ಜುಲೈ 11ರಂದು ರಾಷ್ಟ್ರೀಯ ಲೋಕ ಅದಾಲತ್ : ಬಾಕಿ ಪ್ರಕರಣಗಳ ಇತ್ಯರ್ಥಕ್ಕೆ ಸುವರ್ಣಾವಕಾಶ- ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ

ಚಾಮರಾಜನಗರ: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜಿಲ್ಲೆಯಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ರಾಜಿಯಾಗಬಹುದಾದ ಬಾಕಿ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ನಾಗರಿಕರಿಗೆ ಇದೊಂದು ಸುವರ್ಣಾವಕಾಶವಾಗಿದೆ ಎಂದು ಜಿಲ್ಲಾ ಪ್ರಧಾನ ಸೆಷೆನ್ಸ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರಾದ ಜಿ. ಪ್ರಭಾವತಿ ಅವರು ತಿಳಿಸಿದರು.

  ನಗರದ ಜಿಲ್ಲಾ ನ್ಯಾಯಾಲಯದಲ್ಲಿರುವ ಎ.ಡಿ.ಆರ್ ಕಟ್ಟಡದ ಸಭಾಂಗಣದಲ್ಲಿಂದು ನಡೆದ ಪತ್ರಿಕಾ ಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಿಲ್ಲಾ ಪ್ರಧಾನ ಸೆಷೆನ್ಸ್ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು 2026ರ ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್, ಅಲ್ಲದೆ ಲಿಖಿತ ವರ್ಗಾವಣೆ ಕಾಯ್ದೆ ಕಲಂ 138ರ ಪ್ರಕರಣಗಳ ಇತ್ಯರ್ಥಕ್ಕಾಗಿ ಜುಲೈ 18 ಹಾಗೂ ನವೆಂಬರ್ 21ರಂದು ವಿಶೇಷ ಲೋಕ್ ಅದಾಲತ್ ಮತ್ತು ಸರ್ವೋಚ್ಛ ನ್ಯಾಯಾಲಯದಲ್ಲಿ ಬಾಕಿ ಇರುವ ಜಿಲ್ಲೆಯ ಪ್ರಕರಣಗಳ ಇತ್ಯರ್ಥಕ್ಕಾಗಿ ಆಗಸ್ಟ್ 21ರಿಂದ 23ರವರೆಗೆ ಸಮಧಾನ್ ಸಮಾರೋಹ್ ಕುರಿತ ವಿಶೇಷ ಲೋಕ್ ಅದಾಲತ್ ನಡೆಸಲಾಗುತ್ತದೆ ಎಂದರು.   

   ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ನ್ಯಾಯಾಲಯಗಳಲ್ಲಿ ಜುಲೈ 11ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಪ್ರತಿವರ್ಷ 3 ತಿಂಗಳಿಗೊಮ್ಮೆ ನಡೆಯುವ ಲೋಕ್ ಅದಾಲತ್‍ಗಳ ಪೈಕಿ ಇದು ಈ ಸಾಲಿನ 2ನೇ ಅದಾಲತ್ ಆಗಿದೆ. ಕಳೆದ ಬಾರಿಯ ಲೋಕ್ ಅದಾಲತ್‍ನಲ್ಲಿ 85,907 ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಈ ಬಾರಿಯ 2ನೇ ಲೋಕ್ ಅದಾಲತ್‍ನಲ್ಲಿ ಇನ್ನೂ ಹೆಚ್ಚಿನ ಗುರಿ ಹೊಂದಲಾಗಿದೆ. ಅದಾಲತ್‍ನಲ್ಲಿ ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರ ಪ್ರಕರಣಗಳ ಇತ್ಯರ್ಥಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತದೆ ಎಂದು ಜಿಲ್ಲಾ ನ್ಯಾಯಾಧೀಶರು ತಿಳಿಸಿದರು.

   ಲಿಖಿತ ವರ್ಗಾವಣೆ ಕಾಯ್ದೆ ಕಲಂ 138ರಡಿ ಬಾಕಿ ಇರುವ ಚೆಕ್ ಅಮಾನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಜುಲೈ 18 ಹಾಗೂ ನವೆಂಬರ್ 21ರಂದು ವಿಶೇಷ ಲೋಕ ಅದಾಲತ್ ನಡೆಯಲಿದೆ. ಅಲ್ಲದೆ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳ ಇತ್ಯರ್ಥಕ್ಕಾಗಿ ಸಮಧಾನ್ ಸಮಾರೋಹ್ ಘೋಷವಾಕ್ಯದಡಿ ಆಗಸ್ಟ್ 21ರಿಂದ 23ರವರೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳಲ್ಲಿ ವಿಶೇಷ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತದೆ ಎಂದರು.

   ಸಮಧಾನ್ ಸಮಾರೋಹ್ ಕುರಿತ ವಿಶೇಷ ಲೋಕ್ ಅದಾಲತ್‍ನಡಿ ಸರ್ವೋಚ್ಚ ನ್ಯಾಯಾಲಯದಲ್ಲಿ ಬಾಕಿ ಇರುವ ಜಿಲ್ಲೆಯ 5 ಪ್ರಕರಣಗಳನ್ನು ಈಗಾಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ವರ್ಗಾಯಿಸಿದ್ದು, ಇತ್ಯರ್ಥಗೊಳಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ. ಸಮಧಾನ್ ಸಮಾರೋಹ್ ಕುರಿತ ವಿಶೇಷ ಲೋಕ್ ಅದಾಲತ್ ಜಿಲ್ಲೆಯಲ್ಲಿಯೇ ನಡೆಯುತ್ತಿರುವುದರಿಂದ ಪ್ರಕರಣಗಳನ್ನು ನಡೆಸುತ್ತಿರುವ ಜಿಲ್ಲೆಯ ಉಭಯ ಪಕ್ಷಕಾರರಿಗೆ ನೆರವಾಗಲಿದೆ. ಸಿವಿಲ್, ಕ್ರಿಮಿನಲ್ ಪಿ.ಎಲ್.ಸಿ ಪ್ರಕರಣಗಳ ಸುಗಮ ಇತ್ಯರ್ಥಕ್ಕಾಗಿ ನ್ಯಾಯಾಧೀಶರು, ವಕೀಲರು, ಮಧ್ಯಸ್ಥಿಕೆದಾರರು, ಪ್ಯಾನಲ್ ವಕೀಲರು, ಸರ್ಕಾರಿ ಇಲಾಖೆಗಳ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳ ಸಹಕಾರ ಅವಶ್ಯವಾಗಿದೆ ಎಂದು ನ್ಯಾಯಾಧೀಶರು ಹೇಳಿದರು.   

  ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ಸಾಲ ವಸೂಲಾತಿ, ಕೈಗಾರಿಕಾ ಮತ್ತು ಕಾರ್ಮಿಕ ವೇತನ ವಿವಾದಗಳು, ಗ್ರಾಹಕ ವೇದಿಕೆ ಪ್ರಕರಣಗಳು, ರಿಯಲ್ ಎಸ್ಟೇಟ್, ಚೆಕ್ ಅಮಾನ್ಯ, ಮೋಟಾರು ವಾಹನ ಅಪಘಾತ ಪರಿಹಾರ, ವಿದ್ಯುತ್ ಹಾಗೂ ನೀರಿನ ಶುಲ್ಕ, ಭೂಸ್ವಾಧೀನ, ಪಿಂಚಣಿ, ವೇತನ ಭತ್ಯೆ ಹಾಗೂ ಕುಟುಂಬ ನ್ಯಾಯಾಲಯದ (ವಿವಾಹ ವಿಚ್ಛೇದನ ಹೊರತುಪಡಿಸಿ) ಪ್ರಕರಣಗಳು ಸೇರಿದಂತೆ ವಿವಿಧ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗುವುದು. ಪ್ರಕರಣಗಳ ಇತ್ಯರ್ಥಕ್ಕಾಗಿ ಚಾಮರಾಜನಗರದ ಎಡಿಆರ್ ಕಟ್ಟಡದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಲ್ಲಿ ಈಗಾಗಲೇ ಪೂರ್ವಭಾವಿ ಸಮಾಲೋಚನಾ ಕೇಂದ್ರವನ್ನು ತೆರೆಯಲಾಗಿದೆ ಎಂದರು.

  ಅದಾಲತ್‍ಗೆ ಸಂಬಂಧಿಸಿದಂತೆ ಈಗಾಗಲೇ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಗಳಲ್ಲಿ ಪ್ರತಿದಿನ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುತ್ತಿದ್ದು, ಈ ಮೂಲಕವು ಸಹ ನಾಗರಿಕರು ಅರ್ಜಿ ಸಲ್ಲಿಸಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು. ರಾಜಿ ಸಂಧಾನದ ಮೂಲಕ ಪ್ರಕರಣ ಇತ್ಯರ್ಥಗೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಿದ ಶುಲ್ಕವನ್ನು ಸಂಪೂರ್ಣವಾಗಿ ಮರುಪಾವತಿಸಲಾಗುತ್ತದೆ. ಅಲ್ಲದೆ ಉಭಯ ಪಕ್ಷಗಳ ಒಪ್ಪಿಗೆಯೊಂದಿಗೆ ಪ್ರಕರಣಗಳಿಗೆ ಶಾಶ್ವತ ಪರಿಹಾರ ದೊರೆಯುವುದರಿಂದ ಸಮಯ ಹಾಗೂ ವೆಚ್ಚ ಉಳಿತಾಯವಾಗಲಿದೆ ಎಂದು ತಿಳಿಸಿದರು. 

   ಸಾರ್ವಜನಿಕರು ಆನ್‍ಲೈನ್, ವಿಡಿಯೊ ಕಾನ್ಫರೆನ್ಸ್, ಇ-ಮೇಲ್, ಎಸ್‍ಎಂಎಸ್, ವಾಟ್ಸ್‍ಆಪ್ ಅಥವಾ ಖುದ್ದಾಗಿ ಹಾಜರಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಯಳಂದೂರು, ಕೊಳ್ಳೇಗಾಲ ಮತ್ತು ಗುಂಡ್ಲುಪೇಟೆ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಪ್ರಕರಣಗಳನ್ನು ಲೋಕ್ ಅದಾಲತ್‍ಗೆ ದಾಖಲಿಸಬಹುದಾಗಿದೆ. 

ಹೆಚ್ಚಿನ ಮಾಹಿತಿಗಾಗಿ ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರದ ಸಹಾಯವಾಣಿ 15100, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ 1800-425-90900 ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಚಾಮರಾಜನಗರದ 08226-226022 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ನ್ಯಾಯಾಧೀಶರಾದ ಜಿ. ಪ್ರಭಾವತಿ ಅವರು ತಿಳಿಸಿದರು.

  ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಈಶ್ವರ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ರಾಮಸಮುದ್ರ ಪುಟ್ಟಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Leave a Reply

Your email address will not be published. Required fields are marked *