ದೊಡ್ಡಮೋಳೆ ಗ್ರಾಮದಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರದ ನೂತನ ಕಟ್ಟಡ ಉದ್ಘಾಟನೆ

ಚಾಮರಾಜನಗರ: ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿಂದು ಜನಸಾಮಾನ್ಯರಿಗೆ ಆರೋಗ್ಯ ಸೇವೆ ನೀಡುವ ಆಯುಷ್ಮಾನ್ ಆರೋಗ್ಯ ಕೇಂದ್ರ ಕಟ್ಟಡವನ್ನು ಉದ್ಘಾಟಿಸಿದರು.

   ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೊಡ್ಡಮೋಳೆ ಗ್ರಾಮ ಪಂಚಾಯಿತಿ ಕಚೇರಿ ಹಿಂಭಾಗದಲ್ಲಿ 35 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ನೂತನ ಆರೋಗ್ಯ ಕೇಂದ್ರಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಚಾಲನೆ ನೀಡಿದರು.

   ಇದೇ ವೇಳೆ ಮಾತನಾಡಿದ ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ದೊಡ್ಡಮೋಳೆ ಗ್ರಾಮವು ಪ್ರಾಥಮಿಕ ಆರೋಗ್ಯ ಕೇಂದ್ರದ ನಿರ್ಮಾಣಕ್ಕೆ ಇರಬೇಕಾದ ಜನಸಂಖ್ಯೆಯನ್ನು ಹೊಂದಿದ ದೊಡ್ಡ ಗ್ರಾಮ ಪಂಚಾಯಿತಿಯಾಗಿದೆ. 2008ರಲ್ಲಿಯೇ ಇಲ್ಲಿ ಆರೋಗ್ಯ ಕೇಂದ್ರ ಕಟ್ಟಡ ಆಗಬೇಕಿತ್ತು. ಜಾಗದ ಕೊರತೆಯಿಂದ ಕಾಮಗಾರಿ ವಿಳಂಬವಾಗಿ 15 ವರ್ಷಗಳ ಬಳಿಕ ದೊಡ್ಡಮೋಳೆಯಲ್ಲಿ ನೂತನ ಆಯುಷ್ಮಾನ್ ಆರೋಗ್ಯ ಕೇಂದ್ರ ತೆರೆಯಲಾಗಿದೆ. ಈ ಭಾಗದ ಜನರು ಆರೋಗ್ಯ ಕೇಂದ್ರದ ಸದ್ಭಳಕೆ ಮಾಡಿಕೊಳ್ಳಬೇಕು ಎಂದರು.

   ಆರೋಗ್ಯ ಕೇಂದ್ರವು ಹರದನಹಳ್ಳಿ, ಚಿಕ್ಕಮೋಳೆ, ಬ್ಯಾಡಮೂಡ್ಲು, ಚಂದುಕಟ್ಟೆ ಮೋಳೆ, ಡೊಳ್ಳಿಪುರ, ಸೇರಿದಂತೆ ಸುತ್ತಲಿನ ಗ್ರಾಮಗಳ ಜನರು ಉಚಿತ ಆರೋಗ್ಯ ಸೇವೆ ಪಡೆಯಲು ಅನುಕೂಲವಾಗಲಿದೆ. ಸರ್ಕಾರವು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡಿದ್ದು, ಮುಂದಿನ ದಿನಗಳಲ್ಲಿ ಆಯುಷ್ಮಾನ್ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೇರಿಸಲು ಪ್ರಯತ್ನಿಸಲಾಗುವುದು. ಆರೋಗ್ಯ ಕೇಂದ್ರದಲ್ಲಿ ಒಬ್ಬರು ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಆಶಾ ಕಾರ್ಯಕರ್ತೆಯರು ಆರೋಗ್ಯ ಸೇವೆ ಒದಗಿಸಲಿದ್ದಾರೆ ಎಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ತಿಳಿಸಿದರು.     

  ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ದೊಡ್ಡಮೋಳೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ನಿರ್ಮಲ ರಂಗನಾಥ್, ಸದಸ್ಯರಾದ ಭಾಗ್ಯಮ್ಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ, ತಾಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ, ಹರದನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗುರುರಾಜ್ ಸಕಲಾತಿ, ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಪುಟ್ಟಸ್ವಾಮಿ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ದೊರೆಸ್ವಾಮಿ, ಗುತ್ತಿಗೆದಾರರಾದ ಸಮೀವುಲ್ಲಾ, ಇತರರು ಇದೇ ಸಂದರ್ಭದಲ್ಲಿ ಇದ್ದರು.

Leave a Reply

Your email address will not be published. Required fields are marked *