ಆ. 29ರಂದು ರಾಷ್ಟ್ರೀಯ ಕ್ರೀಡಾ ದಿನಾಚರಣೆ

  • ವಿವಿಧ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆ ಕೈಗೊಳ್ಳಿ – ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ

ಚಾಮರಾಜನಗರ: ಹಾಕಿ ಮಾಂತ್ರಿಕ ಮೇಜರ್ ಧ್ಯಾನ್‍ಚಂದ್ ಅವರ ಜನ್ಮದಿನದ ಅಂಗವಾಗಿ ಇದೇ ತಿಂಗಳ 29ರಂದು ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ವಿವಿಧ ಸ್ಪರ್ಧೆಗಳ ಆಯೋಜನೆಗೆ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಜಿಲ್ಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ ಹಾಗೂ ದಸರಾ ಕ್ರೀಡಾಕೂಟಗಳನ್ನು ಏರ್ಪಡಿಸುವ ಸಂಬಂಧ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

   ಚಾಮರಾಜನಗರ ಜಾನಪದ ಕಲೆ, ಸಂಸ್ಕøತಿಗೆ ಹೆಸರಾಗಿದ್ದರೂ ಕ್ರೀಡಾಕ್ಷೇತ್ರದಲ್ಲಿ ಸಾಧನೆಗೈದ ಸಾಕಷ್ಟು ಕ್ರೀಡಾ ಪ್ರತಿಭೆಗಳವೆ. ಗ್ರಾಮೀಣ ಭಾಗದ ಮಕ್ಕಳನ್ನು ಕ್ರೀಡೆಗೆ ಪ್ರೋತ್ಸಾಹಿಸಬೇಕಾಗಿದೆ. ಹೆಚ್ಚು ಹೆಚ್ಚು ಕ್ರೀಡಾಪಟುಗಳನ್ನು ಗುರುತಿಸಿ ಅವಕಾಶಗಳನ್ನು ನೀಡಬೇಕಿದೆ. ಈ ನಿಟ್ಟಿನಲ್ಲಿ ಆಗಸ್ಟ್ 29ರಂದು ಆಚರಿಸಲಾಗುವ ರಾಷ್ಟ್ರೀಯ ಕ್ರೀಡಾ ದಿನದಂದು ವಿವಿಧ ಸ್ಪರ್ಧೆಗಳ ವ್ಯವಸ್ಥಿತ ನಿರ್ವಹಣೆಗೆ ಸಿದ್ದತಾ ಕಾರ್ಯಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.  

   ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಮಕ್ಕಳು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಸ್ತೆ ಮ್ಯಾರಾಥಾನ್, ಸ್ಕೇಟಿಂಗ್ ಮ್ಯಾರಥಾನ್ ಹಾಗೂ ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕವಾಗಿ ಹಗ್ಗಜಗ್ಗಾಟ ಸ್ಪರ್ಧೆಗಳನ್ನು ನಗರದಲ್ಲಿ ಏರ್ಪಡಿಸಲಾಗುತ್ತಿದೆ. ಸ್ಪರ್ಧೆಗಳಲ್ಲಿ ಸ್ಥಳೀಯರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಮ್ಯಾರಥಾನ್ ಸ್ಪರ್ಧೆಯಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನಿಗಳಿಗೆ ಮತ್ತು ಹಗ್ಗಜಗ್ಗಾಟ ಸ್ಪರ್ಧೆಯ ಪ್ರಥಮ, ದ್ವಿತೀಯ ಸ್ಥಾನಿಗಳಿಗೆ ನಗದು ಬಹುಮಾನ ವಿತರಿಸಲಾಗುವುದು ಎಂದರು.

   ಸ್ಪರ್ಧೆಗಳು ನಡೆಯುವ ಸ್ಥಳದಲ್ಲಿ ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲ ಸೌಕರ್ಯಕ್ಕೆ ವ್ಯವಸ್ಥೆಗಳನ್ನು ಮಾಡಬೇಕು. ಸ್ಪರ್ಧೆಗಳಿಗೆ ಉತ್ತಮ ತೀರ್ಪುಗಾರರನ್ನು ನಿಯೋಜಿಸಬೇಕು. ತೀರ್ಪುಗಾರರು ನೀಡುವ ತೀರ್ಪಿನಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ನೋಡಿಕೊಳ್ಳಬೇಕು. ಸ್ಪರ್ಧಾಸ್ಥಳದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗುವುದು. ಕ್ರೀಡಾಪಟುಗಳಿಗೆ ಅನುಕೂಲವಾಗುವಂತೆ ಆರೋಗ್ಯ ಇಲಾಖೆಯಿಂದ ಪ್ರಥಮ ಚಿಕಿತ್ಸೆ ಒದಗಿಸಬೇಕು. ಅಲ್ಲದೆ ಅಂಬುಲೆನ್ಸ್ ಅನ್ನು ಸನ್ನದ್ಧ ಸ್ಥಿತಿಯಲ್ಲಿ ಇಡಬೇಕು ಎಂದು ಅಧಿಕಾರಿಗಳಿಗೆ ಹೆಚ್ಚುವರಿ ಜಿಲ್ಲಾಧಿಕಾರಿಯವರು ಹೇಳಿದರು.

   ಈ ಬಾರಿಯ ದಸರಾ ಕ್ರೀಡಾಕೂಟಗಳನ್ನು ಅತ್ಯಂತ ವ್ಯವಸ್ಥಿತವಾಗಿ ನಡೆಸಲು ಅಧಿಕಾರಿಗಳು ಮುಂದಾಗಬೇಕು. ಸ್ಪರ್ಧೆಗಳಲ್ಲಿ ಹೆಚ್ಚು ಮಂದಿ ಭಾಗವಹಿಸುವಂತೆ ಪ್ರೇರೆಪಿಸುವ ಕೆಲಸವಾಗಬೇಕು. ದಸರಾ ಕ್ರೀಡಾಕೂಟಗಳು ಮೊದಲು ತಾಲೂಕುಮಟ್ಟದಲ್ಲಿ ಆಯೋಜನೆಯಾಗಿ ಅಲ್ಲಿನ ವಿಜೇತರು ಜಿಲ್ಲಾಮಟ್ಟದಲ್ಲಿ ಪಾಲ್ಗೊಳ್ಳಬೇಕು. ಬಳಿಕ ವಿಭಾಗ ಹಾಗೂ ರಾಜ್ಯಮಟ್ಟದ ದಸರಾ ಕ್ರೀಡಾಕೂಟಗಳಲ್ಲಿ ಭಾಗವಹಿಸಲು ಅನುಕೂಲ ಮಾಡಿಕೊಡಬೇಕು. ಇದಕ್ಕಾಗಿ ಕ್ರೀಡಾ ಇಲಾಖೆಯ ಅಧಿಕಾರಿಗಳು ಕ್ಷೇತ್ರ ಶಿಕ್ಷಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ ಕ್ರೀಡಾಕೂಟ ಏರ್ಪಡಿಸಬೇಕು. ಕ್ರೀಡಾಕೂಟ ಆಯೋಜನೆಯಲ್ಲಿ ಯಾವುದೇ ಲೋಪಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ ಅವರು ತಿಳಿಸಿದರು.

  ನಗರಸಭೆ ಪೌರಾಯುಕ್ತರಾದ ಪರಶುರಾಮ್ ಛಲವಾದಿ, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಎಚ್.ಎಸ್. ಜನನ ಬಿಂದ್ಯಾ, ಜಿಲ್ಲಾ ಕ್ರೀಡಾಂಗಣ ಸಮಿತಿ ಸದಸ್ಯರಾದ ಶ್ರೀನಿವಾಸಪ್ರಸಾದ್, ಜಿಲ್ಲಾ ಯುವ ಪ್ರಶಸ್ತಿ ಪುರಸ್ಕøತರಾದ ಜಿ. ಬಂಗಾರು, ಕಾರ್ತಿಕ್ ನಾಯಕ್, ಶಿಕ್ಷಣ ಹಾಗೂ ಇತರೆ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *