ಚಾಮರಾಜನಗರ: ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ವಿವರವಾಗಿ ಪರಿಶೀಲಿಸಲಾಯಿತು.
ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿಂದು ನಡೆದ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಅವರು ಪಾಲ್ಗೊಂಡು ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ವಿವರವಾದ ಮಾಹಿತಿ ಪಡೆದರು ಹಾಗೂ ಅಗತ್ಯ ಸೂಚನೆಗಳನ್ನು ಅಧಿಕಾರಿಗಳಿಗೆ ನೀಡಿದರು.
ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳ ಸೌಲಭ್ಯಗಳು ತಲುಪಿಸುವಲ್ಲಿ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸುವಂತೆ ಸೂಚಿಸಿದರು.
ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಪುಷ್ಪ ಅಮರನಾಥ್ ಅವರು ಮಾತನಾಡಿ ಪಾರದರ್ಶಕವಾಗಿ ಯೋಜನೆ ನಿರ್ವಹಣೆಯಾಗಬೇಕು ಎಂಬ ನಿಟ್ಟಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದಂತೆ ಪರಿಷ್ಕರಣೆ ಪ್ರಕ್ರಿಯೆ ನಡೆದಿದೆ. ಇದೇ ರೀತಿ ಗೃಹ ಜ್ಯೋತಿ ಯೋಜನೆಯ ಸರ್ವೆ ಸಹ ನಡೆಯುತ್ತಿದೆ. ಇದರ ಪ್ರಗತಿ ಕಾರ್ಯ ತ್ವರಿತವಾಗಿ ಆಗಬೇಕು. ಪಂಚಾಯಿತಿ ಹಾಗೂ ವಾರ್ಡ್‍ವಾರು ಗ್ಯಾರಂಟಿ ಯೋಜನೆ ಸಮಿತಿಗಳ ರಚನೆ ಬೇಗ ಆಗಬೇಕು ಎಂದು ತಿಳಿಸಿದರು.
ಶಕ್ತಿ, ಅನ್ನಭಾಗ್ಯ, ಯುವನಿಧಿ, ಯೋಜನೆಗಳ ಪ್ರಗತಿಯನ್ನು ಸುಧೀರ್ಘವಾಗಿ ಪರಾಮರ್ಶಿಸಲಾಯಿತು.
ಶಾಸಕರಾದ ಎ.ಆರ್. ಕೃಷ್ಣಮೂರ್ತಿ, ಹೆಚ್.ಎಂ. ಗಣೇಶ್ ಪ್ರಸಾದ್, ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ವಿ. ಚಂದ್ರು, ಚೂಡಾ ಅಧ್ಯಕ್ಷರಾದ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.
Related