ಚಾಮರಾಜನಗರ: ಜಿಲ್ಲೆಯ ಜನತೆಯ ಅಹವಾಲುಗಳನ್ನು ಆಲಿಸಿ ಮನೆ ಬಾಗಿಲಿನಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಹಾಗೂ ಆಯಾ ವಿಧಾನಸಭಾ ಕ್ಷೇತ್ರದ ಶಾಸಕರ ನೇತೃತ್ವದಲ್ಲಿ ತಾಲೂಕುಮಟ್ಟದ ಪ್ರಜಾಸೇವೆ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತಿದೆ.
ಸೆಪ್ಟೆಂಬರ್ 5ರಂದು ಬೆಳಿಗ್ಗೆ 10.30 ಗಂಟೆಗೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯನ್ನು ಚಾಮರಾಜನಗರ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 12ರ ಎರಡನೇ ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ. ಹನೂರು ಶಾಸಕರಾದ ಎಂ.ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ಹನೂರು ತಾಲೂಕಿನ ಕಸಬಾ ಹೋಬಳಿ ಸಭೆಯು ಹನೂರಿನ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯ ಭವನ ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಕೊಳ್ಳೇಗಾಲ ತಾಲೂಕಿನ ಕಸಬಾ ಹೋಬಳಿಯ ಸಭೆಯು ಕೊಳ್ಳೇಗಾಲ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ಮತ್ತು ಗುಂಡ್ಲುಪೇಟೆ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಸಭೆಯು ತೆರಕಣಾಂಬಿಯ ಡಾ. ಬಾಬು ಜಗಜೀವನ ರಾಮ್ ಭವನದಲ್ಲಿ ನಡೆಯಲಿದೆ.
ಸೆಪ್ಟೆಂಬರ್ 19ರ ಮೂರನೇ ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಪಶು ಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಗುಂಡ್ಲುಪೇಟೆ ತಾಲೂಕು ಮಟ್ಟದ ಪ್ರಜಾಸೇವೆ ಆಂದೋಲನ ಸಭೆಯು ಗುಂಡ್ಲುಪೇಟೆ ಪಟ್ಟಣದ ಗುರು ಭವನದಲ್ಲಿ ನಡೆಯಲಿದೆ.
ಸೆಪ್ಟೆಂಬರ್ 26ರ ನಾಲ್ಕನೇ ಶನಿವಾರದಂದು ಬೆಳಿಗ್ಗೆ 10.30 ಗಂಟೆಗೆ ಹೋಬಳಿ ಮಟ್ಟದ ಪ್ರಜಾಸೇವೆ ಆಂದೋಲನ ಸಭೆ ನಡೆಯಲಿದೆ. ಹನೂರು ಶಾಸಕರಾದ ಎಂ.ಆರ್. ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ರಾಮಾಪುರ ಹೋಬಳಿಯ ಸಭೆಯು ಜೆ.ಎಸ್.ಎಸ್. ಪ್ರೌಢಶಾಲೆ ಹಾಗೂ ಕೊಳ್ಳೇಗಾಲ ಶಾಸಕರಾದ ಎ.ಆರ್. ಕೃಷ್ಣಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಯಳಂದೂರು ತಾಲೂಕಿನ ಅಗರ ಹೋಬಳಿಯ ಸಭೆಯು ಅಗರದ ವಾಲ್ಮೀಕಿ ಭವನ ಮತ್ತು ಗುಂಡ್ಲುಪೇಟೆ ಶಾಸಕರಾದ ಹೆಚ್.ಎಂ. ಗಣೇಶ್ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಗುಂಡ್ಲುಪೇಟೆ ತಾಲೂಕು ಬೇಗೂರು ಹೋಬಳಿಯ ಪ್ರಜಾಸೇವೆ ಆಂದೋಲನ ಸಭೆಯು ಬೇಗೂರಿನ ಉಪ್ಪಾರ ಸಮುದಾಯ ಭವನದಲ್ಲಿ ನಡೆಯಲಿದೆ.
ಸಾರ್ವಜನಿಕರು ಸಭೆಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳು ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಸವಲತ್ತು ಪಡೆಯಲು ಅರ್ಜಿ ಸಲ್ಲಿಸಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ.
Related