ಚಾಮರಾಜನಗರ: ಇಲ್ಲಿನ ತಾಲೂಕು ಪಂಚಾಯತಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಪಿತಾಮಹ ಅಬ್ದುಲ್ ನಜೀರ್ ಸಾಬ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಆಚರಣೆ ಮಾಡಲಾಯಿತು.
ತಾಲೂಕು ಪಂಚಾಯತಿ ಕಾರ್ಯನಿರ್ವಾಹಕಾಧಿಕಾರಿ ಗಿರಿಧರ್ ಪುಷ್ಷಾರ್ಚನೆ ಮಾಡಿ ಮಾತನಾಡಿ, ದೇಶದಲ್ಲಿ
ಪ್ರತಿವರ್ಷ ಏ. 24 ರಂದು ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಆಚರಿಸಲಾಗುತ್ತದೆ. 1993 ರಲ್ಲಿ ಸಂವಿಧಾನದ 73ನೇ ತಿದ್ದುಪಡಿ ಕಾಯ್ದೆಯಡಿ ಪಂಚಾಯತ್ ರಾಜ್ ವ್ಯವಸ್ಥೆ ಜಾರಿಗೆ ಬಂದ ನೆನಪಿಗಾಗಿ ಈ ದಿನವನ್ನು ಆಚರಿಸಲಾಗುತ್ತದೆ, ಇದು ಗ್ರಾಮ ಮಟ್ಟದಲ್ಲಿ ಅಧಿಕಾರ ವಿಕೇಂದ್ರೀಕರಣ, ಸ್ಥಳೀಯ ಸ್ವ-ಆಡಳಿತ ಮತ್ತು ಗ್ರಾಮೀಣಾಭಿವೃದ್ಧಿಯನ್ನು ಉತ್ತೇಜಿಸುತ್ತದೆ ಎಂದರು. ಗ್ರಾಮೀಣ ಜನರಿಗೆ ಆಡಳಿತದಲ್ಲಿ ಪಾಲ್ಗೊಳ್ಳುವ ಅವಕಾಶ ನೀಡುವುದು ಮತ್ತು ಸ್ಥಳೀಯ ಆಡಳಿತವನ್ನು ಬಲಪಡಿಸುವುದು ಇದರ ಉದ್ದೇಶವಾಗಿದೆ. 2010 ರಿಂದ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಮೊದಲ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನು ಘೋಷಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯ, ಕುಡಿಯುವ ನೀರು, ಮತ್ತು ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಪಂಚಾಯತ್‌ಗಳ ಪಾತ್ರವನ್ನು ಇದು ಗುರುತಿಸುತ್ತದೆ ಎಂದರು.
ಸಾಧಕರಿಗೆ ಸನ್ಮಾನ: ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ, ತೆರಿಗೆ ವಸೂಲಾತಿಯಲ್ಲಿ ಶೇ 100% ಗುರಿ ತಲುಪಿದ ತಾಲೂಕಿನ ಗ್ರಾಮ ಪಂಚಾಯತಿಗಳಾದ
ಸಾಗಡೆ, ಅರಕಲವಾಡಿ, ಯರಗನಹಳ್ಳಿ, ಬಿಸಲವಾಡಿ.
ಮಹಿಳಾ ಸ್ನೇಹಿ ಪಂಚಾಯಿತಿ: ಇರಸವಾಡಿ, ಉತ್ತಮ ಅರಿವು ಕೇಂದ್ರ ಸಂತೆಮರಹಳ್ಳಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಹಾಯಕ ಲೆಕ್ಕಾಧಿಕಾರಿ ಪ್ರಭುಸ್ವಾಮಿ, ಅಧಿಕಾರಿಗಳು, ಸಿಬ್ಬಂದಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ಬಿಲ್ ಕಲೆಕ್ಟರ್‌ಗಳು, ಕ್ಲರ್ಕ್ ಕಮ್ ಡೇಟಾ ಎಂಟ್ರಿ ಆಪರೇಟರ್‌ಗಳು ಹಾಗೂ ವಾಟರ್‌ಮ್ಯಾನ್‌ಗಳು , ಹಾಜರಿದ್ದರು.