ಎಸ್.ಐ.ಆರ್ : 5802 ನೋಟಿಸ್‍ಗಳ ವಿಚಾರಣೆ – ಜಿಲ್ಲಾಧಿಕಾರಿ ಶ್ರೀರೂಪ

   ಚಾಮರಾಜನಗರ, ಸೆಪ್ಟೆಂಬರ್ 24 (ಕರ್ನಾಟಕ ವಾರ್ತೆ):- ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಗೆ ಸಂಬಂಧಿಸಿದಂತೆ ಒಟ್ಟಾರೆ 7,480 ಮಂದಿಗೆ ನೋಟಿಸ್ ಜಾರಿಯಾಗಿದ್ದು, ಈ ಪೈಕಿ 5,802 ಮಂದಿಯ ವಿಚಾರಣೆ ನಡೆಸಲಾಗಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. 

   ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿಂದು ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕುರಿತ ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ವೀಕೃತವಾಗಿರುವ ಹಕ್ಕು ಮತ್ತು ಆಕ್ಷೇಪಣೆಗಳ ಬಗ್ಗೆ ಚರ್ಚಿಸಲು ಕರೆಯಲಾಗಿದ್ದ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

  ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ 7,480 ಮಂದಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಈವರೆಗೆ 5,802 ಮಂದಿಯ ವಿಚಾರಣೆ ನಡೆಸಲಾಗಿದೆ. ಇನ್ನೂ 1,678 ಮಂದಿಯ ನೋಟಿಸ್ ವಿಚಾರಣೆ ಮಾತ್ರ ಬಾಕಿ ಇದೆ. ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಎಲ್ಲಾ 65 ನೋಟಿಸ್‍ಗಳ ವಿಚಾರಣೆ ಪೂರ್ಣಗೊಂಡಿದೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ 317, ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 38, ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ 1323 ಅರ್ಜಿಗಳ ವಿಚಾರಣೆ ಬಾಕಿ ಇದೆ. ಇದರ ವಿಚಾರಣೆ ಪ್ರಕ್ರಿಯೆ ತ್ವರಿತವಾಗಿ ನಡೆಯುತ್ತಿದೆ ಎಂದರು. 
    
   ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸೆಪ್ಟೆಂಬರ್ 15 ರಿಂದ 23ರವರೆಗೆ ನಮೂನೆ 6ರಲ್ಲಿ 735,  , ನಮೂನೆ 7ರಲ್ಲಿ 334, ಎಪಿಕ್ ಕಾರ್ಡ್ ಬದಲಾವಣೆ, ತಿದ್ದುಪಡಿ, ಅಂಗವಿಕಲರ ಗುರುತಿಸುವಿಕೆಗಾಗಿ 1594, ವಿಧಾನಸಭಾ ಕ್ಷೇತ್ರದೊಳಗೆ ವಿಳಾಸ ಬದಲಾವಣೆಗೆ 705, ವಿಧಾನಸಭಾ ಕ್ಷೇತ್ರದ ಹೊರಗೆ ವಿಳಾಸ ಬದಲಾವಣೆಗೆ 23 ಸೇರಿದಂತೆ ಒಟ್ಟು 3391 ಅರ್ಜಿಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಧಿಕಾರಿಗಳು ವಿವರಿಸಿದರು.

  ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ ಸೆಪ್ಟೆಂಬರ್ 23 ರಂದು ಕರಡು ಮತದಾರರ ಪಟ್ಟಿಗೆ ಹಕ್ಕು ಆಕ್ಷೇಪಣೆಗಳನ್ನು ಸಲ್ಲಿಸಲು ಅಂತಿಮ ದಿನವಾಗಿದ್ದು, ಈ ಅವಧಿಯು ಮುಕ್ತಾಯಗೊಂಡಿದೆ ಎಂದು ಜಿಲ್ಲಾಧಿಕಾರಿ ಶ್ರೀರೂಪ ಅವರು ತಿಳಿಸಿದರು. 

   ರಾಜಕೀಯ ಪಕ್ಷಗಳ ಪ್ರತಿನಿಧಿಗಳಾದ ಎಸ್. ಬಾಲಸುಬ್ರಹ್ಮಣ್ಯ, ಎಂ. ಸ್ವಾಮಿ, ಎಸ್. ರಾಮಚಂದ್ರ, ಹೆಚ್.ಎಸ್. ತೋಂಟದಾರ್ಯಸ್ವಾಮಿ, ಚುನಾವಣಾ ಶಿರಸ್ತೇದಾರ್ ನಿತ್ಯ, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *