ಚಾಮರಾಜನಗರ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಸಹಯೋಗದಲ್ಲಿ ಮಾರ್ಚ್ 14 ರಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಲಯದ ಆವರಣದಲ್ಲಿರುವ ಎ.ಡಿ.ಆರ್ ಕಟ್ಟಡದಲ್ಲಿಂದು ಲೋಕ್ ಅದಾಲತ್ ಸಂಬಂಧ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಇದೇ ತಿಂಗಳ 14ರಂದು ಜಿಲ್ಲಾದ್ಯಂತ ಲೋಕ್ ಅದಾಲತ್ ಏರ್ಪಡಿಸಲಾಗಿದೆ. ಲೋಕ್ ಅದಾಲತ್ ಅಂಗವಾಗಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀಯೋಗ್ಯ ಪ್ರಕರಣಗಳ ಶೀಘ್ರ ಹಾಗೂ ಪರಿಣಾಮಕಾರಿ ತೀರ್ಮಾನಕ್ಕೆ ಎ.ಡಿ.ಆರ್. ಕಟ್ಟಡದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆಯಲು ಇದೊಂದು ಸುವರ್ಣ ಅವಕಾಶವಾಗಿದೆ ಎಂದರು.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ಆಯಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಆನ್‍ಲೈನ್, ವೀಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್, ವಾಟ್ಸ್‍ಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಬಂಧಪಟ್ಟ ಪ್ರಾಧಿಕಾರ ಮತ್ತು ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.
ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿನಾ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ, ಮೋಟಾರ್ ಅಪಘಾತ ಪರಿಹಾರ ಪ್ರಕರಣಗಳು, ವಿದ್ಯುತ್, ನೀರಿನ ಶುಲ್ಕ, ಭೂಸ್ವಾಧೀನ, ವೇತನಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತ ಸೇವೆಗಳ ಪ್ರಕರಣಗಳು, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಹೇಳಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಇಬ್ಬರ ಒಪ್ಪಿಗೆಯಂತೆ ಪ್ರಕರಣವು ತೀರ್ಮಾನವಾಗುವುದರಿಂದ ಭಾಂದವ್ಯ ಉಳಿದು ವಿವಾದವು ಅಂತಿಮಗೊಳ್ಳುತ್ತದೆ. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಪ್ರಕರಣಗಳೂ ಸಹ ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ, ರಾಜಿ ಸಂಧಾನದ ಮೂಲಕ ಇತ್ಯರ್ಥಕ್ಕಾಗಿ ಅವಕಾಶ ಕಲ್ಪಿಸಲಾಗಿದೆ. ರಾಜಿ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿ ಮಾಡಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿಯಾಗಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಲು ವಿಶೇಷ ಅವಕಾಶವಾಗಿದೆ ಎಂದು ನ್ಯಾಯಾಧೀಶರು ತಿಳಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಅನ್ವಯ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪ್ರತಿದಿನ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವಿ.ಸಿ. ಮೂಲಕ ನಡೆಯುತ್ತಿದ್ದು, ಈ ಮೂಲಕವೂ ಅರ್ಜಿ ಸಲ್ಲಿಸಿ ಸಾರ್ವಜನಿಕರು ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥ ಮಾಡಿಕೊಳ್ಳಬಹುದಾಗಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಸಹಾಯವಾಣಿ ಸಂಖ್ಯೆ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ 08226-226022, ತಾಲೂಕು ಕಾನೂನು ಸೇವಾ ಸಮಿತಿಗಳಾದ ಯಳಂದೂರು 08226-224029, ಕೊಳ್ಳೇಗಾಲ 08224-256788, ಗುಂಡ್ಲುಪೇಟೆ 08229-223279, ಇ-ಮೇಲ್ ಜಟsಚಿಛಿhಟಿಚಿgಚಿಡಿ2021@gmಚಿiಟ.ಛಿom. ಸಂಪರ್ಕಿಸಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾದೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಈಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಪುಟ್ಟಸ್ವಾಮಿ, ಉಪಾಧ್ಯಕ್ಷರಾದ ರಂಗಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.