ಚಾಮರಾಜನಗರ: ನಗರದ ಉಪ್ಪಾರ ಸಮುದಾಯ ಭವನದಲ್ಲಿ ಚಾಮರಾಜನಗರ ಜಿಲ್ಲಾ ಶ್ರೀ ಭಗೀರಥ ಅಭಿವೃದ್ಧಿ ಸಹಕಾರ ಸಂಘದ ಕಾರ್ಯಕಾರಿಣಿ ಸಮಿತಿ ಸಭೆಯು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿದ ಸಚಿವರು, ಉಪ್ಪಾರ ಸಮುದಾಯದ ಜನರಿಗೆ ಆರ್ಥಿಕ ನೆರವು ಹಾಗೂ ಸಾಲ ಸೌಲಭ್ಯಗಳನ್ನು ಒದಗಿಸುವ ಉದ್ದೇಶದಿಂದ ಜಿಲ್ಲಾ ಶ್ರೀ ಭಗೀರಥ ಅಭಿವೃದ್ಧಿ ಸಹಕಾರ ಸಂಘವನ್ನು ಸ್ಥಾಪಿಸಲಾಗಿದೆ. ಸಂಘದಿAದ ಸಾಲ ಪಡೆದವರು ಸಕಾಲಕ್ಕೆ ಸಾಲ ಮರುಪಾವತಿ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು. ಇದರಿಂದ ಸಂಘದ ಆರ್ಥಿಕ ಸ್ಥಿತಿ ಸುಧಾರಿಸುವುದರ ಜೊತೆಗೆ ಸಂಘದ ಬೆಳವಣಿಗೆಗೂ ಸಹಕಾರಿಯಾಗಲಿದೆ ಎಂದು ತಿಳಿಸಿದರು.
ಪ್ರಸ್ತುತ ಸಹಕಾರ ಸಂಘದ ವತಿಯಿಂದ 50 ಸಾವಿರ ರೂಪಾಯಿವರೆಗೆ ಕಿರು ಸಾಲ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಸಾಲ ಪಡೆದವರು ಹಣವನ್ನು ಸಮರ್ಪಕವಾಗಿ ಬಳಸಿಕೊಂಡು ಆರ್ಥಿಕ ನಿರ್ವಹಣೆ ಮಾಡಿಕೊಳ್ಳಬೇಕು. ಸಾಲ ಸೌಲಭ್ಯದ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಲಹೆ ನೀಡಿದರು.
ಉಪ್ಪಾರ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಸಂಘದ ಅರ್ಜಿಗಳನ್ನು ಪಡೆದು ನೋಂದಣಿ ಮಾಡಿಸಿಕೊಳ್ಳುವ ಮೂಲಕ ಸಹಕಾರ ಸಂಘದ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಸಚಿವರು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಸಂಘದ ನಿರ್ದೇಶಕರು ಸಚಿವರಾದ ಸಿ.ಪುಟ್ಟರಂಗಶೆಟ್ಟಿ ಅವರನ್ನು ಗೌರವಿಸಿ ಸನ್ಮಾನಿಸಿದರು
ಸಭೆಯಲ್ಲಿ ಸಂಘದ ಉಪಾಧ್ಯಕ್ಷ ಮಹದೇವಶೆಟ್ಟಿ, ನಿರ್ದೇಶಕರಾದ ಗೋವಿಂದಶೆಟ್ಟಿ, ಎಸ್.ಸಿದ್ದಶೆಟ್ಟಿ, ವಿ.ಧರಣೇಶ್, ಶ್ರೀನಿವಾಸ, ಪುಟ್ಟಸ್ವಾಮಿ, ಶಿವಮ್ಮ, ಎಸ್.ರಾಜಮ್ಮ, ಮಹದೇವಮ್ಮ ಹಾಗೂ ಸಹಕಾರ ಇಲಾಖೆಯ ಅಧೀಕ್ಷಕ ಹಾಗೂ ಸಚಿವರ ವಿಶೇಷಾಧಿಕಾರಿ ಎಸ್. ನಾಗೇಶ್ ಉಪಸ್ಥಿತರಿದ್ದರು.
