನಡವಳಿಕೆಗಳ ಸಮತೋಲನವಾಗಿದೆ. ಇದಕ್ಕಾಗಿ ನಿಯಮಿತ ವ್ಯಾಯಾಮ, ಧ್ಯಾನದ ಮೂಲಕ ಮನಸ್ಸನ್ನು ಸಮತೋಲನದಲ್ಲಿಟ್ಟುಕೊಳ್ಳುವುದೇ ಆಗಿದೆ. 8 ಗಂಟೆಗಳ ಕಾಲ ನಿದ್ರೆ, ಪೌಷ್ಟಿಕ, ಸಮತೋಲಿತ ಆಹಾರವನ್ನು ಸೇವನೆ ಅಗತ್ಯವಾಗಿದೆ. ಮದ್ಯಪಾನ, ಧೂಮಪಾನ, ಇತರೆ ಕೆಟ್ಟ ಅಭ್ಯಾಸಗಳಿಂದ ದೂರವಿದ್ದು, ಉತ್ತಮ ಮಾನಸಿಕ ಆರೋಗ್ಯವನ್ನು ಹೊಂದಬಹುದಾಗಿದೆ. ಮಾನಸಿಕ ಆರೋಗ್ಯದ ಮಹತ್ವದ ಬಗ್ಗೆ ಜನರಲ್ಲಿ ಹೆಚ್ಚಿನ ಜಾಗೃತಿ ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ್ ಅವರು ತಿಳಿಸಿದರು.
ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ. ಚಂದ್ರಶೇಖರ್ ಅವರು ಮಾತನಾಡಿ ಆರೋಗ್ಯವೆಂದರೆ ಕೇವಲ ರೋಗಗಳಿಲ್ಲದ ಸ್ಥಿತಿಯಲ್ಲ, ಅದು ಸಾಮಾಜಿಕ, ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಕ್ಷೇಮವನ್ನು ಒಳಗೊಂಡಿರುತ್ತದೆ. ಇವುಗಳಲ್ಲಿ ಮಾನಸಿಕ ಆರೋಗ್ಯ ಪ್ರಮುಖ ಪಾತ್ರ ವಹಿಸುತ್ತದೆ. ಮಾನಸಿಕ ಸಮಸ್ಯೆಗಳ ಬಗ್ಗೆ ಅನೇಕರು ಹೇಳಿಕೊಳ್ಳಲು, ಚಿಕಿತ್ಸೆ ಪಡೆಯಲು ಹಿಂಜರಿಯುತ್ತಾರೆ. ಮಾನಸಿಕ ಆರೋಗ್ಯ ಕುರಿತು ಜನರಿಗೆ ಅರಿವು ಮೂಡಿಸಿ ಸಮಸ್ಯೆಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಪೆÇ್ರೀತ್ಸಾಹಿಸುವುದು ಅಗತ್ಯವಾಗಿದೆ ಎಂದು ಹೆಳಿದರು.