ಚಾಮರಾಜನಗರ: ಗಡಿ ಭಾಗವಾದ ಚಾಮರಾಜನಗರ ಜಿಲ್ಲೆಯಲ್ಲಿ ರಂಗ ಚಟುವಟಿಕೆಗಳನ್ನು ನಿರಂತರವಾಗಿ ಜೀವಂತವಾಗಿಡುವಲ್ಲಿ ರಂಗತರಂಗ ಕಲಾವಿದರ ಪಾತ್ರ ಅನನ್ಯವಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಎಸ್. ರಾಜು ಹೇಳಿದರು.

ನಗರದ ಡಾ. ರಾಜಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ರಂಗತರಂಗ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿರುವ ಎರಡು ದಿನಗಳ ರಂಗಾಯಣ ನಾಟಕೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಚಾಮರಾಜನಗರ ಜಿಲ್ಲೆ ಸಾಂಸ್ಕೃತಿಕವಾಗಿ ಶ್ರೀಮಂತವಾಗಿದ್ದು, ಈ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಕಲಾವಿದರು ಮತ್ತು ಸಾಂಸ್ಕೃತಿಕ ಸಂಘಟನೆಗಳ ಮೇಲಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಕಲಾವಿದರಿಗೆ ಹಲವು ಸೌಲಭ್ಯಗಳು ಲಭ್ಯವಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ರಂಗತರಂಗ ಟ್ರಸ್ಟ್ ಅಧ್ಯಕ್ಷ ಸೋಮಶೇಖರ ಬಿಸಲ್ವಾಡಿ ಮಾತನಾಡಿ, ರಂಗತರಂಗ ಸಾಂಸ್ಕೃತಿಕ ಸಂಘಟನೆಯು ಕಳೆದ 34 ವರ್ಷಗಳಿಂದ ರಾಜ್ಯದಾದ್ಯಂತ ಹಲವು ಕಾರ್ಯಕ್ರಮಗಳನ್ನು ಸಂಘಟಿಸುವ ಮೂಲಕ ಜನಮನ್ನಣೆ ಗಳಿಸಿದೆ. ಈವರೆಗೆ ಏಳು ನಾಟಕೋತ್ಸವಗಳನ್ನು ಆಯೋಜಿಸಿ, ಅನೇಕ ಕಲಾವಿದರಿಗೆ ವೇದಿಕೆ ಕಲ್ಪಿಸಲಾಗಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಹಿರಿಯ ಕಲಾವಿದರಾದ ಸಿ. ಪುಷ್ಪ ಸೋಮಸುಂದರ್, ಸುರೇಶ್ ನಾಡಿಗ್ ಹರದನಹಳ್ಳಿ, ಆರ್. ಮೂರ್ತಿ ಹಾಗೂ ಎಂ. ಶಿವರಾಮು ಅವರನ್ನು ರಂಗಗೌರವ ನೀಡಿ ಸನ್ಮಾನಿಸಲಾಯಿತು.
ನಂತರ ಸತೀಶ್ ತಿಪಟೂರು ರಚನೆಯ ‘ಮೈ ಫ್ಯಾಮಿಲಿ’ ನಾಟಕವನ್ನು ರಂಗಾಯಣದ ಕಲಾವಿದರು ಪ್ರದರ್ಶಿಸಿದರು. ನಾಟಕೋತ್ಸವಕ್ಕೆ ರಂಗಾಸಕ್ತರು ಹಾಗೂ ಸಾರ್ವಜನಿಕರು ಉತ್ತಮ ಪ್ರತಿಕ್ರಿಯೆ ವ್ಯಕ್ತಪಡಿಸಿದರು.
