ಜೂನ್ 28ರಂದು ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ : ಅಗತ್ಯ ಸಿದ್ದತೆಗೆ ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ: ಜಿಲ್ಲೆಯಾದ್ಯಂತ ಜೂನ್ 28ರಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಇದಕ್ಕಾಗಿ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಶ್ರೀರೂಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

  ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ನಡೆದ ಜಿಲ್ಲಾ ಲಸಿಕಾ ಟಾಸ್ಕ್ ಪೋರ್ಸ್‍ನ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

  ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮದ ಅಂಗವಾಗಿ ಜೂನ್ 28ರಂದು ಆಗತಾನೆ ಹುಟ್ಟಿದ ಮಗುವಿನಿಂದ 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಪೋಲಿಯೋ ಲಸಿಕೆ ಹಾಕಲಾಗುತ್ತದೆ. ಈ ಬಾರಿಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 58775 ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಪೋಲಿಯೋ ಹನಿಯಿಂದ ಯಾವುದೇ ಮಗು ವಂಚಿತವಾಗದಂತೆ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನೋಡಿಕೊಳ್ಳಬೇಕು. ಕಾರ್ಯಕ್ರಮ ಯಶಸ್ಸಿಗೆ ಆರೋಗ್ಯ ಇಲಾಖೆಗೆ ಎಲ್ಲಾ ಇಲಾಖೆಗಳು ಸಹಕಾರ ನೀಡುವಂತೆ ಜಿಲ್ಲಾಮಟ್ಟದ ಎಲ್ಲಾ ಇಲಾಖಾಧಿಕಾರಿಗಳಿಗೆ ಸೂಚಿಸಿದರು.  

  ಜೂನ್ 28ರಂದು ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜೂನ್ 29ರಿಂದ 30ರವರೆಗೆ ಗ್ರಾಮೀಣ ಪ್ರದೇಶ ಹಾಗೂ ಜೂನ್ 29ರಿಂದ ಜುಲೈ 1ರವರೆಗೆ ನಗರ ಪ್ರದೇಶದ ಮನೆಮನೆಗಳಿಗೆ ಆರೋಗ್ಯ ಕಾರ್ತಕರ್ತರು ಭೇಟಿ ನೀಡಿ ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲಿದ್ದಾರೆ. ನಗರ ಪ್ರದೇಶದಲ್ಲಿ 93 ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 519 ಸೇರಿದಂತೆ ಒಟ್ಟು 612 ಬೂತ್ ಗಳನ್ನು ತೆರೆಯಲಾಗುತ್ತದೆ. ಬಸ್, ರೈಲ್ವೆ ನಿಲ್ದಾಣ ಸೇರಿದಂತೆ ಇತರೆ ಜನನಿಬಿಡ ಸ್ಥಳಗಳಲ್ಲಿ 25 ಟ್ರ್ಯಾನ್ಸಿಟ್ ಬೂತ್ ಗಳನ್ನು ತೆರಯಲಾಗುವುದು ಎಂದು ಜಿಲ್ಲಾಧಿಕಾರಿಯವರು ತಿಳಿಸಿದರು.

  ಜಿಲ್ಲೆಯ ಎಲ್ಲಾ ಶಾಲೆಗಳು ಹಾಗೂ ಅಂಗನವಾಡಿಗಳಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮದ ಬಗ್ಗೆ ವ್ಯಾಪಕ ಅರಿವು ಮೂಡಿಸಬೇಕು. ಶಾಲೆಗಳಲ್ಲಿ ಪ್ರಾರ್ಥನಾ ಸಮಯದಲ್ಲಿ ಶಿಕ್ಷಕರು ಮಕ್ಕಳಿಗೆ ಪೋಲಿಸಿ ಲಸಿಕೆ ಕುರಿತು ಮಾಹಿತಿ ನೀಡಬೇಕು. ಪ್ರತಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಕಾರ್ಯಕ್ರಮಕ್ಕೆ ಅವಶ್ಯ ಸಹಕಾರ ನೀಡಬೇಕು. ಎಲ್ಲಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳ ನೇತೃತ್ವದಲ್ಲಿ ತಾಲೂಕುಮಟ್ಟದ ಅನುಷ್ಠಾನ ಸಮಿತಿ ರಚಿಸಬೇಕು. ಅಂಗನವಾಡಿ, ಆಶಾ ಹಾಗೂ ಸ್ತ್ರೀಶಕ್ತಿ ಮತ್ತು ಸ್ವಸಹಾಯ ಗುಂಪುಗಳ ಸದಸ್ಯರನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯಕ್ರಮ ಅಚ್ಚುಕಟ್ಟು ನಿರ್ವಹಣೆಗೆ ಮುಂದಾಗುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

  ಜಿಲ್ಲೆಯ ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಮಕ್ಕಳು, ಇತರೆ ರಾಜ್ಯಗಳಿಂದ ವಲಸೆ ಬಂದಿರುವ ಕಾರ್ಮಿಕರ ಮಕ್ಕಳು, ಕಾಡಂಚಿನ ಗ್ರಾಮಗಳ ಹಾಗೂ ಅರಣ್ಯವಾಸಿಗಳ ಮಕ್ಕಳು ಪೋಲಿಯೋ ಹನಿಯಿಂದ ವಂಚಿತರಾಗಬಾರದು. ಇದಕ್ಕಾಗಿ ಈಗಿನಿಂದಲೇ ಪೂರ್ವಸಿದ್ದತಾ ಕಾರ್ಯಗಳನ್ನು ಕೈಗೊಳ್ಳಬೇಕು. ಪೋಲಿಯೋ ಹನಿ ಕಾರ್ಯಕ್ರಮದ 4 ದಿನಗಳ ಕಾಲ ನಿರಂತರ ವಿದ್ಯುತ್ ಸೌಲಭ್ಯ ಒದಗಿಸಬೇಕು. ಬೂತ್‍ಗಳಲ್ಲಿ ಲಸಿಕಾ ಕಾರ್ಯ ನಿರ್ವಹಿಸುವ ಕಾರ್ಯಕರ್ತರಿಗೆ ಅವಶ್ಯ ತರಬೇತಿ ನೀಡಬೇಕು. ಒಟ್ಟಾರೆ ಕಾರ್ಯಕ್ರಮದ ಯಶಸ್ಸಿಗೆ ಜಿಲ್ಲಾ ಎಲ್ಲಾ ನಗರ, ಸ್ಥಳೀಯ ಸಂಸ್ಥೆಗಳು ಹಾಗೂ ಎಲ್ಲಾ ಇಲಾಖೆಗಳ ಸಹಕಾರ ಹಾಗೂ ಸಮನ್ವಯತೆ ಅಗತ್ಯವಾಗಿ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು.

  ಇದೇ ವೇಳೆ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಚಿದಂಬರ ಅವರು ಭಾರತ ಪೋಲಿಯೋ ಮುಕ್ತ ರಾಷ್ಟ್ರವಾಗಿದ್ದು, ದೇಶದ ಯಾವುದೇ ಭಾಗದಲ್ಲಿ ಪೋಲಿಯೋ ಪ್ರಕರಣ ಕಂಡುಬಂದಿಲ್ಲ. ಆದರೂ ನೆರೆಯ ದೇಶಗಳಾದ ಪಾಕಿಸ್ತಾನ ಹಾಗೂ ಅಫ್ಘಾನಿಸ್ತಾನ ದೇಶಗಳಲ್ಲಿ ಇನ್ನೂ ಪೋಲಿಯೋ ಪ್ರಕರಣಗಳು ಇರುವುದರಿಂದ ಮುನ್ನೆಚ್ಚರಿಕೆಯಾಗಿ ದೇಶದ್ಯಾಂತ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದರು.

  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಉಪ ವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಖೆ ಉಪನಿರ್ದೇಶಕರಾದ ಸುರೇಶ್, ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ಪ್ರಾದೇಶಿಕ ಸಾರಿಗೆ ಅಧಿಕಾರಿ ಗಾಯಿತ್ರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *