ಚಾಮರಾಜನಗರ: ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಚತಾ ಕಾರ್ಮಿಕರಿಗೆ ಕಾರ್ಮಿಕ ಇಲಾಖೆಯ ಕನಿಷ್ಟ ವೇತನ ಕಾಯ್ದೆಯಡಿ ವೇತನವನ್ನು ಪಾವತಿಸುವಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯರಾದ ಸಿ. ಶಂಕರ ಅಂಕನಶೆಟ್ಟಿಪುರ ಅವರು ಸೂಚನೆ ನೀಡಿದರು.
ನಗರದ ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಯಲ್ಲಿ ಇಂದು ಜಿಲ್ಲೆಯ ಎಲ್ಲ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸ್ವಚ್ಚತಾ ಕಾರ್ಮಿಕರೊಂದಿಗೆ ನೇರ ಸಂವಾದ ಹಾಗೂ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿರುವ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮತ್ತು ಡಿಪೋಗಳಲ್ಲಿ ಸ್ವಚ್ಚತಾ ಕಾರ್ಮಿಕರಿಗೆ 8 ರಿಂದ 10 ಸಾವಿರ ವೇತನ ಮಾತ್ರ ನೀಡಲಾಗುತ್ತಿದೆ. ಇದು ಸರಿಯಲ್ಲ. ಕನಿಷ್ಟ ವೇತನ ಕಾಯ್ದೆಯಡಿ ವೇತನ ಪಾವತಿಸಲೇ ಬೇಕು. ಇಲ್ಲವಾದಲ್ಲಿ ಗಂಭೀರ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕಾರ್ಮಿಕರಿಗೆ ಇಎಸ್‍ಐ, ಪಿಎಫ್, ಆರೋಗ್ಯ ಸೌಲಭ್ಯಗಳನ್ನು ನೀಡಬೇಕು. ಕಾರ್ಮಿಕರ ಸೇವೆ ಒದಗಿಸಿರುವ ಏಜೆನ್ಸಿಗಳು ಈ ತಿಂಗಳಿನಿಂದಲೇ ತಲುಪಿಸಬೇಕಿರುವ ಎಲ್ಲ ಸೌಲಭ್ಯಗಳಿಗೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ನಿಯಮಾನುಸಾರ ಕ್ರಮ ವಹಿಸಲಾಗುವುದು ಎಂದು ತಾಕೀತು ಮಾಡಿದರು.
ಕೊಳ್ಳೇಗಾಲದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಚ್ಚತಾ ಕಾರ್ಮಿಕರನ್ನು ಸಭೆ ಹಾಗೂ ಸಂವಾದಕ್ಕೆ ಕರೆತರದೆ ಕಾರ್ಮಿಕರ ಅಹವಾಲುಗಳ ಆಲಿಕೆಗೆ ಅವಕಾಶ ಮಾಡಿಕೊಡದ ಕೊಳ್ಳೇಗಾಲ ಘಟಕದ ಕೆಎಸ್‍ಆರ್‍ಟಿಸಿ ಅಧಿಕಾರಿಗೆ ನೋಟಿಸ್ ಜಾರಿಗೊಳಿಸುವಂತೆ ಆಯೋಗದ ಸದಸ್ಯರಾದ ಸಿ. ಶಂಕರ ಅಂಕನಶೆಟ್ಟಿಪುರ ಅವರು ಸೂಚಿಸಿದರು.
ಕೆಎಸ್‍ಆರ್‍ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ನಾಗರಾಜು, ತಾಲೂಕು ಘಟಕ ವ್ಯವಸ್ಥಾಪಕರು, ಇತರರು ಸಭೆಯಲ್ಲಿ ಉಪಸ್ಥಿತರಿದ್ದರು.