ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರ ಮನವಿಗೆ ಸಕಾರಾತ್ಮಕ ಸ್ಪಂದನೆ

  • ಜಿಲ್ಲೆಯಲ್ಲಿ ನೂತನ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸ್ಥಾಪನೆ ಬಗ್ಗೆ ವರದಿಗೆ ತಜ್ಞರ ಸಮಿತಿ ರಚನೆ

ಚಾಮರಾಜನಗರ: ಜಿಲ್ಲೆಯಲ್ಲಿ ಹೊಸ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವನ್ನು ಸ್ಥಾಪಿಸಲು ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ತಜ್ಞರ ಸಮಿತಿ ರಚಿಸುವಂತೆ ಲೋಕಸಭಾ  ಸದಸ್ಯರಾದ ಸುನಿಸ್ ಬೋಸ್ ಅವರು ಮಾಡಿದ ಮನವಿಗೆ ಸಕಾರಾತ್ಮಕ ಸ್ಪಂದನೆ ದೊರೆತಿದ್ದು, ತಜ್ಞರ ಸಮಿತಿ ರಚಿಸಲಾಗಿದೆ.

   ಚಾಮರಾಜನಗರ ಜಿಲ್ಲೆಯಲ್ಲಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ಹೊಸ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ ಸ್ಥಾಪಿಸಲು ತಜ್ಞರ ಸಮಿತಿ ರಚಿಸುವಂತೆ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರು ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಮನವಿ ಸಲ್ಲಿಸಿದ್ದರು. 

   ಇದಕ್ಕೆ ಸ್ಪಂದನೆ ದೊರೆತಿದೆ. ಚಾಮರಾಜನಗರ ಜಿಲ್ಲೆಯ ತೋಟಗಾರಿಕಾ ಅಭಿವೃದ್ಧಿಯ ಹಿತದೃಷ್ಠಿಯಿಂದ ಹಾಗೂ ರೈತ ಸಮುದಾಯದ ಕಲ್ಯಾಣಕ್ಕಾಗಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಅಧೀನದಲ್ಲಿ ಹೊಸ ತೋಟಗಾರಿಕೆ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಯ ಕಾರ್ಯಸಾಧ್ಯತಾ ಅಧ್ಯಯನಕ್ಕಾಗಿ ಹಾಗೂ ಅಗತ್ಯ ಆಡಳಿತಾತ್ಮಕ ಶಿಫಾರಸು ಪಡೆದುಕೊಳ್ಳಲು  ತೋಟಗಾರಿಕೆ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ತಜ್ಞರೊಳಗೊಂಡ ಸಮಿತಿಯನ್ನು ರಚಿಸಲು ಪ್ರಸ್ತಾವನೆ ಸಲ್ಲಿಸಿದ್ದರು.  ಅದರಂತೆ ತಜ್ಞರ ಸಮಿತಿ ರಚಿಸಲಾಗಿದೆ. 

   ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರು ಸಮಿತಿಯ ಅಧ್ಯಕ್ಷರಾಗಿದ್ದಾರೆ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕರು, ಆಸ್ತಿ ಅಧಿಕಾರಿಗಳು, ಮೈಸೂರು ತೋಟಗಾರಿಕೆ ಮಹಾವಿದ್ಯಾಲಯದ ಡೀನ್, ಸಹ ಪ್ರಾಧ್ಯಾಪಕರಾದ ಡಾ. ಜಿ. ಮಂಜುನಾಥ, ಬೆಂಗಳೂರು ಪ್ರಾದೇಶಿಕ ತೋಟಗಾರಿಕೆ ಸಂಶೋಧನೆ ಮತ್ತು ವಿಜ್ಞಾನ ಕೇಂದ್ರದ ಸಹ ಸಂಶೋಧನಾ ಮತ್ತು ವಿಸ್ತರಣಾ ನಿರ್ದೇಶಕರು, ಮೈಸೂರಿನ ತೋಟಗಾರಿಕೆ ವಿಜ್ಞಾನ ಮತ್ತು ಶಿಕ್ಷಣ ಕೇಂದ್ರದ ಮುಖ್ಯಸ್ಥರು ಹಾಗೂ ಸಹ ಪ್ರಾಧ್ಯಾಪಕರಾದ ಡಾ. ತನ್ವೀರ್ ಅಹಮದ್ ಸಮಿತಿಯ ಸದಸ್ಯರಾಗಿದ್ದಾರೆ. ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶನಾಲಯದ ತಾಂತ್ರಿಕ ಅಧಿಕಾರಿಗಳು ಹಾಗೂ ಸಹಾಯಕ ಪ್ರಾಧ್ಯಾಪಕರಾದ ಡಾ. ಮಂಜುನಾಥ ಹುಬ್ಬಳ್ಳಿ ಅವರು ಸಮಿತಿಯ ಸದಸ್ಯ ಸಂಚಾಲಕರಾಗಿದ್ದಾರೆ. 

   ಸಮಿತಿಯು ಹೊಸ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರವನ್ನು ಸ್ಥಾಪಿಸುವ ಪ್ರಸ್ತಾವನೆಯ ಅವಶ್ಯಕತೆ ಮತ್ತು ಕಾರ್ಯಸಾಧ್ಯತೆಗಳನ್ನು ಪರಿಶೀಲಿಸಿ ಎರಡು ತಿಂಗಳೊಳಗೆ ಸ್ಪಷ್ಟ ವರದಿಯನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.  

  ಜಿಲ್ಲೆಯ ತೋಟಗಾರಿಕಾ ಕ್ಷೇತ್ರದ ಸಮಗ್ರ ಅಭಿವೃದ್ದಿ ಹಾಗೂ ರೈತ ಸಮುದಾಯದ ಹಿತದೃಷ್ಠಿಯಿಂದ ಸಲ್ಲಿಸಲಾಗಿದ್ದ ಲೋಕಸಭಾ ಸದಸ್ಯರಾದ ಸುನೀಲ್ ಬೋಸ್ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಕೇಂದ್ರ ಸ್ಥಾಪನೆ ಬಗ್ಗೆ ಪರಿಶೀಲಿಸಿ ವರದಿ ನೀಡಲು ತಜ್ಞರ ಸಮಿತಿ ರಚಿಸುವ ಮೂಲಕ ಅಗತ್ಯ ಆಡಳಿತಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿದೆ. 

   ಈ ಕೇಂದ್ರ ಸ್ಥಾಪನೆಯಿಂದಾಗಿ ಜಿಲ್ಲೆಯ ತೋಟಗಾರಿಕಾ ಬೆಳೆಗಳ ಉತ್ಪಾದಕತೆ ಹೆಚ್ಚಳ, ಗುಣಮಟ್ಟ ವೃದ್ಧಿ, ವೈಜ್ಞಾನಿಕ ಮೌಲ್ಯವರ್ಧನೆ ಹಾಗೂ ಸುಸ್ಥಿರ ಕೃಷಿ ಪದ್ದತಿಗಳಿಗೆ ಮಹತ್ತರ ಉತ್ತೇಜನ ದೊರೆಯಲಿದ್ದು, ರೈತರ ಆದಾಯ ದ್ವಿಗುಣಗೊಳ್ಳಲು ಸಹಕಾರಿಯಾಗಲಿದೆ.

Leave a Reply

Your email address will not be published. Required fields are marked *