ಚಾಮರಾಜನಗರ : ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೇಶನದಂತೆ ಚಾಮರಾಜನಗರ ಜಿಲ್ಲಾದ್ಯಂತ ರಾಷ್ಟ್ರೀಯ ಲೋಕ್ ಅದಾಲತ್ ಪ್ರಕ್ರಿಯೆಯನ್ನು ಸೆಪ್ಟೆಂಬರ್ 19 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ನಗರದ ಜಿಲ್ಲಾ ನ್ಯಾಯಾಲಯದಲ್ಲಿರುವ ಎ.ಡಿ.ಆರ್. ಕಟ್ಟಡದ ಸಭಾಂಗಣದಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ, ಮುಂಚಿತವಾಗಿ ಚಾಮರಾಜನಗರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆಗಳಲ್ಲಿ ಆನ್‍ಲೈನ್, ವೀಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್.ಎಂ.ಎಸ್., ವಾಟ್ಸ್‍ಆಪ್ ಮೂಲಕ ಅಥವಾ ಖುದ್ದಾಗಿ ಹಾಜರಾಗುವ ಮೂಲಕ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು ಎಂದು ನ್ಯಾಯಾಧೀಶರು ತಿಳಿಸಿದರು.
ಲೋಕ್ ಅದಾಲತ್ ನಿಮಿತ್ತ ನ್ಯಾಯಾಲಯಗಳಲ್ಲಿ ಬಾಕಿ ಇರುವ ರಾಜೀ ಯೋಗ್ಯ ಪ್ರಕರಣಗಳನ್ನು ಶೀಘ್ರ ಪರಿಣಾಮಕಾರಿ ತೀರ್ಮಾನಕ್ಕೆ ಎ.ಡಿ.ಆರ್. ಕಟ್ಟಡದಲ್ಲಿ ಪೂರ್ವಭಾವಿ ಸಮಾಲೋಚನಾ ಕೇಂದ್ರ ತೆರೆಯಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ ಎಂದರು.
ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕ ವೇತನ, ಗ್ರಾಹಕರ ವೇದಿಕೆ, ರಿಯಲ್ ಎಸ್ಟೇಟ್, ಸಾಲ ವಸೂಲಾತಿ, ಚೆಕ್ ಅಮಾನ್ಯ ಪ್ರಕರಣಗಳು, ಮೋಟಾರ್ ಅಪಘಾತ ಪರಿಹಾರ, ವಿದ್ಯುತ್ ಮತ್ತು ನೀರಿನ ಶುಲ್ಕ, ಭೂ ಸ್ವಾಧೀನ, ವೇತನ ಭತ್ಯೆ ಹಾಗೂ ಪಿಂಚಣಿ, ಸಾರ್ವಜನಿಕ ಉಪಯುಕ್ತತೆ ಸೇವೆಗಳು, ರಾಜಿ ಯೋಗ್ಯ ಸಿವಿಲ್ ಮತ್ತು ಕ್ರಿಮಿನಲ್ ಪ್ರಕರಣಗಳು ಹಾಗೂ ಇತರೆ ಪ್ರಕರಣಗಳು, ಕುಟುಂಬ ನ್ಯಾಯಾಲಯದ ಪ್ರಕರಣಗಳನ್ನು (ವಿವಾಹ ವಿಚ್ಛೇದನವನ್ನು ಹೊರತುಪಡಿಸಿ) ಜನತಾ ನ್ಯಾಯಾಲಯಗಳಲ್ಲಿ ಇತ್ಯರ್ಥಪಡಿಸಲಾಗುವುದು ಎಂದು ಅವರು ತಿಳಿಸಿದರು.
ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜಿಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ನೀಡಲಾಗುವುದು. ಉಭಯ ಪಕ್ಷಕಾರರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಭಾಂದವ್ಯ ಉಳಿದು ವಿವಾದವು ಅಂತಿಮಗೊಳ್ಳುತ್ತದೆ. ನ್ಯಾಯಾಲಯಗಳಲ್ಲಿ ದಾಖಲಾಗದೇ ಇರುವ ಪ್ರಕರಣಗಳೂ ಸಹ ವ್ಯಾಜ್ಯ ಪೂರ್ವ ಪ್ರಕರಣಗಳೆಂದು ಪರಿಗಣಿಸಿ, ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದರು.
ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಗಳಿಗೆ ಪಾವತಿಸಲಾದ ಶುಲ್ಕವನ್ನು ಸಂಪೂರ್ಣವಾಗಿ ಮರು ಪಾವತಿಸಲಾಗುವುದು. ರಾಜಿ ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜಿ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರವಾಗಿ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ಇದೊಂದು ವಿಶೇಷ ಅವಕಾಶವಾಗಿದೆ ಎಂದು ತಿಳಿಸಿದರು.
ಕರ್ನಾಟಕ ಉಚ್ಚ ನ್ಯಾಯಾಲಯದ ಮಾರ್ಗಸೂಚಿ (ಎಸ್.ಓ.ಪಿ) ಯಂತೆ ಚಾಮರಾಜನಗರ ಜಿಲ್ಲೆಯಲ್ಲಿರುವ ಎಲ್ಲಾ ನ್ಯಾಯಾಲಯಗಳಲ್ಲಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಾದ ಯಳಂದೂರು, ಕೊಳ್ಳೇಗಾಲ ಹಾಗೂ ಗುಂಡ್ಲುಪೇಟೆಗಳಲ್ಲಿ ಲೋಕ್ ಅದಾಲತ್ ಗೆ ಸಂಬಂಧಿಸಿದಂತೆ ಪ್ರತಿದಿನ ಪೂರ್ವಭಾವಿ ಬೈಠಕ್‍ಗಳು ಭೌತಿಕ, ವಿ.ಸಿ. ಮೂಲಕ ನಡೆಯುತ್ತಿದ್ದು, ಇದರ ಮೂಲಕವೂ ಸಹ ಅರ್ಜಿ ಸಲ್ಲಿಸಿ ಪ್ರಕರಣಗಳನ್ನು ಶೀಘ್ರವಾಗಿ ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.
ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ 1800-425-90900, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಚಾಮರಾಜನಗರ 08226-226022, ತಾಲೂಕು ಕಾನೂನು ಸೇವಾ ಸಮಿತಿಗಳಾದ ಯಳಂದೂರು 08226-224029, ಕೊಳ್ಳೇಗಾಲ 08224-256788, ಗುಂಡ್ಲುಪೇಟೆ 08229-223279, ಇ-ಮೇಲ್ ಜಟsಚಿಛಿhಟಿಚಿgಚಿಡಿ2021@gmಚಿiಟ.ಛಿom. ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ ಅವರು ಪತ್ರಿಕಾಗೋಷ್ಠಿಯಲ್ಲಿ ಇದ್ದರು