ನುಡಿದಂತೆ ನಡೆದ ಸರ್ಕಾರ ನಮ್ಮದು : ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷರಾದ ಎಚ್.ಎಂ. ರೇವಣ್ಣ

ಚಾಮರಾಜನಗರ: ಪಂಚ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಮೂಲಕ ನುಡಿದಂತೆ ನಡೆದ ಸರ್ಕಾರ ನಮ್ಮದಾಗಿದೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ತಿಳಿಸಿದರು.

  ನಗರದ ವರನಟ ಡಾ. ರಾಜ್‍ಕುಮಾರ್ ಜಿಲ್ಲಾ ರಂಗಮಂದಿರದಲ್ಲಿಂದು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಕಾರ್ಯಗಾರ ಹಾಗೂ ಪ್ರಗತಿ ಪರಿಶೀಲನಾ ಸಭೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. 

ಇಡೀ ದೇಶಕ್ಕೆ ಮಾದರಿ ಹಾಗೂ ಜನಪರವಾಗಿರುವ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಗೊಳಿಸಿ ಜನರು ಸ್ವಾವಲಂಬಿಯಾಗಿ ಬದುಕಲು ಸರ್ಕಾರವು ಅನುವು ಮಾಡಿಕೊಟ್ಟಿದೆ. ಆರಂಭದಲ್ಲಿ ಗ್ಯಾರಂಟಿ ಯೋಜನೆಗಳ ಬಗ್ಗೆ ಜನರಿಗೆ ಇದ್ದ ಅನುಮಾನವನ್ನು ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರ ಮೆಟ್ಟಿನಿಂತಿದೆ. ದೇಶದ ಇತರೆ ರಾಜ್ಯಗಳು ನಮ್ಮ ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಅಳವಡಿಸಿಕೊಳ್ಳುತ್ತಿವೆ. ಚಾಮರಾಜನಗರ ಜಿಲ್ಲೆ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಮುಂಚೂಣಿಯಲ್ಲಿರುವುದು ಶ್ಲಾಘನೀಯವಾಗಿದೆ ಎಂದರು.

   ಇಂದಿರಾಗಾಂಧಿ ಹಾಗೂ ಡಿ. ದೇವರಾಜ ಅರಸು ಅವರು ಬಡವರಿಗಾಗಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರಿಗೆ ಮಾಸಾಶನ, ಮನೆರಹಿತರಿಗೆ ವಸತಿ ಯೋಜನೆ ಸೇರಿದಂತೆ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೊಳಿಸಿದ್ದರು. ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು 165ರ ಪೈಕಿ 158 ಭರವಸೆಗಳನ್ನು ಈಡೇರಿಸಿದ್ದಾರೆ. ಪ್ರಸ್ತುತ ಸರ್ಕಾರದ ಗ್ಯಾರಂಟಿ ಯೋಜನೆಗಳು ಬಿಟ್ಟಿಭಾಗ್ಯಗಳಲ್ಲ. ಬದಲಿಗೆ ಬಡವರು, ಶೋಷಿತರು, ಮಹಿಳೆಯರಿಗೆ ಸರ್ಕಾರ ನೀಡಿದ ಕೊಡುಗೆಯಾಗಿದೆ. ಮುಂದೆಯೂ ಕೂಡ ಗ್ಯಾರಂಟಿ ಯೋಜನೆಗಳು ಮುಂದುವರೆಯಲಿವೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯಾಧ್ಯಕ್ಷರಾದ ಹೆಚ್.ಎಂ ರೇವಣ್ಣ ಅವರು ಹೇಳಿದರು. 

   ಎಂ.ಎಸ್.ಐ.ಎಲ್ ಅಧ್ಯಕ್ಷರು ಹಾಗೂ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ನಾಯಕತ್ವದ ರಾಜ್ಯಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿ ಬಡವರ ಏಳಿಗೆಗೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳು ಶೋಷಿತರು, ಕಾರ್ಮಿಕರು, ಮಹಿಳೆಯರ ಪರವಾಗಿದ್ದು ಜನರ ಜೀವನಮಟ್ಟ ಸುಧಾರಣೆ ಕಾಣುತ್ತಿದೆ ಎಂದು ತಿಳಿಸಿದರು.  

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಡಾ. ಪುಷ್ಪಾ ಅಮರ್‍ನಾಥ್ ಅವರು ಮಾತನಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಶೋಷಿತರು, ಮಹಿಳೆಯರ ಸ್ವಾವಲಂಬನೆಯ ಕನಸು ಕಂಡಿದ್ದರು. ಅವರ ಆಶೋತ್ತರಗಳನ್ನು ನಮ್ಮ ಸರ್ಕಾರ ನನಸು ಮಾಡುತ್ತಿದೆ. ಗ್ಯಾರಂಟಿ ಯೋಜನೆಗಳಿಂದ ಹೆಣ್ಣುಮಕ್ಕಳಿಗೆ ಜೀವನ ಕಟ್ಟಿಕೊಳ್ಳುವ ಶಕ್ತಿ ಬಂದಿದೆ. ಪ್ರತಿತಿಂಗಳು ಒಂದು ಕುಟುಂಬಕ್ಕೆ 9 ರಿಂದ 10 ಸಾವಿರ ಹಣ ಉಳಿತಾಯದಿಂದ ಕುಟುಂಬಗಳು ಆರ್ಥಿಕವಾಗಿ ಸದೃಢವಾಗುತ್ತಿವೆ ಎಂದರು.

ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಮಾತನಾಡಿ ರಾಜ್ಯದ ಜನರ ಆರ್ಥಿಕ ಸ್ಥಿತಿ ಉತ್ತಮಗೊಳಿಸಲು ಗ್ಯಾರಂಟಿ ಯೋಜನೆಗಳು ನೆರವಾಗಿವೆ. ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿಗೂ ಹೆಚ್ಚು ಮಹಿಳೆಯರು ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಿರುವುದು ದಾಖಲೆಯಾಗಿದೆ. 2014ರಲ್ಲಿ ರಾಜ್ಯದಲ್ಲಿ ವ್ಯಕ್ತಿಯ ತಲಾ ಆದಾಯ 1 ಲಕ್ಷದ 4 ಸಾವಿರವಿತ್ತು. 2024-25ರಲ್ಲಿ 2 ಲಕ್ಷದ 5 ಸಾವಿರಕ್ಕೆ ಏರಿಕೆಯಾಗಿದ್ದು, ಕರ್ನಾಟಕವು ದೇಶದ ತಲಾ ಆದಾಯದಲ್ಲಿ ಇತರೆ ರಾಜ್ಯಗಳಿಗಿಂತ ಮುಂದಿದೆ ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯಲ್ಲಿ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ್ದು, ಗೃಹಲಕ್ಷ್ಮೀ ಯೋಜನೆಯಡಿ ರಾಜ್ಯದಲ್ಲಿಯೇ ಚಾಮರಾಜನಗರ ಜಿಲ್ಲೆ ಮೊದಲ ಸ್ಥಾನ ಪಡೆದಿದೆ. ಗ್ಯಾರಂಟಿ ಯೋಜನೆಗಳಿಂದ ಜನರು ಸ್ವಾಭಿಮಾನದ ಬದುಕು ಕಟ್ಟಿಕೊಳ್ಳಲು ಅನುಕೂಲವಾಗಿದೆ ಎಂದರು ತಿಳಿಸಿದರು.

ಆರಂಭದಲ್ಲಿ ಜಾಗೃತ ಕರ್ನಾಟಕದ ಡಾ. ವಾಸು ಅವರು ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಯೋಜನೆಗಳ ಬಗ್ಗೆ ಪಿ.ಪಿ.ಟಿ ಮೂಲಕ ಸವಿವರವಾಗಿ ಪ್ರಸ್ತುತಪಡಿಸಿದರು.

ವೇದಿಕೆ ಕಾರ್ಯಕ್ರಮಕ್ಕೂ ಮೊದಲು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ ರೇವಣ್ಣ, ಗಣ್ಯರು ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವಣ್ಣ ಅವರ ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದರು. ಬಳಿಕ ಗಣ್ಯರಿಗೆ ಪೂರ್ಣಕುಂಭ ಸ್ವಾಗತ ನೀಡಿ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರಕ್ಕೆ ಕರೆತರಲಾಯಿತು. ನಂತರ ವರನಟ ಡಾ. ರಾಜ್ ಕುಮಾರ್ ಜಿಲ್ಲಾ ರಂಗಮಂದಿರ ಆವರಣದಲ್ಲಿ ಎನ್.ಆರ್.ಎಲ್.ಎಂ. ಸದಸ್ಯರು ಆಯೋಜಿಸಿದ್ದ ಮಳಿಗೆಗಳನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಲೋಗೊ ಬಿಡುಗಡೆ ಮಾಡಲಾಯಿತು. ಕಲೆ ನಟರಾಜು ಸಾಹಿತ್ಯದಲ್ಲಿ ಗಾಯಕರಾದ ಸಿ.ಎಂ. ನರಸಿಂಹಮೂರ್ತಿ ಅವರು ಹಾಡಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತ ಕರ್ನಾಟಕ ಸರ್ಕಾರ ಹರುಷ ತಂದಿತು, ಗ್ಯಾರಂಟಿ ಯೋಜನೆಯ ನಮಗೆ ನೀಡಿತು ಎಂಬ ವೀಡಿಯೋ ದೃಶ್ಯಾವಳಿಯನ್ನು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ ಅವರು ಬಿಡುಗಡೆ ಮಾಡಿದರು.

  ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ಎಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಸೂರಜ್ ಹೆಗ್ಗಡೆ, ಗ್ರೇಟರ್ ಬೆಂಗಳೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಕೃಷ್ಣಪ್ಪ, ಅರುಣ್‍ಕುಮಾರ್, ಇತರೆ ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಸಮಿತಿ ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *