- ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಶಶಿಧರ ಶೆಟ್ಟಿ
ಚಾಮರಾಜನಗರ: ಹೆಚ್ಚುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸಿ ಪ್ರಾಣಹಾನಿ ತಡೆಯಲು ರಾಜ್ಯಾದ್ಯಂತ ಜನವರಿ 1ರಿಂದ ತಿಂಗಳ ಪೂರ್ಣವರೆಗೆ ರಸ್ತೆ ಸುರಕ್ಷತಾ ಜಾಗೃತಿ ಮಾಸಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಜಿಲ್ಲಾ ನ್ಯಾಯಾಧೀಶರಾದ ಹೆಚ್. ಶಶಿಧರ ಶೆಟ್ಟಿ ಅವರು ತಿಳಿಸಿದರು.
ವೀಡಿಯೋ ಕಾನ್ಫರೆನ್ಸ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹಾಗೂ ಜಿಲ್ಲಾ ನ್ಯಾಯಾಧೀಶರಾದ ಹೆಚ್. ಶಶಿಧರ ಶೆಟ್ಟಿ ಅವರು ಪ್ರತಿವರ್ಷ ರಾಜ್ಯದಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸುತ್ತಿದ್ದು, 12 ಸಾವಿರ ಜನರು ಸಾವಿಗೀಡಾಗುತ್ತಿದ್ದಾರೆ. ಅಪಘಾತದಿಂದ ಮನೆಯ ಕುಟುಂಬದ ಸದಸ್ಯರು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ. ಇದರಿಂದ ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರಿಗೆ ಹೆಚ್ಚಿನ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದರು.
ಅಪಘಾತಗಳ ತಡೆಗೆ ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಿದೆ. ರಸ್ತೆ ಸುರಕ್ಷತೆಯ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳುವುದು ಕಾನೂನು ಸೇವೆಗಳ ಪ್ರಾಧಿಕಾರದ ಗುರಿಯಾಗಿದೆ. ಇದಕ್ಕಾಗಿ ಸಾರಿಗೆ ಇಲಾಖೆ, ಪೊಲೀಸ್, ಶಿಕ್ಷಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ವಕೀಲರ ಸಂಘ, ವಿಮಾ ಕಂಪನಿಗಳು, ಎನ್.ಜಿ.ಒಗಳೊಂದಿಗೆ ಜಾಗೃತಿ ಕಾರ್ಯಕ್ರಮಗಳನ್ನು ಜನವರಿ ಮಾಹೆಯಲ್ಲಿ ಪ್ರತಿದಿನ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿಲ್ಲೆಯ ತಾಲೂಕು, ಹೋಬಳಿ ಗ್ರಾಮಗಳಲ್ಲಿ ಪ್ರತಿದಿನ ಒಂದು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲು ತಿಳಿಸಲಾಗಿದೆ. ಶಾಲೆ, ಕಾಲೇಜು, ಆಸ್ಪತ್ರೆ, ಕಮ್ಯುನಿಟಿ ಸೆಂಟರ್, ಪೊಲೀಸ್, ಸಾರಿಗೆ ಇಲಾಖೆ, ಇನ್ನಿತರ ಸಂಸ್ಥೆಗಳಲ್ಲಿ ರಸ್ತೆ ಸುರಕ್ಷತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ವಾಕಥಾನ್, ಸೈಕಲ್ ಜಾಥಾ, ರಸಪ್ರಶ್ನೆ, ಇನ್ನಿತರ ಕಾÀರ್ಯಕ್ರಮಗಳ ಮೂಲಕ ವ್ಯಾಪಕವಾಗಿ ತಿಳಿವಳಿಕೆ ಮೂಡಿಸಲಾಗುತ್ತದೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಹೆಚ್. ಶಶಿಧರ ಶೆಟ್ಟಿ ಅವರು ವಿವರಿಸಿದರು.
ವರ್ಚುವಲ್ ಮೂಲಕ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡ ಬಳಿಕ ನಗರದ ಜಿಲ್ಲಾ ನ್ಯಾಯಾಲಯ ಆವರಣದಲ್ಲಿರುವ ವ್ಯಾಜ್ಯ ಪೂರ್ವ ಪರಿಹಾರ ಕೇಂದ್ರದಲ್ಲಿ ಮಾತನಾಡಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಈಶ್ವರ ಅವರು ಅಪಘಾತಗಳ ಸಂಖ್ಯೆಯನ್ನು ಗಣನೀಯವಾಗಿ ತಗ್ಗಿಸುವ ಉದ್ದೇಶದಿಂದ ಜನರಲ್ಲಿ ಅರಿವು ಮೂಡಿಸಲು ಜಿಲ್ಲೆಯಲ್ಲಿ ಪ್ರತಿದಿನ ಕಾರ್ಯಕ್ರಮಗಳನ್ನು ಏರ್ಪಾಡು ಮಾಡಲಾಗುತ್ತದೆ. ವಿವಿಧ ಇಲಾಖೆಗಳ ಸಹಭಾಗಿತ್ವದೊಂದಿಗೆ ಜಾಗೃತಿ ಕಾರ್ಯಕ್ರಮ ಏರ್ಪಡಿಸಲಾಗುತ್ತಿದೆ ಎಂದರು.
Like this:
Like Loading...
Related