
ಚಾಮರಾಜನಗರ: ಕ್ರೀಡಾಪಟುಗಳು ಉತ್ತಮ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಆದ್ಯತೆ ನೀಡುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಸಲಹೆ ಮಾಡಿದರು.
ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಇಲಾಖೆ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ 14 ರಿಂದ 17 ವರ್ಷ ವಯೋಮಿತಿಯ ಬಾಲಕ, ಬಾಲಕಿಯರ ಮೈಸೂರು ವಿಭಾಗಮಟ್ಟದ ಎರಡು ದಿನಗಳ ಹ್ಯಾಂಡ್ ಬಾಲ್ ಪಂದ್ಯಾವಳಿಯಲ್ಲಿ ಕ್ರೀಡಾ ಧ್ವಜಾರೋಹಣ ನೆರವೇರಿಸಿ, ಹ್ಯಾಂಡ್ ಬಾಲ್ ಎಸೆಯುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮೈಸೂರು ವಿಭಾಗಮಟ್ಟದ ಹ್ಯಾಂಡ್ ಬಾಲ್ ಪಂದ್ಯಾವಳಿಯನ್ನು ಚಾಮರಾಜನಗರದಲ್ಲಿ ಆಯೋಜಿಸಲಾಗಿದೆ. ಹಾಸನ, ಮೈಸೂರು, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು, ಉಡುಪಿ ಮತ್ತು ಮಂಡ್ಯ ಜಿಲ್ಲೆಗಳಿಂದ ಆಗಮಿಸಿರುವ ಕ್ರೀಡಾಪಟುಗಳು ದೈಹಿಕ, ಮಾನಸಿಕ ಆರೋಗ್ಯಕ್ಕೆ ಆದ್ಯತೆ ನೀಡಬೇಕು. ವಿದ್ಯಾರ್ಥಿ ಜೀವನದಲ್ಲಿ ನಾನು ಸಹ ಉತ್ತಮ ಕ್ರೀಡಾಪಟುವಾಗಿದ್ದು, ಹೆಚ್ಚಾಗಿ ಅಥ್ಲೇಟಿಕ್ ಕ್ರೀಡೆಗಳಲ್ಲಿ ಭಾಗವಹಿಸುತ್ತಿದ್ದೆ. ಕ್ರೀಡೆಗಳಲ್ಲಿ ಆಸಕ್ತಿಯ ಜೊತೆಗೆ ಪರಿಶ್ರಮವಿದ್ದರೆ ಬಹುಮಾನಗಳು ಹಾಗೂ ಪ್ರಶಸ್ತಿಗಳು ಲಭಿಸುತ್ತವೆ ಎಂದÀರು.
ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾಗಲು ಸಮಯದ ಜೊತೆಗೆ ದೈಹಿಕ ಸಾಮಥ್ರ್ಯಕ್ಕೂ ಪ್ರಾಮುಖ್ಯತೆ ನೀಡಬೇಕು. ಕ್ರೀಡಾಪಟುಗಳು ಪ್ರಾಮಾಣಿಕವಾಗಿ ಆಟಗಳಲ್ಲಿ ಪಾಲ್ಗೊಳ್ಳಬೇಕು. ಕ್ರೀಡಾ ಮನೋಭಾವ ಮೆರೆಯಬೇಕು. ಗೆಲುವು ಯಾವಾಗಲೂ ನಿಮ್ಮದೇ ಆಗಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಅವರು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಹಮದ್ ಅಸ್ಗರ್ ಮುನ್ನಾ ಅವರು ವಿಭಾಗ ಮಟ್ಟದ ಪಂದ್ಯಾವಳಿಗೆ 8 ಜಿಲ್ಲೆಯಿಂದ ನಗರಕ್ಕೆ ಆಗಮಿಸಿದ್ದು, ಉತ್ತಮ ಪ್ರದರ್ಶನ ನೀಡಿ ಕ್ರೀಡೆಗಳಲ್ಲಿ ಆಯ್ಕೆಯಾಗಬೇಕು. ಕ್ರೀಡೆಗಳಲ್ಲಿ ಸೋಲು ಗೆಲುವು ಸಾಮಾನ್ಯವಾಗಿದ್ದು, ಇಂದಿನ ಗೆಲುವು ಸ್ಪರ್ಧಾರ್ಥಿಗಳ ಕ್ರೀಡಾ ಜೀವನವನ್ನು ನಿರ್ಧರಿಸುತ್ತದೆ. ಸೋತವರು ನಿರಾಶಾರಾಗದೇ ಮುಂದಿನ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾ ಪಟುಗಳಾಗಿ ಬೆಳೆಯಿರಿ ಎಂದÀರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್. ಚಂದ್ರಪಾಟೀಲ್ ಅವರು ಮಾತನಾಡಿ ವಿದ್ಯಾರ್ಥಿಗಳು ಕ್ರೀಡಾ ಮನೋಭಾವ ಹೊಂದಿರಬೇಕು. ಕ್ರೀಡೆಗಳು ಕೇವಲ ಮನೋರಂಜನೆಗಾಗಿ ಇರುವುದಲ್ಲ, ಬದಲಾಗಿ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸದೃಢÀಗೊಳಿಸಲು ಕ್ರೀಡೆಗಳಲ್ಲಿ ಭಾಗವಹಿಸಬೇಕು. ಗೆದ್ದವರು ಹಿಗ್ಗದೆ, ಸೋತವರು ಕುಗ್ಗದೆ ಸೋಲು ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಯುವ ಸಬಲೀಕರಣ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಸುರೇಶ್ ಅವರು ಮಾತನಾಡಿ ವಿದ್ಯಾರ್ಥಿಗಳಿಗೆ ಶಿಕ್ಷಣದ ಜೊತೆಗೆ ಕ್ರೀಡಾಸಕ್ತಿ ಇರಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕ್ರೀಡೆಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಒಲಂಪಿಕ್ಸ್, ಕಾಮನ್‍ವೆಲ್ತ್, ಏಷ್ಯಾ ಕಪ್ ಕ್ರೀಡೆಗಳಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಲಾಗುತ್ತಿದೆ. ಜೊತೆಗೆ ಕ್ರೀಡಾಪಟುಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಶೇ. 3ರಷ್ಟು ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದರು.
ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಆರ್. ಶಂಕರ್, ಹಿರಿಯ ದೈಹಿಕ ಶಿಕ್ಷಣ ಶಿಕ್ಷಕರಾದ ಚಿಕ್ಕ ಬಸವಯ್ಯ, ಜಿಲ್ಲೆಯ ಶಿಕ್ಷಕರ ಸಂಘóಗಳ ಪದಾಧಿಕಾರಿಗಳು, ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು, ಇತರರು ಕಾರ್ಯಕ್ರಮದಲ್ಲಿ ಇದ್ದರು.