ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ 144ನೇ ದಿನವೂ ಕೂಡಾ ಪ್ರತಿಭಟನೆಯನ್ನು ಮುಂದುವರೆಸಿದರು.
144ದಿನಗಳಿಂದಲೂ ನಿರಂತರವಾಗಿ ಪ್ರತಿನಿತ್ಯ ಪ್ರತಿಭಟನೆ ನಡೆಯುತ್ತಿದ್ದು, ಇಂದು ಕೂಡಾ ಹೆದ್ದಾರಿಯನ್ನು ತಡೆದು ಕರ್ನಾಟಕ ಸೇನಾ ಪಡೆದ ಕಾರ್ಯಕರ್ತರು ಪ್ರತಿಭಟಿಸಿದರು.
ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ಕೇಂದ್ರ ಸರ್ಕಾರ, ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ಸೇರಿದಂತೆ ರಾಜ್ಯದ ಸಂಸದರು, ಕೇಂದ್ರ ಸಚಿವರು, ರಾಜ್ಯ ಸಚಿವರ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿದರು.
ಅಪಾರವಾದ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಮಳೆಯು ಕೈ ಕೊಟ್ಟಿದೆ. ಇಂತಹ ಪರಿಸ್ಥಿತಿಯಲ್ಲೂ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ರಾಜ್ಯದಲ್ಲಿರುವ ಸಂಸತ್ ಸದಸ್ಯರು ನಿದ್ದೆಯಿಂದ ಮೇಲೆದ್ದು, ಈ ವಿಚಾರದಲ್ಲಿ ಸಂಸತ್‍ನಲ್ಲಿ ಧ್ವನಿ ಎತ್ತಬೇಕು. ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಕಾವೇರಿ ನಿರ್ವಹಣಾ ಮಂಡಳಿಯನ್ನು ರದ್ದುಗೊಳಿಸುವ ಮೂಲಕ ರಾಜ್ಯಕ್ಕೆ ನ್ಯಾಯ ದೊರಕಿಸಬೇಕು. ತಕ್ಷಣ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುವುದನ್ನು ನಿಲ್ಲಿಸದಿದ್ದರೇ ಉಗ್ರವಾದ ಹೋರಾಟವನ್ನು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಚಾ.ವೆಂ.ರಾಜ್‍ಗೋಪಾಲ್, ವೀರಭದ್ರ, ತಾಂಡವಮೂರ್ತಿ, ಡ್ಯಾನ್ಸ್ ಬಸವರಾಜು, ಸಿ.ಎಂ.ಕೃಷ್ಣಮೂರ್ತಿ ಇನ್ನಿತರರಿದ್ದರು.