ಜೂನ್ 21ರಂದು ನಗರದಲ್ಲಿ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ : ವ್ಯವಸ್ಥಿತ ನಿರ್ವಹಣೆಗೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಸೂಚನೆ

ಚಾಮರಾಜನಗರ: ನಗರದಲ್ಲಿ ಜೂನ್ 21ರಂದು ನಡೆಯಲಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯ ವ್ಯವಸ್ಥಿತ ನಿರ್ವಹಣೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಅಧಿಕಾರಿಗಳಿಗೆ ಸೂಚಿಸಿದರು.

   ನ್ಯಾಷನಲ್ ಟೆಸ್ಟ್ ಏಜೆನ್ಸಿ ವತಿಯಿಂದ ನಡೆಸಲಾಗುತ್ತಿರುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET-(UG)-2026) ಸಿದ್ದತೆ ಸಂಬಂಧ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯು ಜೂನ್ 21ರಂದು ಜಿಲ್ಲಾಕೇಂದ್ರದ 3 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪಿ.ಎಂ.ಶ್ರೀ ಕೇಂದ್ರಿಯ ವಿದ್ಯಾಲಯ, ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪರೀಕ್ಷಾ ಕೇಂದ್ರಗಳಾಗಿವೆ. ಪರೀಕ್ಷಾ ಅಕ್ರಮಗಳಿಗೆ ಅವಕಾಶವಾಗದಂತೆ ಹಾಗೂ ಯಾವುದೇ ಲೋಪ ಕಂಡುಬರದಂತೆ ಸಿದ್ದತಾ ಪ್ರಕ್ರಿಯೆಗಳಿಗೆ ಮುಂದಾಗಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

   ಪರೀಕ್ಷೆ ಸುಸೂತ್ರವಾಗಿ ನಡೆಸಲು ಅನುಕೂಲವಾಗುವಂತೆ ಪರೀಕ್ಷಾ ಕಾರ್ಯಕ್ಕೆ ಅತಿಥಿ ಶಿಕ್ಷಕರ ಬದಲಾಗಿ ಖಾಯಂ ಶಿಕ್ಷಕರನ್ನು ನಿಯೋಜಿಸಬೇಕು. ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ವಾಹನ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಲಿನ ಸೂಕ್ತ ಭದ್ರತೆಗಾಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಪರೀಕ್ಷಾರ್ಥಿಗಳ ಆರೋಗ್ಯ ಸುರಕ್ಷತೆಗಾಗಿ ಪರೀಕ್ಷಾ ಕೇಂದ್ರಗಳ ಸ್ಥಳದಲ್ಲಿ ಆಂಬುಲೆನ್ಸ್ ಮತ್ತು ಅಗ್ನಿಶಾಮಕ ವಾಹನಗಳನ್ನು ನಿಯೋಜಿಸಬೇಕು ಎಂದರು.

   ಪರೀಕ್ಷಾ ಕೇಂದ್ರಗಳಲ್ಲಿ ಸಿ.ಸಿ ಟಿವಿಗಳು ಸುವ್ಯವಸ್ಥೆಯಲ್ಲಿರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ನಿರಂತರವಾಗಿ ವಿದ್ಯುತ್ ಸರಬರಾಜು ಆಗಬೇಕು. ಜಿಲ್ಲೆಯ ಯಾವುದೇ ಭಾಗಗಳಿಂದ ಬರುವ ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದ ಹತ್ತಿರ ಇಳಿಯಲು ಅವಕಾಶವಾಗುವಂತೆ ಕೆ.ಎಸ್.ಆರ್.ಟಿ.ಸಿ ಬಸ್ ವ್ಯವಸ್ಥೆ ಮಾಡಬೇಕು. ಒಟ್ಟಾರೆ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ ಜಿಲ್ಲೆಯಲ್ಲಿ ಸುಲಲಿತವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

   ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ವೆಂಕಟೇಶ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪಾಟೀಲ್, ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಪುಟ್ಟಗೌರಮ್ಮ, ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಪಿ.ಎಂ.ಶ್ರೀ ಕೇಂದ್ರಿಯ ವಿದ್ಯಾಲಯದ ಪ್ರಾಂಶುಪಾಲರಾದ ದವಿಂಧರ್ ಸಿಂಗ್, ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಮಧು, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಅಶ್ವಿನಿ, ಜಿಲ್ಲಾಮಟ್ಟದ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *