ಚಾಮರಾಜನಗರ: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಸಲಾಗುತ್ತಿದ್ದು, ಇದಕ್ಕೆ ರಾಜಕೀಯ ಪಕ್ಷಗಳು ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಸಂಬಂಧ ನಡೆದ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭಾರತ ಚುನಾವಣಾ ಆಯೋಗವು ದಿನಾಂಕ: 01.01.2027ಕ್ಕೆ ಅರ್ಹತಾ ದಿನಾಂಕ ನಿಗದಿಪಡಿಸಿ, ಭಾವಚಿತ್ರವಿರುವ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲು ವೇಳಾಪಟ್ಟಿ ಹೊರಡಿಸಿದೆ. ಇದರ ಅನುಸಾರ ಮತಗಟ್ಟೆಗಳ ಪುನರ್ ವಿಂಗಡಣೆ/ ಮರು ಹೊಂದಿಸುವಿಕೆ ಕಾರ್ಯವನ್ನು ನವೆಂಬರ್ 23ರೊಳಗೆ ನಡೆಸಲಾಗುವುದು. ಕರಡು ಮತದಾರರ ಪಟ್ಟಿಯನ್ನು ಡಿಸೆಂಬರ್ 1ರಂದು ಪ್ರಕಟಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿಸೆಂಬರ್ 1 ರಿಂದ 31ರವರೆಗೆ ಸಲ್ಲಿಸಲು ಅವಕಾಶವಿದೆ. 2027ರ ಜನವರಿ 14ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸಲಾಗುತ್ತದೆ. ಅಂತಿಮ ಮತದಾರರ ಪಟ್ಟಿಯನ್ನು 2027ರ ಜನವರಿ 20ರಂದು ಪ್ರಕಟಿಸಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.
ಚುನಾವಣಾ ಆಯೋಗದ ನಿರ್ದೇಶನದಂತೆ ನಡೆದ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆಯ ನಂತರ ಕಳೆದ ಅಕ್ಟೋಬರ್ 27 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಪ್ರಕಾರ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 1030 ಮತಗಟ್ಟೆಗಳಿದ್ದು, 3,92,481 ಪುರುಷರು, 4,08,341 ಮಹಿಳೆಯರು ಇತರೆ 36 ಮಂದಿ ಸೇರಿದಂತೆ ಒಟ್ಟು 8,00,858 ಮತದಾರರಿದ್ದಾರೆ ಎಂದು ಹೇಳಿದರು.
ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ನಡೆಸಲಾಗುತ್ತಿದ್ದು, ನಮೂನೆ-6 ರಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ನಮೂನೆ-7 ರಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲು, ನಮೂನೆ-8 ರಲ್ಲಿ ಹೆಸರು ತಿದ್ದುಪಡಿ, ಸ್ಥಳಾಂತರ, ವಿಕಲಚೇತನ ಮತದಾರರ ಗುರುತಿಸುವಿಕೆಗೆ ಅರ್ಜಿ ಸಲ್ಲಿಸಬಹುದು ಎಂದರು.
ಮತದಾರರ ಪಟ್ಟಿಗೆ ಹೆಸರು ಸೇರ್ಪಡೆ, ಬಿಡತಕ್ಕವು ಮತ್ತು ತಿದ್ದುಪಡಿ, ಸ್ಥಳಾಂತರ, ವಿಳಾಸ ಬದಲಾವಣೆಗಾಗಿ ನಿಗದಿಪಡಿಸಿದ ನಮೂನೆಗಳಲ್ಲಿ ಅರ್ಜಿಯನ್ನು ಸಂಬಂಧಪಟ್ಟ ಮತಗಟ್ಟೆ ಮಟ್ಟದ ಅಧಿಕಾರಿ (ಬಿಎಲ್ಒ)/ ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿ (ತಾಲೂಕು ತಹಶೀಲ್ದಾರ್) ಗಳಲ್ಲಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಯವರು ಹೇಳಿದರು.
ದಿನಾಂಕ 01.01.2027ಕ್ಕೆ 18 ವರ್ಷ ತುಂಬಿರುವ / ತುಂಬಲಿರುವ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಪ್ರಸ್ತುತ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿರುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ತಮ್ಮ ಪಕ್ಷಗಳಿಂದ ನೇಮಕ ಮಾಡಿರುವ ಬಿ.ಎಲ್.ಎ-2 ರವರಿಗೂ ಸೂಕ್ತ ತಿಳುವಳಿಕೆ ನೀಡುವಂತೆ ಜಿಲ್ಲಾಧಿಕಾರಿಯವರು ಮನವಿ ಮಾಡಿದರು.
ವಿಕಲಚೇತನ ಮತದಾರರನ್ನು ಗುರುತಿಸಿ ಅರ್ಹರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳದಿದ್ದಲ್ಲಿ, ಅಂತಹವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಬೇಕಾಗಿದೆ. ಕಾಡಂಚಿನ, ಗುಡ್ಡಗಾಡು ಪ್ರದೇಶ, ಗಿರಿಜನ ಕಾಲೋನಿಗಳಲ್ಲಿ ವಾಸಿಸುವ ನಿವಾಸಿಗಳ ಹಾಗೂ ದುರ್ಬಲ ವರ್ಗದ ಮತದಾರರಲ್ಲಿ ಅತ್ಯಂತ ಹೆಚ್ಚಿನ ಕಾಳಜಿ ವಹಿಸಿ, ಇಂತಹ ಪ್ರದೇಶದಲ್ಲಿ ಅರ್ಹರು ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಲ್ಲಿ, ಅಂತಹವರ ಹೆಸರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ವಹಿಸಬೇಕಿದೆ ಎಂದರು.
ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯಲ್ಲಿ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡಿ, ಪರಿಷ್ಕರಣಾ ಕಾರ್ಯವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ಮನವಿ ಮಾಡಿದರು.
ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಹೆಚ್.ಎಸ್. ತೋಂಟದಾರ್ಯಸ್ವಾಮಿ, ಬಾ.ಮ. ಕೃಷ್ಣಮೂರ್ತಿ, ಎಸ್. ರಾಮಚಂದ್ರ, ಆರ್. ಮಹದೇವು, ಸಿ.ಎಂ. ಕೃಷ್ಣ, ಸೈಯ್ಯದ್ ಅಕ್ರಮ್ಪಾಷ, ರಂಗಸ್ವಾಮಿ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
Related