ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಕ್ಕಳಲ್ಲಿರುವ ಸುಪ್ತ ಪ್ರತಿಭೆಗಳನ್ನು ಗುರುತಿಸಿ, ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿ ಸೂಕ್ತ ವೇದಿಕೆಯಾಗಿದೆ ಎಂದು ಮಂಗಲ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕ ವೆಂಕಟೇಶ್ ಹೇಳಿದರು.
ತಾಲೂಕಿನ ಮಂಗಲದ ಸೇವಾ ಭಾರತಿ ಹಿರಿಯ ಪ್ರಾಥಮಿಕ ಶಾಲಾವರಣದಲ್ಲಿ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಇಲಾಖೆ, ಸಮಗ್ರ ಶಿಕ್ಷಣ ಕರ್ನಾಟಕ, ಚಾಮರಾಜನಗರ ತಾಲೂಕು ಮತ್ತು ಜಿಲ್ಲೆ, ಸಮೂಹ ಸಂಪನ್ಮೂಲ ಕೇಂದ್ರ ಮಂಗಲ ವತಿಯಿಂದ ನಡೆದ ಮಂಗಲ ಕ್ಲಸ್ಟರ್ ಹಂತದ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಇಲಾಖೆಯು 2002ನೇ ಸಾಲಿನಲ್ಲಿ ‘ಪ್ರತಿಭಾ ಕಾರಂಜಿ’ ಕಾರ್ಯಕ್ರಮವನ್ನು ಜಾರಿಗೆ ತಂದಿತು. ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಲ್ಲಿ ಅಡಗಿರುವ ಸಾಂಸ್ಕೃತಿಕ ಹಾಗೂ ಸಾಹಿತ್ಯಕ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಕಲ್ಪಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ. ಈ ಕಾರ್ಯಕ್ರಮ ಶಾಲಾಹಂತದಿಂದ ಕ್ಲಸ್ಟರ್, ತಾಲೂಕು, ಜಿಲ್ಲೆ. ಹಾಗೂ ರಾಜ್ಯ ಮಟ್ಟದವರೆಗೆ ಸ್ಪರ್ಧೆಗಳು ನಡೆಯುವುದರಿಂದ ಮಕ್ಕಳಿಗೆ ದೊಡ್ಡಮಟ್ಟದ ವೇದಿಕೆಗಳು ಪರಿಚಯವಾಗುತ್ತದೆ. ಜನಸಮೂಹದ ಮುಂದೆ ಕಮ್ಮ ಪ್ರತಿಭೆಯನ್ನು ಪ್ರದರ್ಶಿಸುವುದರಿಂದ ಮಕ್ಕಳಲ್ಲಿರುವ ಸಂಕೋಶ, ಭಯ ದೂರವಾಗಿ ಆತ್ಮವಿಶ್ವಾಸ ಹೆಚ್ಚುತ್ತದೆ.ಈ ಮೂಲಕ ಅನೇಕ ಗ್ರಾಮೀಣ ಪ್ರತಿಭೆಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಳ್ಳುತ್ತಿರುವುದು ಶಿಕ್ಷಕರು, ಪೋಷಕರು ಹಾಗೂ ಸಮಾಜಕ್ಕೆ ಹೆಮ್ಮೆಯ ಸಂಗತಿಯಾಗಿದೆ ಎಂದರು.
ಬಿಆರ್ ಪಿ ಸವಿತಾ ಮಾತನಾಡಿ, ಮಕ್ಕಳಲ್ಲಿನ ಪ್ರತಿಭೆಯನ್ನು ಗುರುತಿಸಿ, ಸೂಕ್ತ ಮಾರ್ಗದರ್ಶನ ನೀಡುವಲ್ಲಿ ಶಿಕ್ಷಕರು ಹಾಗೂ ಪೋಷಕರ ಪಾತ್ರ ಮಹತ್ವದ್ದಾಗಿದೆ. ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಅದರಲ್ಲಿ ಪ್ರತಿಭಾ ಕಾರಂಜಿ ಮಕ್ಕಳ ಓದು, ಬರಹ ಜೊತೆಗೆ ಎಲ್ಲ ಕ್ಷೇತ್ರಗಳಲ್ಲೂ ಮುಂದುವರೆಯುವಂತೆ ಮಾಡುತ್ತದೆ ಎಂದರು.
ಸೇವಾ ಭಾರತಿ ಶಾಲೆಯ ಮುಖ್ಯ ಶಿಕ್ಷಕ ರಾಜೇಅರಸ್ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಗ್ರಾ.ಪಂ.ಮಾಜಿ ಸದಸ್ಯ ಸುರೇಶ್, ಎಸ್ ಡಿಎಂಸಿ ಅಧ್ಯಕ್ಷ ನಾರಾಯಣಸ್ವಾಮಿ, ಇಸಿಓ ರೇವಣ್ಣ, ಸಿ ಆರ್ ಪಿ ಆರ್.ಶಿವಮೂರ್ತಿ, ಮುಖ್ಯಶಿಕ್ಷಕರಾದ ಎಂ.ಪುಟ್ಟಸ್ವಾಮಿ, ಜಿ.ರಾಜು, ರವಿಕುಮಾರ್, ಶಾಂತರಾಜು, ಸಿ.ಎಂ.ಶಿವಕುಮಾರ್, ಬಿ.ಎಂ.ಲತಾಪುಟ್ಟಸ್ವಾಮಿ, ಕುಮಾರ್, ನಂದಿನಿ ಹಾಗು ವಿದ್ಯಾರ್ಥಿಗಳು ಭಾಗವಹಿಸಿದ್ದರು.
