ಹರದನಹಳ್ಳಿ, ನಿಜಲಿಂಗನಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ

ಚಾಮರಾಜನಗರ, ನ.16: ತಾಲೂಕಿನ ಹರದನಹಳ್ಳಿ ಹಾಗೂ ನಿಜಲಿಂಗನಪುರ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಭೂಮಿಪೂಜೆ ನೆರವೇರಿಸಿದರು.

ಹರದನಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದ ನಾಯಕರ ಬಡಾವಣೆಯಲ್ಲಿ ಟಿ.ಎಸ್.ಪಿ. ಯೋಜನೆಯಡಿ 50 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಹಾಗೂ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ನಂತರ ನಿಜಲಿಂಗನಪುರ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ 20 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ಉಪ್ಪಾರ ಸಮುದಾಯ ಭವನದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗ್ರಾಮೀಣ ರಸ್ತೆಗಳು ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿವೆ. ಆದ್ದರಿಂದ ಸಂಬಂಧಪಟ್ಟ ಗುತ್ತಿಗೆದಾರರು ಗುಣಮಟ್ಟದ ರಸ್ತೆ ನಿರ್ಮಾಣ ಮಾಡಬೇಕು. ಈ ಭಾಗದ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಸೂಚನೆ ನೀಡಿದರು.

ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಜನರ ಆಶಯಗಳಿಗೆ ಬದ್ಧರಾಗಿ ಗ್ರಾಮಗಳಲ್ಲಿ ರಸ್ತೆ, ಚರಂಡಿ, ಸಮುದಾಯ ಭವನ, ಆಶ್ರಯ ಮನೆ, ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರ್ಕಾರದಿಂದ ಮಂಜೂರಾಗುವ ವಿವಿಧ ಅನುದಾನ ಹಾಗೂ ಸೌಲಭ್ಯಗಳನ್ನು ಅರ್ಹ ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಎಚ್.ಎಂ. ಮಹದೇವಶೆಟ್ಟಿ, ಮಾಜಿ ಅಧ್ಯಕ್ಷ ವೆಂಕಟೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಮಂಜುನಾಥ್, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಕಲೀಂ, ಗಡಿಯಜಮಾನ ಜಯಸ್ವಾಮಿ, ಯಜಮಾನ್ ನಟರಾಜು, ಮುಖಂಡರಾದ ರಂಗಸ್ವಾಮಿನಾಯಕ, ರಾಮಚಂದ್ರ, ಬಸವಣ್ಣ, ಲಿಂಗರಾಜು, ಶಿವಣ್ಣ, ಪ್ರಜ್ವಾಲ್, ಕೆಆರ್‌ಐಡಿಎಲ್ ಇಂಜಿನಿಯರ್ ಅರುಣ್ ಸೇರಿದಂತೆ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *