ಜನಪರ ಆಡಳಿತ ನಮ್ಮ ಬದ್ಧತೆ – ಡಾ. ಯತೀಂದ್ರ ಸಿದ್ದರಾಮಯ್ಯ.

ಮೈಸೂರು: “ಅಧಿಕಾರ ಮತ್ತು ಸರ್ಕಾರ ಇರುವುದು ಜನಸಾಮಾನ್ಯರಿಗಾಗಿ. ಜನರ ಸಮಸ್ಯೆಗಳನ್ನು ಕಚೇರಿಗಳ ಕಡತಗಳಲ್ಲಿ ಸಿಲುಕಿಸಿ ವಿಳಂಬ ಮಾಡದೆ, ಅಧಿಕಾರಿಗಳೇ ಜನರ ಬಳಿಗೇ ತೆರಳಿ ಅವರ ಸಮಸ್ಯೆ ಆಲಿಸಿ ತ್ವರಿತವಾಗಿ ಪರಿಹರಿಸುವುದು ನಮ್ಮ ಸರ್ಕಾರದ ಮುಖ್ಯ ಬದ್ಧತೆಯಾಗಿದೆ” ಎಂದು ನಗರಾಭಿವೃದ್ಧಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ತಿಳಿಸಿದರು.

ಇಂದು ಮೈಸೂರು ಜಿಲ್ಲೆಯ ಹುಣಸೂರಿನ ಬಿ.ಆರ್. ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ‘ಪ್ರಜಾಸೇವಾ’ ಅಭಿಯಾನಕ್ಕೆ ಚಾಲನೆ ನೀಡಿ, ಸಾರ್ವಜನಿಕರಿಂದ ನೇರವಾಗಿ ಅಹವಾಲುಗಳನ್ನು ಸ್ವೀಕರಿಸಿ ಮಾತನಾಡಿದ ಸಚಿವರು ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ. ಶಿವಕುಮಾರ್ ಅವರ ದೂರದೃಷ್ಟಿ ಮತ್ತು ಸಕ್ರಿಯ ನಾಯಕತ್ವದಲ್ಲಿ ರೂಪುಗೊಂಡಿರುವ ‘ಪ್ರಜಾಸೇವಾ’ ಅಭಿಯಾನವು ಸರ್ಕಾರ ಹಾಗೂ ಸಾರ್ವಜನಿಕರ ನಡುವಿನ ಅಂತರವನ್ನು ಮತ್ತಷ್ಟು ಹತ್ತಿರಗೊಳಿಸುವ ಮಹತ್ವದ ಜನಪರ ಹೆಜ್ಜೆಯಾಗಿದೆ. ‘ಅಹವಾಲು ನಿಮ್ಮದು, ಪರಿಹಾರ ನಮ್ಮದು’ ಎನ್ನುವ ತತ್ವದಡಿ ಪ್ರತಿಯೊಬ್ಬ ನಾಗರಿಕನ ಧ್ವನಿಗೆ ಸ್ಪಂದಿಸುವುದು ನಮ್ಮ ಗುರಿ ಎಂದರು.

ಈ ಅಭಿಯಾನವು ಕೇವಲ ಒಂದು ದಿನಕ್ಕೆ ಸೀಮಿತವಾಗುವುದಿಲ್ಲ. ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರದಂದು ಜನಸ್ಪಂದನಾ ಸರಣಿ ಕಾರ್ಯಕ್ರಮಗಳು ನಡೆಯಲಿವೆ. ಸಾರ್ವಜನಿಕರು ತಮ್ಮ ಜಮೀನು, ಖಾತಾ, ಪಿಂಚಣಿ, ಮೂಲಸೌಕರ್ಯ ಹಾಗೂ ಇತರೆ ಯಾವುದೇ ಕುಂದುಕೊರತೆಗಳಿದ್ದರೆ ನೇರವಾಗಿ ಅರ್ಜಿ ಸಲ್ಲಿಸಬಹುದು ಎಂದು ತಿಳಿಸಿದರು.

ಸಾರ್ವಜನಿಕರು ನೀಡುವ ಅರ್ಜಿಗಳಿಗೆ ಕಾಲಮಿತಿಯೊಳಗೆ ಸೂಕ್ತ ಪರಿಹಾರ ಒದಗಿಸಬೇಕು, ಯಾವುದೇ ಕಾರಣಕ್ಕೂ ಸಾರ್ವಜನಿಕರನ್ನು ಅಲೆದಾಡಿಸಬಾರದು” ಎಂದು ಸ್ಥಳದಲ್ಲಿದ್ದ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ನೂರಾರು ಸಾರ್ವಜನಿಕರು ನೀಡಿದ ಅರ್ಜಿಗಳನ್ನು ಖುದ್ದಾಗಿ ಸ್ವೀಕರಿಸಿದ ಸಚಿವರು, ಸ್ಥಳದಲ್ಲೇ ಪರಿಹರಿಸಬಹುದಾದ ತುರ್ತು ಕುಂದುಕೊರತೆಗಳಿಗೆ ತಕ್ಷಣವೇ ಸ್ಪಂದಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕುಡಿಯುವ ನೀರು, ಒಳಚರಂಡಿ ಹಾಗೂ ಮೂಲಸೌಕರ್ಯ ಯೋಜನೆಗಳ ಕುರಿತು ಪ್ರತ್ಯೇಕ ತಾಂತ್ರಿಕ ವರದಿಗಳನ್ನು ಸಿದ್ಧಪಡಿಸಿ ಶೀಘ್ರ ಅನುಷ್ಠಾನಗೊಳಿಸಲು ವೇಗ ನೀಡಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಹುಣಸೂರು ಶಾಸಕರಾದ ಶ್ರೀ ಜಿ.ಡಿ. ಹರೀಶ್ ಗೌಡ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಯುಕೇಶ್ ಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಮಲ್ಲಿಕಾರ್ಜುನ ಬಾಲದಂಡಿ, ಮಾಜಿ ಶಾಸಕರಾದ ಶ್ರೀ ಹೆಚ್.ಪಿ. ಮಂಜುನಾಥ್, ಅಪರ ಜಿಲ್ಲಾಧಿಕಾರಿ ಶ್ರೀಮತಿ ಐಶ್ವರ್ಯ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪಾ ಅಮರನಾಥ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸೀಮಾ ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *