- ಚರ್ಮಗಂಟು ರೋಗ ನಿಯಂತ್ರಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿ – ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
ಬೆಂಗಳೂರು : ಪಶುಸಂಗೋಪನೆ ಹಾಗೂ ರೇಷ್ಮೆ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರು ಇಂದು ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಗೆ ಭೇಟಿ ನೀಡಿ, ಸಂಸ್ಥೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಇಲಾಖೆಯ ಕಾರ್ಯಚಟುವಟಿಕೆಗಳ ಕುರಿತು ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯು ರಾಜ್ಯದಲ್ಲಿ ಸ್ಥಾಪನೆಯಾದ ಮೊದಲ ಪ್ರಾಣಿ ಲಸಿಕಾ ಸಂಸ್ಥೆಯಾಗಿದ್ದು, ರಾಜ್ಯದಾದ್ಯಂತ ಜಾನುವಾರುಗಳಿಗೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡದಂತೆ ಮುನ್ನೆಚ್ಚರಿಕೆ ವಹಿಸಬೇಕು. ರೋಗಗಳ ನಿಯಂತ್ರಣಕ್ಕಾಗಿ ಅಗತ್ಯವಿರುವ ಲಸಿಕೆಗಳನ್ನು ಸಮರ್ಪಕವಾಗಿ ಪೂರೈಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ರಾಜ್ಯದಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗದ ಸಮಸ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರೋಗ ಹರಡುವುದನ್ನು ತಡೆಗಟ್ಟಲು ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ರೋಗ ನಿಯಂತ್ರಣಕ್ಕೆ ಅಗತ್ಯವಿರುವ ಲಸಿಕೆ, ಔಷಧೋಪಚಾರ ಹಾಗೂ ಮುನ್ನೆಚ್ಚರಿಕೆ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು. ಜಾನುವಾರುಗಳ ಆರೋಗ್ಯ ರಕ್ಷಣೆಯ ವಿಚಾರದಲ್ಲಿ ಯಾವುದೇ ನಿರ್ಲಕ್ಷ್ಯ ತೋರದೆ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಪಶು ವೈದ್ಯಕೀಯ ಸೇವೆಗಳ ಆಯುಕ್ತರಾದ ಲಿಂಗರಾಜು, ಸಚಿವರ ಆಪ್ತ ಕಾರ್ಯದರ್ಶಿ ಡಾ. ರಾಜೀವ್ ಎನ್ ಕೊಲೇರ ಸೇರಿದಂತೆ ಸಂಸ್ಥೆಯ ವೈದ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.
