ಗ್ಯಾರಂಟಿ ಯೋಜನೆಗಳ ಅನುಷ್ಟಾನದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಮುಂದಾಗಿ : ಸೋಮೇಶ್ವರ್

ಚಾಮರಾಜನಗರ: ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ ಯೋಜನೆಗಳ ಅನುಷ್ಠಾನದಲ್ಲಿ ಜಿಲ್ಲೆ ಇನ್ನೂ ಹೆಚ್ಚಿನ ಪ್ರಗತಿ ಸಾಧಿಸಲು ಮುಂದಾಗಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಚಾಮರಾಜನಗರ ತಾಲೂಕು ಅಧ್ಯಕ್ಷರಾದ ಸೋಮೇಶ್ವರ ಅವರು ತಿಳಿಸಿದರು.

ನಗರದ ಜಿಲ್ಲಾ ಪಂಚಾಯತ್ ಹಳೇ ಕೆ.ಡಿ.ಪಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯ ಆರಂಭದಲ್ಲಿ ಅನುಪಾಲನಾ ವರದಿಯನ್ನು ಮಂಡಿಸಲಾಯಿತು. ಹಿಂದಿನ ಸಭೆಯಲ್ಲಿ ಪ್ರಸ್ತಾಪಿಸಲಾದ ಸಮಸ್ಯೆಗಳನ್ನು ಪರಿಹರಿಸಲು ಕೈಗೊಂಡಿರುವ ಕ್ರಮಗಳ ಕುರಿತು ಗೃಹಲಕ್ಷ್ಮೀ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು. 

ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಗ್ಯಾರಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ಸೋಮೇಶ್ವರ ಅವರು ಸರ್ಕಾರವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದೆ. ಜಿಲ್ಲೆಯು ಗೃಹಲಕ್ಷ್ಮೀ ಹಾಗೂ ಶಕ್ತಿ ಯೋಜನೆಗಳ ಅನುಷ್ಠಾನದಲ್ಲಿ ಇತರೆ ಜಿಲ್ಲೆಗಳಿಗಿಂತ ಮುಂಚೂಣಿಯಲ್ಲಿದೆ. ಹಾಗೇಯೇ ಅನ್ನಭಾಗ್ಯ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಬೇಕು ಎಂದರು.

ಗೃಹಲಕ್ಷ್ಮೀ ಯೋಜನೆ ಅನುಷ್ಟಾನದಲ್ಲಿ ಚಾಮರಾಜನಗರ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಯೋಜನೆ ಎಲ್ಲಾ ಮಹಿಳಾ ಫಲಾನುಭವಿಗಳನ್ನು ತಲುಪಬೇಕು. ಫಲಾನುಭವಿಗಳ ನೊಂದಣಿ ಸಂದರ್ಭದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆ ಎದುರಾದರು ಅದನ್ನು ಪರಿಹರಿಸಿಕೊಂಡು ಸಂಪೂರ್ಣ ಪ್ರಗತಿ ಸಾಧಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಅನುದಾನಕ್ಕೆ ಕೊರತೆ ಕಂಡುಬಂದರೆ ಕೂಡಲೆ ಸರ್ಕಾರದೊಂದಿಗೆ ಪತ್ರವ್ಯವಹಾರ ಮಾಡುವಂತೆ ತಿಳಿಸಿದರು. 

ಬಡವರು ಹಾಗೂ ಬಡತನ ರೇಖೆಗಿಂತ ಕೆಳಗಿರುವ ಸಾಮಾನ್ಯ ಜನರನ್ನು ಗುರಿಯಾಗಿಸಿಕೊಂಡು ಸರ್ಕಾರವು ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಅಧಿಕಾರಿಗಳು ಅಕ್ಕಿ, ಎಣ್ಣೆಕಾಳುಗಳು ಸೇರಿದಂತೆ ಇತರೆ ಪಡಿತರ ಕಾಳಸಂತೆಯಲ್ಲಿ ಮಾರಾಟವಾಗದಂತೆ ಎಚ್ಚರ ವಹಿಸಬೇಕು. ಗುಂಡ್ಲುಪೇಟೆ ತಾಲೂಕಿನಲ್ಲಿ ಸೀಮೆಎಣ್ಣೆ ವಿತರಣೆಯಲ್ಲಿ ಉಂಟಾಗಿರುವ ಗೊಂದಲ ಪರಿಹರಿಸಲು ಗ್ಯಾರಂಟಿ ಯೋಜನೆಗಳ ಸಮಿತಿ ಸದಸ್ಯರ ಸಮ್ಮುಖದಲ್ಲಿ ತಾಲೂಕಿನ ನ್ಯಾಯಬೆಲೆ ಅಂಗಡಿ ಮಾಲೀಕರ ಸಭೆ ಕರೆದು ಚರ್ಚಿಸಿ ಸಮಸ್ಯೆ ಪರಿಹರಿಸಬೇಕು ಎಂದು ಹೇಳಿದರು.

ಯುವನಿಧಿ ಯೋಜನೆಯಡಿ ನೊಂದಣಿಯಾಗಿರುವ ಫಲಾನುಭವಿಗಳು ಪ್ರತಿ ತಿಂಗಳು ಕಡ್ಡಾಯವಾಗಿ ಸೆಲ್ಪ್ ಡಿಕ್ಷರೇಷನ್ ನೀಡಬೇಕು. ತಪ್ಪಿದರೆ ಫಲಾನುಭವಿಗಳಿಗೆ ಹಣ ಜಮೆಯಾಗುವುದು ಸ್ಥಗಿತಗೊಳ್ಳಲಿದೆ. ಈ ಬಗ್ಗೆ ಜನರಿಗೆ ಹೆಚ್ಚಿನ ಅರಿವು ಮೂಡಿಸಬೇಕು. ಕೌಶಲ್ಯಾಭಿವೃದ್ಧಿ ಇಲಾಖೆಯಿಂದ ತಾಲೂಕುಗಳಲ್ಲಿ ಯುವನಿಧಿ ಪ್ರಚುರಗೊಳಿಸುವ ಬಗ್ಗೆ ಗ್ಯಾರಂಟಿ ಸಮಿತಿಗೆ ಮಾಹಿತಿ ನೀಡಿ ಕಾರ್ಯಕ್ರಮಕ್ಕೆ ಆಯಾ ತಾಲೂಕು ಸದಸ್ಯರನ್ನು ಆಹ್ವಾನಿಸಬೇಕು ಎಂದರು.

ಶಕ್ತಿ ಯೋಜನೆಯಡಿ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಯಳಂದೂರು ತಾಲೂಕಿನ ಕೃಷ್ಣಾಪುರ ಸರ್ಕಲ್‍ನಲ್ಲಿ ಬಸ್ ನಿಲುಗಡೆ ಮಾಡಬೇಕು. ದೊಡ್ಡಮೋಳೆ, ಬ್ಯಾಡಮೂಡ್ಲು ಹಾಗೂ ಚಂದುಕಟ್ಟೆ ಮೋಳೆ ಮಾರ್ಗದಲ್ಲಿ ಶಾಲಾಮಕ್ಕಳು ಹಾಗೂ ಕೂಲಿ ಕಾರ್ಮಿಕರು ಪ್ರಯಾಣಿಸಲು ಹೆಚ್ಚುವರಿ ಬಸ್‍ಗಳ ವ್ಯವಸ್ಥೆ ಮಾಡಬೇಕು. ಒಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಸಮಿತಿ ಸದಸ್ಯರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದು ಚಾಮರಾಜನಗರ ತಾಲೂಕು ಅಧ್ಯಕ್ಷರಾದ ಸೋಮೇಶ್ವರ ಅವರು ತಿಳಿಸಿದರು.

ಜಿಲ್ಲಾ ಪಂಚಾಯತ್ ಯೋಜನಾ ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ವಿ. ದೀಪಾ, ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಗುಂಡ್ಲುಪೇಟೆ ತಾಲೂಕು ಅಧ್ಯಕ್ಷರಾದ ಉಮಾಪತಿ, ಉಪಾಧ್ಯಕ್ಷರಾದ ರಾಜಶೇಖರ್, ಸದಸ್ಯರಾದ ಪ್ರದೀಪ್, ಕೊಳ್ಳೇಗಾಲ ತಾಲೂಕು ಉಪಾಧ್ಯಕ್ಷರಾದ ರವಿ ಬಸ್ತೀಪುರ, ಚಾಮರಾಜನಗರ ತಾಲೂಕು ಸಮಿತಿ ಸದಸ್ಯರಾದ ಹೊಂಗನೂರು ಜಯರಾಜು, ಭಾಗ್ಯ ಉಮ್ಮತ್ತೂರು, ಯಳಂದೂರು ತಾಲೂಕು ಸಮಿತಿ ಸದಸ್ಯರಾದ ದೇವರಾಜು ಕೃಷ್ಣಾಪುರ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *